ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ಮಳೆ ಅಬ್ಬರ: ಶಾಲೆಗಳಿಗೆ ಇಂದು ರಜೆ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಶಾಲೆಗಳು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಾರ್ವಜನಿಕರು ಜಾಗರೂಕರಾಗಿರಲು ಮತ್ತು ಅಧಿಕೃತ ಮೂಲಗಳಿಂದ ಮಾಹಿತಿ ಪಡೆದು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ. ನದಿ, ಸಮುದ್ರ ತೀರಗಳ ಬಳಿ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು, ಮೇ 30: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮಳೆಯ (Monsoon Rain) ಅಬ್ಬರ ಮುಂದುವರಿದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು (ಮೇ 30) ಉಭಯ ಜಿಲ್ಲೆಗಳಲ್ಲಿ ಅಂಗನವಾಡಿಗಳು ಮತ್ತು ಶಾಲೆಗಳಿಗೆ ರಜೆ (School Holiday) ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಸೇರಿದಂತೆ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಅಂಗನವಾಡಿ ಕೇಂದ್ರಗಳು ಮತ್ತು 1 ರಿಂದ 10 ನೇ ತರಗತಿ ವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷತೆಯ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಪ್ರಕಟಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ತಿಳಿಸಿದ್ದಾರೆ. ಸಾರ್ವಜನಿಕರು ಜಾಗರೂಕರಾಗಿರಬೇಕು ಮತ್ತು ಅಧಿಕೃತ ಮೂಲಗಳಿಂದ ಬರುವ ಮಾಹಿತಿಯನ್ನು ಅನುಸರಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.
ಮಕ್ಕಳು ತಗ್ಗು ಪ್ರದೇಶಗಳು, ಸರೋವರಗಳು, ಸಮುದ್ರ ತೀರ ಮತ್ತು ನದಿ ತೀರಗಳಿಗೆ ಹೋಗದಂತೆ ಪೋಷಕರು ಮುನ್ನೆಚ್ಚರಿಕೆ ವಹಿಸಬೇಕು ಎಂದಿರುವ ಜಿಲ್ಲಾಡಳಿತವು, ಮೀನುಗಾರರು ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಸಂಭಾವ್ಯ ಅವಘಡಗಳ ಸಂದರ್ಭದಲ್ಲಿ ಕಾರ್ಯನಿರ್ವಹಣೆಗಾಗಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಕಚೇರಿಯಲ್ಲಿ ಕಡ್ಡಾಯವಾಗಿ ಇರಬೇಕೆಂದು ಸೂಚನೆ ನೀಡಲಾಗಿದೆ. ಜಿಲ್ಲಾಡಳಿತದಿಂದ ವಿವಿಧ ಹುದ್ದೆಗಳಿಗೆ ನೇಮಕಗೊಂಡ ನೋಡಲ್ ಅಧಿಕಾರಿಗಳು ಜಾಗರೂಕರಾಗಿರಬೇಕು ಮತ್ತು ಸಾರ್ವಜನಿಕ ದೂರುಗಳಿಗೆ ಸ್ಪಂದಿಸಬೇಕು. ತಹಶೀಲ್ದಾರ್ ನಿರಂತರ ಸಂಪರ್ಕದಲ್ಲಿರಬೇಕು ಎಂದು ಸೂಚಿಸಲಾಗಿದೆ.
ನದಿಗಳು, ಜಲಪಾತಗಳ ಬಳಿಗೆ ಪ್ರವಾಸಕ್ಕೆ ನಿರ್ಬಂಧ
ಸ್ಥಳೀಯ ನಿವಾಸಿಗಳು ಮತ್ತು ಪ್ರವಾಸಿಗರು ಕಡಲತೀರಗಳು, ನದಿಗಳು ಮತ್ತು ಜಲಪಾತಗಳ ಬಳಿಗೆ ಹೋಗುವುದನ್ನು ಮುನ್ನೆಚ್ಚರಿಕೆ ಕ್ರಮವಾಗಿ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಂಥ ಪ್ರದೇಶಗಳಲ್ಲಿ ಫೋಟೋಗಳು ಮತ್ತು ವೀಡಿಯೊಗಳನ್ನು ತೆಗೆದುಕೊಳ್ಳದಂತೆ ಸೂಚಿಸಲಾಗಿದೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಜೂನ್ 2ರವರೆಗೂ ಭಾರಿ ಮಳೆ, 5 ಜಿಲ್ಲೆಗಳಿಗೆ ರೆಡ್ ಅಲರ್ಟ್
ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 1077 ಗೆ ಕರೆ ಮಾಡಬಹುದು. ದಕ್ಷಿಣ ಕನ್ನಡ ಜಿಲ್ಲೆಯವರು 0824-2442590 ಹಾಗೂ ಉಡುಪಿ ಜಿಲ್ಲೆಯವರು 0820-2574802 ಸಂಖ್ಯೆಗೆ ಯಾವುದೇ ಸಮಯದಲ್ಲಿ ಬೇಕಿದ್ದರೂ ಕರೆ ಮಾಡಬಹುದು ಎಂದು ಜಿಲ್ಲಾಡಳಿತಗಳು ತಿಳಿಸಿವೆ.








