ಮನೆ ಸಂಪೂರ್ಣ ಹಾನಿಯಾದವರಿಗೆ ಕೂಡಲೇ 5 ಲಕ್ಷ ರೂ. ನೀಡಿ: ದ.ಕ. ಜಿಲ್ಲಾಧಿಕಾರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ವೇಳೆ ಮಳೆಯಿಂದಾಗಿ ಮನೆ ಸಂಪೂರ್ಣ ಹಾನಿಗೊಳಗಾದ ಕುಟುಂಬಕ್ಕೆ ಕೂಡಲೇ 5 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.
ಮಂಗಳೂರು, ಆಗಸ್ಟ್ 1: ಮನೆ ಸಂಪೂರ್ಣ ಹಾನಿಯಾದವರಿಗೆ ಕೂಡಲೇ 5 ಲಕ್ಷ ರೂಪಾಯಿ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ದಕ್ಷಿಣ ಕನ್ನಡ (Dakshina Kannada) ಜಿಲ್ಲಾಧಿಕಾರಿ ಮುಲ್ಲೈ ಮಹಿಲನ್ ಅವರಿಗೆ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸೂಚನೆ ನೀಡಿದರು.
ಮುಖ್ಯಮಂತ್ರಿ ಆದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದೇನೆ ಎಂದು ಹೇಳಿದ ಸಿದ್ದರಾಮಯ್ಯ, ಮುಂಗಾರು ಮಳೆ ಜೂನ್ ನಲ್ಲಿ ಪ್ರಾರಂಭವಾಗಬೇಕಿತ್ತು. ಆದರೆ ಈ ಬಾರಿ ವಾಡಿಕೆಯಷ್ಟು ಮುಂಗಾರು ಸುರಿದಿಲ್ಲ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿದೆ. ಆದರೆ ಜುಲೈನಲ್ಲಿ ವಾಡಿಕೆಗಿಂತ ಶೇ.21 ರಷ್ಟು ಮಳೆ ಜಾಸ್ತಿಯಾಗಿದೆ ಎಂದರು.
ಜಿಲ್ಲೆಯಲ್ಲಿ ಮಳೆ ಜೋರಾಗಿ ಸುರಿದಾಗ ಬರಲು ನನಗೆ ಸಾಧ್ಯವಾಗಿರಲಿಲ್ಲ. ಆಗ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದರು. ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ನೀಡಲಾಗುತ್ತಿದೆ. ಈ ಹಿಂದೆ ಮೂರು ವಿಭಾಗಗಳಾಗಿ ಪರಿಹಾರ ನೀಡಲಾಗುತ್ತಿತ್ತು. ಹಿಂದೆ ಕೊಡಲಾಗುತ್ತಿದ್ದ ಪರಿಹಾರ ರೀತಿ ಹಣವನ್ನು ನೀಡುತ್ತಿಲ್ಲ ಎಂದರು.
ಇದನ್ನೂ ಓದಿ: ಮಂಗಳೂರು; ಅಹವಾಲು ಆಲಿಸದ ಸಿದ್ದರಾಮಯ್ಯ, ಯುಟಿ ಖಾದರ್ ಎದುರು ಕಡಲ್ಕೊರೆತ ಸಂತ್ರಸ್ತರ ಅಸಮಾಧಾನ
ಕಸ್ತೂರಿ ರಂಗನ್ ವರದಿ ಜಾರಿ ಬಗ್ಗೆ ಸಭೆಯಲ್ಲಿ ಪ್ರಸ್ತಾಪ
ಕಸ್ತೂರಿ ರಂಗನ್ ವರದಿ ಜಾರಿ ಯಥಾವತ್ ಬಗ್ಗೆ ಅರಣ್ಯ ಸಚಿವರು ನೀಡಿದ ಹೇಳಿಕೆಯನ್ನು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರಸ್ತಾಪಿಸಿದರು. ಶಾಸಕರ ಮಾತಿನ ಮಧ್ಯೆ ಪ್ರವೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಹೇಳಿಕೆ ನಂತರ ಸ್ಪಷ್ಟನೆ ನೀಡಿದ್ದನ್ನು ಓದಿದ್ದೀರಾ ಎಂದು ಪ್ರಶ್ನಿಸಿದರು. ಹೌದು ಓದಿದ್ದೇನೆ ಎಂದು ಶಾಸಕರು ಹೇಳಿದರು.
ಯಾವುದೇ ಕಾರಣದಿಂದ ಕಸ್ತೂರಿ ರಂಗನ್ ವರದಿ ಜಾರಿ ವೇಳೆ ಜನರಿಗೆ ಜನ ವಸತಿ ಪ್ರದೇಶಕ್ಕೆ ಸಮಸ್ಯೆ ಆಗಲ್ಲ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು. ಈ ಕಾರಣಕ್ಕೆ ಶಾಸಕರು ಶ್ಲಾಘನೆ ವ್ಯಕ್ತಪಡಿಸಿದರು. ನಿಮ್ಮ ಹೇಳಿಕೆಯಿಂದ ಸಮಾಧಾನ ಆಗಿದೆ ಎಂದು ವಿದಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.
ಜಿಲ್ಲಾಧಿಕಾರಿ ವಿರುದ್ಧ ಸಿಎಂಗೆ ದೂರು
ಗ್ರಾಮ ಪಂಚಾಯತ್ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಇಲ್ಲವೆಂದು ಇಒ ಮತ್ತು ಪಿಡಿಒ ಅವರನ್ನು ಅಮಾನತು ಮಾಡಲಾಗಿತ್ತು. ಈ ಬಗ್ಗೆ ಜಿಲ್ಲಾಧಿಕಾರಿ ವಿರುದ್ಧ ದೂರು ನೀಡಿದ ಮೂಡಬಿದ್ರೆ ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್, ಪ್ರಿಯಾಂಕ್ ಹೆಸರು ಆಮಂತ್ರಣ ಪತ್ರಿಕೆಯಲ್ಲಿ ಇಲ್ಲವೆಂದು ಉದ್ಘಾಟನಾ ಕಾರ್ಯಕ್ರಮವನ್ನೇ ಜಿಲ್ಲಾ ಪಂಚಾಯತ್ ಸಿಇಒ ರದ್ದುಗೊಳಿಸಿದ್ದಾರೆ. ಪ್ರಿಯಾಂಕ್ ಹೆಸರು ಇಲ್ಲವೆಂದು ಕಾರ್ಯಕ್ರಮ ರದ್ದುಪಡಿಸಿದ್ದು ಏಕೆ ಎಂದು ಪ್ರಶ್ನಿಸಿದರು.
ಅಲ್ಲದೆ, ಶಿಷ್ಟಾಚಾರ ಉಲ್ಲಂಘನೆ ವಿಚಾರದಲ್ಲಿ ಜಿಲ್ಲಾಧಿಕಾರಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಿ. ಇದನ್ನು ಬಿಟ್ಟು ಇಒ, ಪಿಡಿಒ ವಿರುದ್ಧ ಕ್ರಮ ಏಕೆ ಎಂದು ಪ್ರಶ್ನಿಸಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಶಾಸಕರಿಗೆ ಅಧಿಕಾರಿಗಳು ಗೌರವ ಕೊಡಲೇಬೇಕು. ಈ ಬಗ್ಗೆ ತನಿಖೆ ಮಾಡಿಸೋಣ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:45 pm, Tue, 1 August 23