
ಬೆಂಗಳೂರು, ಜೂ5: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಆರಂಭವಾಗಿದ್ದು, ಮುಂದಿನ ಒಂದು ವಾರದ ಕಾಲ ವಿವಿಧ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಜೂನ್ 5 ರಿಂದ ಅಂದರೆ ಇಂದಿನಿಂದಲ್ಲೇ ಜೂನ್ 11 ರವರೆಗೆ ಕರ್ನಾಟಕದ ಒಳನಾಡು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಹವಾಮಾನ ಇಲಾಖೆಯ ವರದಿಯ ಪ್ರಕಾರ, ಒಳನಾಡಿನ ಜಿಲ್ಲೆಗಳ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಕನಿಷ್ಠ 64.5 ಮಿಲಿಮೀಟರ್‌ನಿಂದ ಗರಿಷ್ಠ 115.4 ಮಿಲಿಮೀಟರ್‌ನಷ್ಟು ಭಾರಿ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಮಳೆಯ ತೀವ್ರತೆ ಹೆಚ್ಚಿರಲಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆಯಾಗಿ ಈ ಭಾಗಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಧಾರಾಕಾರ ಮಳೆಯ ಜೊತೆಗೆ ಸಿಡಿಲು, ಮಿಂಚು ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮತ್ತು ರೈತರು ಅನಗತ್ಯವಾಗಿ ಹೊರಗಡೆ ತಿರುಗಾಡದಂತೆ ಹಾಗೂ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಕೋರಲಾಗಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನ ಹಾಗೂ ನದಿ, ಹಳ್ಳ-ಕೊಳ್ಳಗಳ ಪಕ್ಕದಲ್ಲಿರುವ ನಾಗರಿಕರು ಹವಾಮಾನ ಇಲಾಖೆಯ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗಿ ಎಂದು ಹೇಳಿದೆ.
ಇನ್ನು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮಿತಿಮೀರಲಿದ್ದು, ಜೂನ್ 5 ರಿಂದ ಜೂನ್ 11 ರವರೆಗೆ ಭಾರಿ ಹಾಗೂ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಮುನ್ಸೂಚನೆ ನೀಡಿದೆ. ಕರಾವಳಿ ತೀರದಲ್ಲಿ ಹವಾಮಾನದ ಏರುಪೇರು ತೀವ್ರವಾಗಿರಲಿರುವ ಕಾರಣ ಮುನ್ನೆಚ್ಚರಿಕೆಯಾಗಿ ಈ ಭಾಗಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಕನಿಷ್ಠ 64.5 ಮಿಲಿಮೀಟರ್‌ನಿಂದ ಆರಂಭವಾಗಿ, ಗರಿಷ್ಠ 204.4 ಮಿಲಿಮೀಟರ್‌ನಷ್ಟು ಅತ್ಯಂತ ಭಾರಿ ಪ್ರಮಾಣದ ಮಳೆಯಾಗುವ ಅಪಾಯವಿದೆ. ಬಿರುಗಾಳಿಯ ವೇಗವು ಹೆಚ್ಚಿರಲಿದ್ದು, ಕಡಲ ತೀರದಲ್ಲಿ ಅಲೆಗಳ ಅಬ್ಬರ ಜೋರಾಗಿರಲಿದೆ.
ಇದನ್ನೂ ಓದಿ: ರಾಜ್ಯದ ಹಲವೆಡೆ ವರುಣನ ಅಬ್ಬರ, ವಿವಿಧ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಣೆ!
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ