ಮಂಗಳೂರು: ನಗರದಲ್ಲಿ ಗುಡುಗು ಸಹಿತ ಧಾರಾಕಾರ ಮಳೆ (Heavy Rain) ಹಿನ್ನೆಲೆ ಮಂಗಳೂರು ಪಾಲಿಕೆ ವ್ಯಾಪ್ತಿಯ ಹಾಗೂ ಜಿಲ್ಲೆಯ ವಿವಿಧ ಕಡೆಯ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಉಳ್ಳಾಲ, ಮುಲ್ಕಿ, ಮೂಡಬಿದ್ರೆ ಮತ್ತು ಬಂಟ್ವಾಳ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ನಿನ್ನೆ ರಾತ್ರಿಯಿಂದ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಮಳೆಗೆ ನಗರದ ಪಂಪ್ ವೆಲ್, ಕೊಟ್ಟಾರ ಚೌಕಿ, ಮಾಲೇಮಾರು ಸೇರಿದಂತೆ ಸಾಕಷ್ಟು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಜನರು ಪರದಾಡುತ್ತಿದ್ದಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ವೈದ್ಯರಿಗೂ ಕಾಡುತ್ತಿದೆ ನಿರುದ್ಯೋಗ ಸಮಸ್ಯೆ! ಆರೋಗ್ಯ ಇಲಾಖೆಯ ನಿರ್ಲಕ್ಷಕ್ಕೆ ವೈದ್ಯರಿಗಿಲ್ಲ ಜಾಬ್
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮಳೆ (Rainfall) ಹೆಚ್ಚಾಗಿದೆ. ಇಂದಿನಿಂದ ಆಗಸ್ಟ್ 2ರವರೆಗೆ ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಭಾರೀ ಮಳೆಯಾಗಲಿದೆ. ಹಾಗೇ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ. ಹೀಗಾಗಿ, ಮಲೆನಾಡು ಮತ್ತು ಕರಾವಳಿಯ 7 ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ.
ಉತ್ತರ ಒಳನಾಡಿನಲ್ಲೂ ಮಳೆ ಹೆಚ್ಚಾಗುತ್ತಿದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು ಸೇರಿದಂತೆ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಇಂದು ‘ಹಳದಿ ಅಲರ್ಟ್’ ಘೋಷಿಸಲಾಗಿದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಕರ್ನಾಟಕ ಮಾತ್ರವಲ್ಲದೆ ಉತ್ತರಾಖಂಡ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ತೆಲಂಗಾಣ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
Published On - 8:11 am, Sat, 30 July 22