ಮಂಗಳೂರು, ಜುಲೈ 15: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಕಾರಣ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಿನಾಂಕ 15-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ. ಆದೇಶದಲ್ಲಿ ಉಲ್ಲೇಖಿಸಲಾಗಿರುವ ಸಲಹೆ ಸೂಚನೆಗಳನ್ನು ಇಲ್ಲಿ ನೀಡಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತಗಳು ಸಂಭಾವ್ಯ ಪರಿಣಾಮಗಳನ್ನು ತಗ್ಗಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಪ್ರಾರಂಭಿಸಿವೆ. ನಿವಾಸಿಗಳು ಮನೆಯೊಳಗೆ ಇರಲು ಮತ್ತು ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಒತ್ತಾಯಿಸಲಾಗಿದೆ. ಭಾರೀ ಮಳೆಯಿಂದ ಉಂಟಾಗುವ ಯಾವುದೇ ಘಟನೆಗಳಿಗೆ ಸ್ಪಂದಿಸಲು ಪೊಲೀಸ್, ಅಗ್ನಿಶಾಮಕ ಇಲಾಖೆ ಮತ್ತು ವೈದ್ಯಕೀಯ ತಂಡಗಳು ಸೇರಿದಂತೆ ತುರ್ತು ಸೇವೆಗಳು ಹೆಚ್ಚಿನ ಸಿದ್ಧತೆ ಮಾಡಿಕೊಂಡಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ