ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ
Karnataka Weather Updates: ಚಂಡಮಾರುತ ಸಾಧ್ಯತೆ ಹಿನ್ನೆಲೆಯಲ್ಲಿ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನವ ಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ) ಹಡಗುಗಳು, ಬಂದರು ಬಳಕೆದಾರರಿಗೆ ಸೂಚನೆ ನೀಡಲಾಗಿದೆ. ಪರಿಣಾಮವಾಗಿ ಎನ್‌ಎಂಪಿಎನಲ್ಲಿ ಎಲ್ಲಾ ಕಾರ್ಯಾಚರಣೆಗಳು ಸ್ಥಗಿತಗೊಳ್ಳಲಿವೆ.
ಮಂಗಳೂರು, ಅಕ್ಟೋಬರ್ 17: ಅರಬ್ಬಿ ಸಮುದ್ರದ ಲಕ್ಷದ್ವೀಪದ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಇದೆ. ಇದರಿಂದ ಕರಾವಳಿ ಕರ್ನಾಟಕ (Coastal Karnataka) ಸೇರಿದಂತೆ ರಾಜ್ಯದಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮಂಗಳವಾರ ತಿಳಿಸಿದೆ. ಕರಾವಳಿ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಂಗಳವಾರ ಮಧ್ಯಾಹ್ನದ ನಂತರ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.
ಅಕ್ಟೋಬರ್ 16 ರಂದು ಸೋಮವಾರ ಸಂಜೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಮತ್ತು ಮಂಗಳೂರಿನಲ್ಲಿ ಭಾರೀ ಮಳೆ ಸುರಿದಿತ್ತು.
ಚಂಡಮಾರುತ ಸಾಧ್ಯತೆ ಹಿನ್ನೆಲೆಯಲ್ಲಿ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನವ ಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ) ಹಡಗುಗಳು, ಬಂದರು ಬಳಕೆದಾರರಿಗೆ ಸೂಚನೆ ನೀಡಲಾಗಿದೆ. ಪರಿಣಾಮವಾಗಿ ಎನ್‌ಎಂಪಿಎನಲ್ಲಿ ಎಲ್ಲಾ ಕಾರ್ಯಾಚರಣೆಗಳು ಸ್ಥಗಿತಗೊಳ್ಳಲಿವೆ.
ಸೋಮವಾರ ವಾಮಂಜೂರಿನಲ್ಲಿ ಸಿಡಿಲು ಬಡಿದು ಐದು ವರ್ಷದ ಮಗು ಮತ್ತು ಮಹಿಳೆಯ ಕಿವಿಗೆ ಗಾಯವಾಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಸೋಮವಾರ ಸಂಜೆ ಸುರಿದ ಭಾರಿ ಮಳೆಗೆ ಎನ್‌ಎಚ್ 66ರಲ್ಲಿ ಪಣಂಬೂರು, ಕುಳೂರು, ನಂತೂರುಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಇದನ್ನೂ ಓದಿ: Karnataka Weather: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ
ಇಂದೂ (ಮಂಗಳವಾರ) ಸಹ ಮಂಗಳೂರು, ಬಂಟ್ವಾಳ, ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಭಾರೀ ಮಳೆಯಾಗಿದೆ. ಹಲವೆಡೆ ಗುಡುಗು, ಸಿಡಿಲಿನ ಅಬ್ಬರ ಜೋರಾಗಿತ್ತು.
ದಕ್ಷಿಣ ಕನ್ನಡ ಮಾತ್ರವಲ್ಲದೆ ಕೊಡಗು, ಉಡುಪಿ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಮಂಡ್ಯ, ತುಮಕೂರು, ರಾಮನಗರ, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ ಎಂದು ‘ಕರ್ನಾಟಕ ವೆದರ್’ ಟ್ವೀಟ್ ಮಾಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ