Padma awards 2022: ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಅಮೈ ಮಹಾಲಿಂಗ ನಾಯ್ಕರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಕರಾವಳಿ ಜಿಲ್ಲೆಗಳಲ್ಲಿ ಕೃಷಿ ನಿಧಾನವಾಗಿ ಹಿನ್ನೆಲೆಗೆ ಸರಿಯುತ್ತಿರುವ ಸಂದರ್ಭದಲ್ಲಿ ಕೃಷಿಯೇ ಬದುಕಿಗೆ ಮೂಲಾಧಾರವೆಂಬ ಕಲ್ಪನೆಯನ್ನು ಬಿತ್ತುತ್ತಿರುವ ಸಾಧಕ ಅಮೈ ಮಾಹಾಲಿಂಗ ನಾಯ್ಕ. ಕೃಷಿ ಕಾಯಕದ ಮೂಲಕ ಸ್ವಾವಲಂಬಿ ಜೀವನ ಸಾಧ್ಯ ಎಂಬುದನ್ನು ಆಧುನಿಕ ತಲೆಮಾರಿಗೆ ತೋರಿಸಿಕೊಟ್ಟಿದ್ದಾರೆ.

Padma awards 2022: ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಅಮೈ ಮಹಾಲಿಂಗ ನಾಯ್ಕರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ
ಅಮೈ ಮಹಾಲಿಂಗ ನಾಯ್ಕ್
Follow us
TV9 Web
| Updated By: preethi shettigar

Updated on:Jan 25, 2022 | 9:48 PM

ಮಂಗಳೂರು: ಈ ವರ್ಷದ (2022) ಪದ್ಮಶ್ರೀ ಪ್ರಶಸ್ತಿಗೆ(Padma shri) ಕೃಷಿ ಕ್ಷೇತ್ರದಲ್ಲಿ ಕರ್ನಾಟಕದಿಂದ ಭಾಜನರಾಗಿರುವವರು ಅಮೈ ಮಹಾಲಿಂಗ ನಾಯ್ಕ್(Amai Mahalinga Naik). ಏಕಾಂಗಿಯಾಗಿ ಅಪೂರ್ವ ಮತ್ತು ಅಪಾಯಕಾರಿಯಾದ ಕೆಲಸದ ಮೂಲಕ ಜೀವಜಲವನ್ನು ತರಿಸಿ ಬೋಳು ಗುಡ್ಡೆಯನ್ನು ನಂದನವನ ಮಾಡಿದ ಪ್ರಯತ್ನಶೀಲ, ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿ 77ರ ಹರೆಯದ ಮಹಾಲಿಂಗ ನಾಯ್ಕ ಅವರಿಗೆ ಪದ್ಮಶ್ರೀ ಒಲಿದು ಬಂದಿದೆ. ಮಹಾಲಿಂಗ ನಾಯ್ಕ್ ಯಾರು? ಇವರು ಮಾಡಿರೋ ಸಾಧನೆ ಏನು? ಕೃಷಿಯಲ್ಲಿ(Agriculture) ಮಾಡಿದ ಕ್ರಾಂತಿ ಎಂತದ್ದು ಎನ್ನುವ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ.

ಪದ್ಮಶ್ರೀ ಮಹಾಲಿಂಗ ನಾಯ್ಕ್

ಕರಾವಳಿ ಜಿಲ್ಲೆಗಳಲ್ಲಿ ಕೃಷಿ ನಿಧಾನವಾಗಿ ಹಿನ್ನೆಲೆಗೆ ಸರಿಯುತ್ತಿರುವ ಸಂದರ್ಭದಲ್ಲಿ ಕೃಷಿಯೇ ಬದುಕಿಗೆ ಮೂಲಾಧಾರವೆಂಬ ಕಲ್ಪನೆಯನ್ನು ಬಿತ್ತುತ್ತಿರುವ ಸಾಧಕ ಅಮೈ ಮಾಹಾಲಿಂಗ ನಾಯ್ಕ. ಕೃಷಿ ಕಾಯಕದ ಮೂಲಕ ಸ್ವಾವಲಂಬಿ ಜೀವನ ಸಾಧ್ಯ ಎಂಬುದನ್ನು ಆಧುನಿಕ ತಲೆಮಾರಿಗೆ ತೋರಿಸಿಕೊಟ್ಟಿದ್ದಾರೆ. ಕೃಷಿಗೆ ನೀರು ಹಾಯಿಸಲು ಪಂಪ್‌ ಸೆಟ್‌ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಹಿಂದಿನ ತಲೆಮಾರಿನವರು ಅವಲಂಭಿಸಿದ್ದ ಸುರಂಗ ನೀರಿನ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು, ಇದೇ ವ್ಯವಸ್ಥೆಯಲ್ಲಿ ವಿದ್ಯುತ್‌ ರಹಿತವಾಗಿ ಗ್ರಾವಿಟಿ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಸ್ಟ್ರಿಂಕ್ಲರ್‌ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾಲಿಂಗ ನಾಯ್ಕ ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದ ಸಿಂಗಲ್ ಮ್ಯಾನ್ ಆರ್ಮಿ ಆಗಿದ್ದಾರೆ. ಇವರ ಸಾಧನೆಗೆ ಸಾಲು ಸಾಲು ಪ್ರಶಸ್ತಿ ಲಭಿಸಿದ್ದು ಈಗ ಪದ್ಮಶ್ರೀ ಕೂಡ ಲಭಿಸಿದೆ.

ಭಟ್ಟರ ಮನೆಯ ಕೂಲಿಯಾಳಿಗೆ ಪದ್ಮಶ್ರೀ ಪ್ರಶಸ್ತಿ

ಅಡಕೆ, ತೆಂಗಿನ ಮರ ಏರುವುದರಲ್ಲಿ ಎಕ್ಸ್‌ಪರ್ಟ್‌ ಆಗಿದ್ದ ಕೃಷಿ ಕೂಲಿ ಕಾರ್ಮಿಕ ಮಹಾಲಿಂಗ ನಾಯ್ಕ 44 ವರ್ಷಗಳ ಹಿಂದೆ ಸ್ವಂತ ಊರಿನ ಕೃಷಿಕರ ತೋಟಗಳಲ್ಲಿ ದುಡಿಯುವಾಗ ಸ್ವಂತ ತೋಟ ಮಾಡುವ ಸ್ವಾವಲಂಬಿ ಜೀವನದ ಕನಸು ಕಂಡಿದ್ದರು. ಆದರೆ ಇದಕ್ಕಾಗಿ ಅವರಲ್ಲಿ ಜಮೀನು ಇರಲಿಲ್ಲ. ಭೂ ಮಾಲೀಕ ಅಮೈ ಮಹಾಬಲ ಭಟ್ಟರ ತೋಟಕ್ಕೆ ದಿನಾಲು ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಈ ಆದಾಯದಲ್ಲಿ ಅವರ ಸಂಸಾರದ ರಥ ಸಾಗುತ್ತಿತ್ತು. ಅದೊಂದು ದಿನ ಮಹಾಬಲ ಭಟ್‌ ಅವರು ಮಹಾಲಿಂಗ ನಾಯ್ಕರಿಗೆ ಎರಡು ಎಕರೆ ಜಮೀನು ನೀಡಲು ಒಪ್ಪಿಕೊಂಡರು. 1978ರಲ್ಲಿ ಮಹಾಬಲ ಭಟ್ಟರ ಬೆಂಬಲದಿಂದಾಗಿ ಎರಡು ಎಕರೆ ಗುಡ್ಡ ‘ದರ್ಖಾಸ್ತು’ ರೂಪದಲ್ಲಿ ಮಹಾಲಿಂಗ ನಾಯ್ಕರಿಗೆ ಪ್ರಾಪ್ತವಾಯಿತು. ಮನೆ ಕಟ್ಟಲು ಅಸಾಧ್ಯವಾದ, ನೀರಿಲ್ಲದ ಇಳಿಜಾರು ಬೋಳು ಗುಡ್ಡದಲ್ಲಿ ಕೃಷಿ ತೋಟ ಮಾಡುವುದು ಮಹಾಲಿಂಗ ನಾಯ್ಕರಿಗೆ ಸವಾಲಾಗಿ ಕಂಡು ಬಂದರೂ ಅವರು ತನ್ನ ಪ್ರಯತ್ನ ಬಿಡಲಿಲ್ಲ. ಅಲ್ಲೇ ಭವಿಷ್ಯ ರೂಪಿಸುವ ಉದ್ದೇಶದಿಂದ ಸ್ವಲ್ಪ ಜಾಗ ಸಮತಟ್ಟು ಮಾಡಿ ಸಣ್ಣದೊಂದು ಗುಡಿಸಲು ಕಟ್ಟಿದರು. ಕುಡಿಯುವ ನೀರಿಗಾಗಿ ಪಕ್ಕದ ಮನೆಯವರನ್ನು ಆಶ್ರಯಿಸಿದ್ದ ಮಹಾಲಿಂಗ ನಾಯ್ಕರಿಗೆ ಬಾವಿ ತೋಡಿಸಲು ಕೈಯಲ್ಲಿ ದುಡ್ಡಿರಲಿಲ್ಲ. ಬಾವಿ ತೋಡಿದರೆ ನೀರು ದೊರೆಯುವ ಸಾಧ್ಯತೆ ಇರಲಿಲ್ಲ. ಏಕಾಂಗಿಯಾಗಿ ಬಾವಿ ತೋಡುವುದು ಅಸಾಧ್ಯ ಮಾತು. ಆಗ ಅವರಿಗೆ ಹೊಳೆದದು ಸುರಂಗ ಕೊರೆತ. ಅರ್ಧ ದಿನ ಕೂಲಿ ಕೆಲಸ, ಉಳಿದರ್ಧ ದಿನ ಮತ್ತು ರಾತ್ರಿ ಹೊತ್ತು ಸುರಂಗ ಕೊರೆಯುವ ಮೂಲಕ ಜೀವಜಲ ಹುಡುಕುವ ಭಗೀರಥ ಪ್ರಯತ್ನ ಮಾಡಿದರು.

ಮೊದಲು ನೀರು ಸಿಗಲಿಲ್ಲ!

ಮಹಾಲಿಂಗ ನಾಯ್ಕ ಮೊದಲು 30 ಮೀ. ಉದ್ದದ ಸುರಂಗ ಕೊರೆದರೂ ನೀರು ಸಿಗಲಿಲ್ಲ. ಇದರಿಂದ ನಿರಾಸೆಯಾಗದ ಅವರು ಮತ್ತೆ ಪ್ರಯತ್ನ ಮುಂದುವರಿಸಿ ಸೀಮೆಎಣ್ಣೆ , ತೆಂಗಿನೆಣ್ಣೆ ದೀಪದ ಬೆಳಕಿನಲ್ಲಿ ಪ್ರತಿ ವರ್ಷ ತಲಾ ಒಂದರಂತೆ 25-30 ಮೀಟರ್‌ ಉದ್ದದ ಸತತ ಐದು ಸುರಂಗಗಳನ್ನು ಕೊರೆದರು. ಆದರೆ ಅವರ ಅಪಾಯಕಾರಿ ಪ್ರಯತ್ನಕ್ಕೆ ಫಲ ದೊರೆಯಲಿಲ್ಲ. ಅವರ ಪ್ರಯತ್ನವನ್ನು ನೋಡಿ ಹಲವರು ಗೇಲಿ ಮಾಡಿದ್ದರು. ಯಾರು ಏನು ಹೇಳಿದರೂ ತನ್ನ ಭಗೀರಥ ಪ್ರಯತ್ನವನ್ನು ನಿಲ್ಲಿಸದೆ ಮುಂದುವರಿಸಿದ ಮಹಾಲಿಂಗ ನಾಯ್ಕರಿಗೆ ಆರನೇ ಪ್ರಯತ್ನ ಫಲ ನೀಡಿತು. ಈ ಪ್ರಯತ್ನದಲ್ಲಿ ನೀರು ಕಾಣಿಸಿತು. 25 ಮೀ. ಉದ್ದದ ಸುರಂಗದಲ್ಲಿ ಸಿಕ್ಕಿದ ನೀರಿನಲ್ಲಿ ಕೃಷಿ ಸಾಧ್ಯವಿಲ್ಲ ಎನ್ನುವುದು ಅವರಿಗೆ ಅರಿವಾಯಿತು.

ಉಕ್ಕಿತು ಜಲಧಾರೆ

ಆರನೇ ಸುರಂಗದ ಪಕ್ಕದಲ್ಲಿ ಇನ್ನೊಂದು ಸುರಂಗ ಕೊರೆದರು. 25 ಮೀ. ತಲುಪುವಾಗ ನೀರು ಕಾಣಿಸಿಕೊಂಡಿತು. ಮತ್ತೆ ಮುಂದುವರಿಸಿ 75 ಮೀ. ಉದ್ದದ ಸುರಂಗವಾಗುವ ಹೊತ್ತಿಗೆ ಯೆಥೇಚ್ಛ ನೀರು ಸಿಕ್ಕಿತು. ಆಗ ಅವರ ತೋಟದ ಕನಸು ಮತ್ತೆ ಗರಿಗೆದರಿತು. ಸುರಂಗದ ನೀರನ್ನು ಸಂಗ್ರಹಿಸಲು ಮಣ್ಣಿನ ಟ್ಯಾಂಕ್‌ ನಿರ್ಮಿಸಿದರು. ನೀರಿನ ಸಂಪನ್ನತೆಯಿಂದಾಗಿ ತೋಟ ಮಾಡುವ ಕನಸು ನನಸಾಯಿತು. ಗುಡ್ಡವನ್ನು ಸಮತಟ್ಟು ಮಾಡಿ ಭತ್ತ, ಅಡಕೆ, ತೆಂಗು, ಬಾಳೆ ಕೃಷಿ ಕೈಗೊಂಡರು. ಮಡದಿ ಲಲಿತ ಮೂವರು ಮಕ್ಕಳು ಪ್ರಯತ್ನಕ್ಕೆ ಕೈಜೋಡಿಸಿದರು.

ಮರದಿಂದ ಬಿದ್ದು ಪೆಟ್ಟು

ಕೃಷಿಯಿಂದ ಆದಾಯ ಬರುತ್ತಿದ್ದರೂ ಅವರು ಹಿಂದಿನ ದುಡಿಮೆಯ ಕಾಯಕ ನಿಲ್ಲಿಸಿರಲಿಲ್ಲ. 18 ವರ್ಷಗಳ ಹಿಂದೆ ನೆಗಳಗುಳಿ ಎಂಬಲ್ಲಿ ಕೃಷಿಕರೊಬ್ಬರ ತೋಟದಲ್ಲಿ ತೆಂಗಿನ ಮರ ಹತ್ತುತ್ತಿದ್ದಾಗ ಮಹಾಲಿಂಗ ನಾಯ್ಕ ಆಕಸ್ಮಿಕವಾಗಿ ಕೆಳ ಜಾರಿ ಬಿದ್ದು ಗಾಯಗೊಂಡರು. ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆ ಸೇರಿ ಮೂರು ತಿಂಗಳು ಕಳೆದರು. ಬಳಿಕ ಮನೆಗೆ ಮರಳಿದ್ದರೂ ಚೇತರಿಸಿಕೊಳ್ಳುವ ಹೊತ್ತಿಗೆ ಒಂದು ವರ್ಷ ಕಳೆದಿತ್ತು. ದುಡಿದು ಉಳಿಸಿದ ಹಣ ಅವರ ಕಷ್ಟದ ಕಾಲಕ್ಕೆ ನೆರವಿಗೆ ಬಂತು. ಈ ಘಟನೆಯ ಬಳಿಕ ಅಡಕೆ, ತೆಂಗಿನ ಮರ ಹತ್ತುವ ಕಾಯಕದಿಂದ ನಿವೃತ್ತರಾದರು. ಆದರೆ ಕೃಷಿಯನ್ನು ಮುಂದುವರಿಸಿದರು.

ಇರುವ ಒಂದು ಎಕರೆಯಲ್ಲಿ ಕೃಷಿಯಲ್ಲಿ ಯಶಸ್ವಿ!

ಮಹಾಲಿಂಗ ನಾಯ್ಕ ಒಂದು ಎಕರೆಯಲ್ಲಿ ಅಡಕೆ, ತೆಂಗು, ಬಾಳೆ, ಕಾಳುಮೆಣಸಿನ ಕೃಷಿ ಕೈಗೊಂಡಿದ್ದಾರೆ. ಇನ್ನೊಂದು ಎಕರೆಯಲ್ಲಿ ಕಾಡು ಬೆಳೆಸಿದ್ದಾರೆ. ಗೇರು ಕೃಷಿಯೂ ಇದೆ. ಮಣ್ಣಿನ ಟ್ಯಾಂಕಿಯಿಂದ ವಿದ್ಯುತ್‌ನ ಖರ್ಚಿಲ್ಲದೆ ಗ್ರಾವಿಟಿ ಮೂಲಕ ಅಡಕೆ, ತೆಂಗು ಮತ್ತು ಬಾಳೆ ಗಿಡಗಳಿಗೆ ನೀರು ಉಣಿಸುತ್ತಾರೆ. ಅವರ ತೋಟದಲ್ಲಿ 300 ಅಡಕೆ, 75 ತೆಂಗು, 200 ಬಾಳೆ ಗಿಡಗಳಿವೆ. ಹಟ್ಟಿಗೊಬ್ಬರ, ಕಾಂಪೋಸ್ಟ್‌ ಹೊರತು ಬೇರೆ ಯಾವುದೇ ಗೊಬ್ಬರದ ಬಗ್ಗೆ ಮಹಾಲಿಂಗ ನಾಯ್ಕರಿಗೆ ಗೊತ್ತಿಲ್ಲ. ಜಮೀನಿನಲ್ಲಿ ಇಂಗು ಗುಂಡಿಗಳ ಮೂಲಕ ಜಲಕೊಯ್ಲು ಮಾಡುತ್ತಾರೆ. ನಾಲ್ಕು ವರ್ಷಗಳ ಹಿಂದೆ ಎರಡು ಬೋರ್‌ವೆಲ್‌ ತೆಗೆಸಿದ್ದಾರೆ. ಮೊದಲ ಬೋರ್‌ವೆಲ್‌ 400 ಅಡಿ ಸಾಗಿದ್ದರೂ ನೀರು ದೊರೆಯಲಿಲ್ಲ. ಎರಡನೇ ಬೋರ್‌ನಲ್ಲಿ 370 ಅಡಿ ತಲುಪುವ ಹೊತ್ತಿಗೆ ಒಂದು ಇಂಚು ನೀರು ಸಿಕ್ಕಿದೆ. ಇದೀಗ ಬೋರ್‌ ವೆಲ್‌ಗೆ ಪಂಪ್‌ ಸೆಟ್‌  ಅಳವಡಿಸಿದ್ದಾರೆ.

ಬ್ಯಾಂಕ್ ಸಾಲ ಮುಟ್ಟಿಲ್ಲ!

ಮಹಾಲಿಂಗ ನಾಯ್ಕ್ ಸಾಲಕ್ಕಾಗಿ ಯಾವುದೇ ಬ್ಯಾಂಕ್‌ ಮೊರೆ ಹೋಗಿಲ್ಲ. ಕೃಷಿಯಲ್ಲಿ ದೊರೆತ ಆದಾಯದಿಂದ ಸ್ವಂತ ಮನೆ ಕಟ್ಟಿದ್ದಾರೆ. ಮನೆಗೆ ವಿದ್ಯುತ್‌ ಸೇರಿದಂತೆ ಮೂಲಸೌಕರ್ಯಗಳು ಬಂದಿವೆ. ಶಾಲಾ ಕಾಲೇಜುಗಳ ಮೆಟ್ಟಿಲು ಹತ್ತದ ಛಲಗಾರ ಮಹಾಲಿಂಗ ನಾಯ್ಕರಿಗೆ ದುಡಿಮೆ ಎಲ್ಲವನ್ನು ನೀಡಿದೆ. ಮಹಾಲಿಂಗ ನಾಯ್ಕರ ಏಕಾಂಗಿ ಸಾಧನೆ ಕೇಂದ್ರದವರೆಗೂ ತಲುಪಿತ್ತು. ಅದು ಈಗ ಪದ್ಮಶ್ರೀ ದೊರೆಯಲು ಸಹಾಯವಾಗಿದೆ.

ವಿಶೇಷ ವರದಿ: ಪೃಥ್ವಿರಾಜ್ ಬೊಮ್ಮನಕೆರೆ

ಇದನ್ನೂ ಓದಿ: Padma awards 2022: ಧಾರವಾಡ ಜಿಲ್ಲೆಯ ಕೂರಿಗೆ ತಜ್ಞನಿಗೆ ಒಲಿದು ಬಂತು ಪದ್ಮಶ್ರೀ ಪುರಸ್ಕಾರ

Padma awards 2022: ನೀರಜ್ ಚೋಪ್ರಾ ಸೇರಿದಂತೆ 8 ಮಂದಿ ಕ್ರೀಡಾಪಟುಗಳಿಗೆ ಪದ್ಮಶ್ರೀ ಪ್ರಶಸ್ತಿ ಗೌರವ

Published On - 9:39 pm, Tue, 25 January 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ