ಮಂಗಳೂರು, ಫೆ.29: ದಕ್ಷಿಣ ಕನ್ನಡ (Dakshina Kannada) ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಪುತ್ತೂರಿನ ಪ್ರಬಲ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ (Arun Kumar Puthila) ಅವರು ಕಣಕ್ಕಿಳಿಯುವುದು ನಿಶ್ಚಿತವಾಗಿದೆ. ಈ ಬಗ್ಗೆ ಪುತ್ತಿಲ ಪರಿವಾರದ (Puthila Parivara) ಅಧ್ಯಕ್ಷ ಪ್ರಸನ್ನ ಮಾರ್ತ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. ಇದು ಲೋಕಸಭಾ ಚುನಾವಣೆ ತಯಾರಿಯಲ್ಲಿರುವ ಬಿಜೆಪಿಗೆ (BJP) ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಕರಾವಳಿಯ ಬಿಜೆಪಿ ಭದ್ರಕೋಟೆಯಲ್ಲಿ ಒಂದಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಲಿ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ವಿರುದ್ಧ ಆಡಳಿತ ವಿರೋಧಿ ಅಲೆ ಎದ್ದಿದೆ. ಸ್ವಪಕ್ಷದ ಕಾರ್ಯಕರ್ತರೇ ಟೀಕಿಸುತ್ತಿದ್ದಾರೆ. ಹೀಗಾಗಿ ರಾಜ್ಯ ನಾಯಕರು ಮತ್ತು ಹೈಕಮಾಂಡ್ ಹೊಸ ಅಭ್ಯರ್ಥಿಯ ಹುಡುಕಾಟದಲ್ಲಿರುವಾಗಲೇ ಅರುಣ್ ಕುಮಾರ್ ಪುತ್ತಿಲ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಮಾಡಲಿದೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಅಧಿಕೃತ ಘೋಷಣೆ ಮಾಡಿದ್ದಾರೆ. ಆ ಮೂಲಕ ಲೋಕಸಭೆ ಚುನಾವಣೆಯಲ್ಲೂ ಪುತ್ತಿಲ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ಸಂದೇಶವನ್ನು ರವಾನಿಸಿದ್ದಾರೆ.
ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆ ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಅರುಣ್ ಕುಮಾರ್ ಪುತ್ತಿಲ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅದರಂತೆ ಬಿಜೆಪಿಯ ಭದ್ರಕೋಟೆಯಾಗಿದ್ದ ಪುತ್ತೂರಿನಲ್ಲಿ ಪುತ್ತಿಲ ಸ್ಪರ್ಧೆಯಿಂದ ಬಿಜೆಪಿ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿತ್ತು. ಕಾಂಗ್ರೆಸ್ ಮತ್ತು ಪುತ್ತಿಲ ಪರಿವಾರದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಅಶೋಕ್ ರೈ ಅವರು ಅಲ್ಪ ಮತಗಳಿಂದ ಗೆಲುವು ಸಾಧಿಸಿದ್ದರು.
ಇದನ್ನೂ ಓದಿ: ಅರುಣ್ ಕುಮಾರ್ ಪುತ್ತಿಲ ಭೇಟಿಯಾಗಿದ್ದು ನಿಜ: ಹಿಂದೂ ಮುಖಂಡನ ಪಕ್ಷ ಸೇರ್ಪಡೆ ಬಗ್ಗೆ ವಿಜಯೇಂದ್ರ ಹೇಳಿದ್ದಿಷ್ಟು
ಮಾತ್ರವಲ್ಲದೆ, ಪಂಚಾಯತ್ ಚುನಾವಣೆಗಳಲ್ಲೂ ಪುತ್ತಿಲ ಪರಿವಾರವು ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಬಿಜೆಪಿ ವಿರುದ್ಧ ಗೆಲುವು ಸಾಧಿಸಿದೆ. ಭದ್ರಕೋಟೆಯಲ್ಲಿ ಹೀನಾಯ ಸೋಲಿನ ರುಚಿ ಉಂಡಿದ್ದ ಬಿಜೆಪಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪುತ್ತಿಲ ಅವರನ್ನು ಪಕ್ಷಕ್ಕೆ ಮರಳಿ ಕರೆತರಲು ಮುಂದಾಗಿತ್ತು. ಯಾವುದೇ ಷರತ್ತು ಇಲ್ಲದೆ ಪಕ್ಷ ಸೇರುವಂತೆ ಬಿಜೆಪಿ ಮೂರು ದಿನಗಳ ಗಡುವು ನೀಡಿತ್ತು.
ಇದರ ಬೆನ್ನಲ್ಲೇ ಪುತ್ತೂರಿನಲ್ಲಿ ಪರಿವಾರದ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಸಲಾಗಿತ್ತು. ಲೋಕಸಭಾ ಚುನಾವಣೆಗೂ ಮುನ್ನ ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷ ಸ್ಥಾನ ನೀಡಿದರೆ ಮಾತ್ರ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಹೇಳಿದ್ದರು. ಅಲ್ಲದೆ, ಈ ವಿಚಾರವಾಗಿ 3 ದಿನಗಳ ಒಳಗಾಗಿ ನಿರ್ಧಾರ ತಿಳಿಸಬೇಕು ಎಂದೂ ಬಿಜೆಪಿಗೇ ಗಡುವು ನೀಡಿದ್ದರು.
ಇದಾಗ ಹಲವು ದಿನಗಳ ಕಾಲ ಯಾವುದೇ ಬೆಳವಣಿಗೆಗಳು ನಡೆದಿರಲಿಲ್ಲ. ಬಳಿಕ ಪುತ್ತಿಲ ಪರಿವಾರದ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತುಕತೆ ನಡೆಸಿದ್ದರು ಎನ್ನವು ವಿಚಾರ ಬೆಳಕಿಗೆ ಬಂತು. ಇದು ನಿಜ ಎಂದು ಸ್ವತಃ ವಿಜಯೇಂದ್ರ ಅವರೇ ಹೇಳಿದ್ದರು. ಯಾವುದೇ ಷರತ್ತುಗಳು ಬೇಡ. ಪ್ರಧಾನಿ ಮೋದಿ ನಾಯಕತ್ವಕ್ಕಾಗಿ ಎಲ್ಲರೂ ಒಂದಾಗಬೇಕು ಎಂದು ಹೇಳಿದ್ದಾಗಿ ವಿಜಯೇಂದ್ರ ಹೇಳಿದ್ದರು.
ಆದರೆ, ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷ ಸ್ಥಾನ ನೀಡುವಂತೆ ಪುತ್ತಿಲ ಪಟ್ಟು ಹಿಡಿದಿದ್ದು, ಪಕ್ಷ ಸೇರಿದ ಬಳಿಕ ಜವಾಬ್ದಾರಿ ನೀಡುವ ಬಗ್ಗೆ ವಿಜಯೇಂದ್ರ ಒಲವು ಹೊಂದಿದ್ದಾರೆ. ಆದರೆ ಪಟ್ಟು ಬಿಡದ ಅರುಣ್ ಕುಮಾರ್ ಪುತ್ತಿಲ ಲೋಕಸಭೆಯಲ್ಲಿ ಬಂಡಾಯ ಸ್ಪರ್ಧೆಗೆ ಅಣಿಯಾಗುತ್ತಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿದ ಪುತ್ತಿಲ ಪರಿವಾರದ ಅಧ್ಯಕ್ಷರು, ಮುಂದಿನ ಎಲ್ಲಾ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಹಲವು ಸುತ್ತಿನ ಮಾತುಕತೆಯ ನಂತರವೂ ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆ ಯತ್ನ ವಿಫಲ ಹಿನ್ನೆಲೆ ಈ ಘೋಷಣೆ ಮಾಡಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸನ್ನ ಮಾರ್ತ, ಈಗಾಗಲೇ ಬಿಜೆಪಿ ಪಕ್ಷದ ನಾಯಕರಾದ ಯಡಿಯೂರಪ್ಪ, ಬಿಎಲ್ ಸಂತೋಷ್, ವಿಜಯೇಂದ್ರ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರೊಂದಿಗೆ ಮಾತುಕತೆ ನಡೆದಿತ್ತು. ಎಲ್ಲರಿಂದಲೂ ಸಕಾರಾತ್ಮಕವಾಗಿ ಸ್ಪಂದನೆ ಸಿಕ್ಕಿದೆ. ಅದರೆ ಇಲ್ಲಿನ ತನಕ ಯಾವ ನಿರ್ಧಾರವನ್ನು ಅವರು ಕೈಗೊಂಡಿಲ್ಲ. ಹಾಗಾಗಿ ಪುತ್ತಿಲ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದರು.
ಬಹಿರಂಗವಾಗಿ ಮಂಡಲ ಅಧ್ಯಕ್ಷ ನೀಡಬೇಕೆಂದು ಬೇಡಿಕೆ ಇಟ್ಟಿದ್ದೆವು. ಅದರೆ ಅದ್ಯಾವುದೂ ಈವರೆಗೆ ಸಫಲವಾಗಿಲ್ಲ. ಕಾರ್ಯಕರ್ತರ ಒತ್ತಾಸೆಯಂತೆ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸಲಿದ್ದಾರೆ. ಪುತ್ತೂರು ತಾಲೂಕಿನಲ್ಲಿ ಜನರ ಸಮಸ್ಯೆಗಳಿಗೆ ಸ್ಪಂಧಿಸುವ ಸಂಘಟನೆ ಇದ್ದರೆ ಅದು ಪುತ್ತಿಲ ಪರಿವಾರ. ಈಗಾಗಲೇ ನಾವು ಚಾಪು ಮೂಡಿಸಿದ್ದೇವೆ ಎಂದರು.
ಇನ್ನೂ ಹೆಚ್ಚು ಸೇವೆ ಸಲ್ಲಿಸುವ ಸಲುವಾಗಿ ನಮ್ಮ ಆರೋಗ್ಯ ಘಟಕದಿಂದ ಬೆಟ್ಟಂಪಾಡಿ ವಿಭಾಗದಲ್ಲಿ ಮಾ.3 ಕ್ಕೆ ಆ್ಯಂಬುಲೆನ್ಸ್ ಸೇವೆ ಆರಂಭಿಸಲಿದ್ದೇವೆ. ಮುಂದಿನ ದಿನ ಜಿಲ್ಲೆಯಾದ್ಯಂತ ಸಂಘಟನೆ ಗಟ್ಟಿಗೊಳಿಸುವ ಕೆಲಸ ಮಾಡುತ್ತೇವೆ ಎಂದರು.
ಸಂಘಟನೆಯನ್ನು ರಾಜ್ಯಕ್ಕೆ ವಿಸ್ತರಿಸಲಿದ್ದೇವೆ ಎಂದು ಹೇಳಿದ ಪುತ್ತಿಲ ಪರಿವಾರದ ಅಧ್ಯಕ್ಷ, ಸಮಾಲೋಚನಾ ಸಭೆಯ ಬಳಿಕ ಮುಂದಿನ ಎಲ್ಲಾ ಚುನಾವಣೆಯಲ್ಲಿ ನಮ್ಮ ಸ್ಪರ್ಧೆ ಇರಬೇಕೆಂದು ನಾವು ತೀರ್ಮಾನ ಕೈಗೊಂಡಿದ್ದೇವೆ. ಮುಂದೆ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಮಾಡಲಿದೆ. ರಾಜ್ಯಕ್ಕೂ ಸೇವಾ ಸಂಘಟನೆ ವಿಸ್ತರಣೆ ಮಾಡಲಿದ್ದೇವೆ ಎಂದರು.
ಪುತ್ತೂರು ವಿಧಾನಸಭೆ ಚುನಾವಣೆಯಲ್ಲಿ ಪುತ್ತಿಲ ಅವರು ಸ್ವತಂತ್ರವಾಗಿ ಸ್ಪರ್ಧಿಸುವ ನಿರ್ಣಯ ಕೈಗೊಂಡ ನಂತರ ಪುತ್ತಿಲ ಪರಿವಾರ ಸಂಘಟನೆ ಪ್ರಾರಂಭಿಸಿದ ಹಿಂದೂ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಆಗಿದ್ದರು. ಹಲವು ವಾಟ್ಸ್ಆ್ಯಪ್ ಗ್ರೂಪ್ಗಳನ್ನು ರಚಿಸಿದ್ದು, ಲಕ್ಷಕ್ಕೂ ಅಧಿಕ ಮಂದಿ ಇದರಲ್ಲಿ ಸೇರ್ಪಡೆಯಾಗಿದ್ದಾರೆ. ಆ ಮೂಲಕ ಪುತ್ತಿಲ ಅವರ ದೈನಂದಿನ ಕಾರ್ಯಕ್ರಮಗಳು ಹಾಗೂ ಅವರು ಮಾಡುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಪ್ರಚಾರ ಮಾಡಲಾಗುತ್ತಿದೆ.
ಚುನಾವಣೆಯಲ್ಲಿ ಸೋತರೂ ಕುಗ್ಗದೆ, ವಿರೋಧಿಗಳ ಟೀಕೆ ಟಿಪ್ಪಣಿಗಳಿಗೆ ಜಗ್ಗದ ಪುತ್ತಿಲ ಅವರು ಪುತ್ತೂರು ಕ್ಷೇತ್ರದಲ್ಲಿ ಮಾತ್ರವಲ್ಲದೆ, ತನ್ನ ಪ್ರಚಾರ ಕಾರ್ಯವನ್ನು ಜಿಲ್ಲಾ ಮಟ್ಟದಲ್ಲಿ ಹಬ್ಬಿಸಲು ಆರಂಭಿಸಿದರು. ಯಾರೇ ಕಷ್ಟದಲ್ಲಿದ್ದರೂ ಅವರ ನೆರವಿಗೆ ದಾವಿಸುವುದು, ಮದುವೆ, ಪೂಜೆ, ಜಾತ್ರೆ ಇತ್ಯಾದಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಆ ಮೂಲಕ ಜನರನ್ನು ತಮ್ಮತ್ತ ಸೆಳೆಯುತ್ತಿದ್ದಾರೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:56 pm, Thu, 29 February 24