ಮಂಗಳೂರು, ಮಾ.2: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಕುಡಿಯುವ ನೀರಿಗೆ (Drinking Water) ಹಾಹಾಕಾರ ಉಂಟಾಗದಂತೆ ನೋಡಿಕೊಳ್ಳಬೇಕು. ಇದಕ್ಕೆ ಬೇಕಾದ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಬೇಸಿಗೆ ಸಂದರ್ಭದಲ್ಲಿ ನೀರು ಪೂರೈಕೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದುವರೆಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆಗಳು ಎದುರಾದರೆ ಅದನ್ನು ನಿಭಾಯಿಸಲು ಅಧಿಕಾರಿಗಳು ಸಿದ್ಧರಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: ಮಂಗಳೂರು: ತುಂಬೆ ಅಣೆಕಟ್ಟೆ ತುಂಬಿದ್ದರೂ ಕುಡಿಯುವ ನೀರಿಗೆ ತತ್ವಾರ! ಕಾರಣ ಇಲ್ಲಿದೆ
ಜಿಲ್ಲೆಯ ಎಲ್ಲ ಡ್ಯಾಂಗಳಲ್ಲಿ ಸಾಕಷ್ಟು ನೀರಿದೆ ಎಂದು ಸಚಿವರು ತಿಳಿಸಿದರು. ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಲಾಗುತ್ತಿದೆ. ಅಗತ್ಯವಿದ್ದರೆ, ಮಂಗಳೂರು ನಗರ, ಉಳ್ಳಾಲ ಮತ್ತು ಮೂಲ್ಕಿಗೆ ನೀರು ಸರಬರಾಜು ಮಾಡುವ ತುಂಬೆ ಅಣೆಕಟ್ಟಿನ ಮೇಲ್ಭಾಗದಲ್ಲಿ ನೆಲೆಗೊಂಡಿರುವ ನೇತ್ರಾವತಿ ನದಿಗೆ ಅಡ್ಡಲಾಗಿರುವ ಎಎಂಆರ್ ಅಣೆಕಟ್ಟಿನಿಂದ ನೀರನ್ನು ಪಡೆಯಬೇಕು. ಎಂಆರ್ಪಿಎಲ್, ಎಂಎಸ್ಇಝಡ್ ಮತ್ತು ಇತರ ಪ್ರಮುಖ ಕೈಗಾರಿಕೆಗಳು ಸಹಕರಿಸಬೇಕು ಎಂದರು.
ಕುಡಿಯುವ ನೀರಿನ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ಸಾರ್ವಜನಿಕರು ನೀರಿನ ಸಮಸ್ಯೆ ಎದುರಾದಾಗ ಅಧಿಕಾರಿಗಳು ಸ್ಪಂದಿಸಬೇಕು ಎಂದು ಒತ್ತಾಯಿಸಿದರು. ದಕ್ಷಿಣ ಕನ್ನಡ ಜಿಲ್ಲಾಡಳಿತದ ಬಳಿ ಬರ ಪರಿಹಾರ ನಿಧಿಯಡಿ 3 ಕೋಟಿ ರೂ. ಅನುದಾನ ಇದೆ. ಅಗತ್ಯ ಬಿದ್ದರೆ ಹೆಚ್ಚುವರಿ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ