ಮಂಗಳೂರು: ಕಂಕನಾಡಿ ಬಳಿ ಚಲಿಸುತ್ತಿದ್ದ ಆಟೊ ನಿಗೂಢ ಸ್ಪೋಟ: ಪ್ರಯಾಣಿಕನ ಹೇಳಿಕೆಯಿಂದ ಹೆಚ್ಚಾದ ಅನುಮಾನ
Autorickshaw Explodes in Mangalore: ಆಟೋದಲ್ಲಿದ್ದ ಪ್ರಯಾಣಿಕನ ಬಗ್ಗೆ ಅನುಮಾನ ಹೆಚ್ಚಿದೆ. ಈತ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಬರುತ್ತಿದ್ದ ಆಟೋವನ್ನು ಹತ್ತಿದ್ದ.
ಮಂಗಳೂರು: ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಪರಿಶೀಲನೆ ವೇಳೆ ಆಟೋದಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು ಬೋಲ್ಟ್, ಸರ್ಕ್ಯೂಟ್ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತೆಯಾಗಿದೆ. ಸಿಕ್ಕ ವಸ್ತುಗಳನ್ನು FSL ತಂಡ ಪರೀಕ್ಷೆಗೊಳಪಡಿಸಿದೆ.
ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟವಾಗಿತ್ತು. ಈ ಸಂಬಂಧ ತನಿಖೆ ನಡೆಸಿದ ಪೊಲೀಸರಿಗೆ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಸ್ಪೋಟಗೊಂಡ ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು ಬೋಲ್ಟ್, ಸರ್ಕ್ಯೂಟ್ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತೆಯಾಗಿದೆ. ಲಘು ತೀವ್ರತೆಯ ಸ್ಫೋಟಕ ಬಳಸಿರುವ ಶಂಕೆ ವ್ಯಕ್ತವಾಗಿದ್ದು ಈಗಾಗಲೇ ಸ್ಥಳದಲ್ಲಿ ಸಿಕ್ಕಿರುವ ವಸ್ತುಗಳನ್ನು FSL ತಂಡ ಪರೀಕ್ಷೆಗೊಳಪಡಿಸಿವೆ.
ಇನ್ನು ಆಟೋದಲ್ಲಿದ್ದ ಪ್ರಯಾಣಿಕನ ಬಗ್ಗೆ ಅನುಮಾನ ಹೆಚ್ಚಿದೆ. ಈತ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಬರುತ್ತಿದ್ದ ಆಟೋವನ್ನು ಹತ್ತಿದ್ದ. ಘಟನಾ ಸ್ಥಳದ 1 ಕಿ.ಮೀ ದೂರದ ನಾಗುರಿ ಬಳಿ ಆಟೋ ಹತ್ತಿದ್ದು ಸ್ಪೋಟದ ತೀವ್ರತೆಗೆ ಪ್ರಯಾಣಿಕನ ದೇಹದ ಅರ್ಧ ಭಾಗ ಸುಟ್ಟ ಗಾಯವಾಗಿದೆ. ಕೈ, ಎದೆ, ಮುಖದ ಭಾಗಕ್ಕೆ ಗಾಯವಾಗಿದ್ದು ಸದ್ಯ ಗಂಭೀರ ಸ್ಥಿತಿಯಲ್ಲಿರುವ ಪ್ರಯಾಣಿಕನಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗಾಯಾಳು ಕಾರ್ಮಿಕ ಉತ್ತರಪ್ರದೇಶ ನಿವಾಸಿಯಾಗಿರುವ ಶಂಕೆ ವ್ಯಕ್ತವಾಗಿದ್ದು ಪ್ರೇಮ್ ರಾಜ್ ಕನೋಗಿ ಎಂಬ ಹೆಸರಿನ ಐಡಿ ದಾಖಲೆ ಪತ್ತೆಯಾಗಿದೆ. ಆತನ ಬಾಕ್ಸ್, ಬ್ಯಾಗ್ನಿಂದಲೇ ಸ್ಫೋಟ ಸಂಭವಿಸಿರಬಹುದು ಎನ್ನಲಾಗಿದೆ.
ಈತ ಹಿಂದಿ ಭಾಷೆ ಮಾತನಾಡುತ್ತಿದ್ದ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಆದ್ರೆ ಆಟೋ ಪ್ರಯಾಣಿಕನ ತನಿಖೆ ವೇಳೆ ಅಸ್ಪಷ್ಟ ಮಾಹಿತಿ ಸಿಕ್ಕಿದೆ. ಈತ ಪೊಲೀಸರ ಎದುರು ಗೊಂದಲಕಾರಿ ಹೇಳಿಕೆ ನೀಡುತ್ತಿದ್ದಾನೆ. ಒಮ್ಮೆ ತಾನು ಮೈಸೂರಿನಿಂದ ಬಂದಿದ್ದಾಗಿ ಹೇಳಿದ್ದು ಅಣ್ಣ ಬಾಬುರಾವ್ ಗೆ ಕರೆ ಮಾಡಿ ಅಂತ ನಂಬರ್ ನೀಡಿದ್ದ. ಆ ನಂಬರ್ಗೆ ಕರೆ ಮಾಡಿದಾಗ ಆತ ತನ್ನ ಸಂಬಂಧಿಕನೇ ಅಲ್ಲ, ಆತ ತನ್ನ ರೂಮ್ ನಲ್ಲಿದ್ದ, ಬೆಂಗಳೂರಿಗೆ ಹೋಗ್ತೇನೆಂದು ಹೋಗಿದ್ದ ಎಂದಿದ್ದಾನೆ. ಆತನ ಬಗ್ಗೆ ಬೇರೆ ಗೊತ್ತಿಲ್ಲ ಎಂದಿದ್ದಾನೆ. ಹೀಗಾಗಿ ಗಾಯಗೊಂಡ ಪ್ರಯಾಣಿಕನ ಬಗ್ಗೆ ಅನುಮಾನ ಹೆಚ್ಚಾಗಿದೆ.
ಮಂಗಳೂರು ಆಟೋ ಸ್ಪೋಟದ ತನಿಖೆಗೆ ಎನ್.ಐ.ಎ ಟೀಂ?
ಇಂದು ಬೆಂಗಳೂರಿನಿಂದ ಮಂಗಳೂರಿಗೆ ಎನ್.ಐ.ಎ ತಂಡ ಆಗಮಿಸಿ ಘಟನಾ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ನಿನ್ನೆ ಸಿಎಂ ಬೊಮ್ಮಾಯಿ ಮಂಗಳೂರು ಭೇಟಿ ಬೆನ್ನಲ್ಲೇ ಸ್ಪೋಟವಾಗಿದ್ದು ಇದನ್ನು ರಾಜ್ಯ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಬೆಂಗಳೂರಿನಿಂದ ಮತ್ತಷ್ಟು ಬಾಂಬ್ ತಜ್ಞರ ತಂಡವೂ ಮಂಗಳೂರಿಗೆ ಬರಲಿದೆ. ಮಂಗಳೂರು ಪೊಲೀಸರು ಇಡೀ ಘಟನೆ ಬಗ್ಗೆ ಕೂಲಂಕುಶ ತನಿಖೆಗೆ ಇಳಿದಿದ್ದಾರೆ. ಎನ್.ಐ.ಎ ಉಗ್ರ ಕೃತ್ಯದ ಆಯಾಮದಲ್ಲಿ ತನಿಖೆ ನಡೆಸಲಿದೆ.
ಇನ್ನು ಈ ಸಂಬಂಧ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಉನ್ನತ ಮಟ್ಟದ ತನಿಖೆಗೆ ಸೂಚನೆ ನೀಡಿದ್ದೇನೆ. ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗ್ತಿದೆ. ಮಂಗಳೂರಿನಲ್ಲಿ ಸೀನಿಯರ್ಸ್ ಆಫೀಸರ್ಸ್ ಇದ್ದಾರೆ. ಕೇಸ್ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗ್ತಿದೆ ಎಂದರು.
ಪ್ರಕರಣದ ಬಗ್ಗೆ ಮಾಹಿತಿ ಪಡೆದ ಸಿಎಂ ಬಸವರಾಜ ಬೊಮ್ಮಾಯಿ
ಇನ್ನು ಈ ಪ್ರಕರಣ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿಯವರು ಡಿಜಿ-ಐಜಿಪಿ ಸೂದ್, ಗೃಹ ಸಚಿವ ಆರಗ ಜ್ಞಾನೇಂದ್ರರಿಂದ ಮಾಹಿತಿ ಪಡೆದಿದ್ದಾರೆ. ನಿನ್ನೆ ರಾತ್ರಿ ಸಿಎಂ ಭೇಟಿಯಾಗಿ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.
ಇದೊಂದು ಉಗ್ರ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮಾಡಿದ್ದಾರೆ. ಇದು ಅನಿರೀಕ್ಷಿತವಾಗಿ ಸ್ಫೋಟಗೊಂಡಿರುವುದು ಅಲ್ಲ. ಉದ್ದೇಶಪೂರ್ವಕವಾಗಿ ಹಾನಿ ಉಂಟು ಮಾಡಲು ಪ್ಲ್ಯಾನ್ ಮಾಡಲಾಗಿದೆ. ಸಾವು ನೋವು, ಹಾನಿ ಉಂಟು ಮಾಡಲು ಹೀಗೆ ಮಾಡಿದ್ದಾರೆ. ಕರ್ನಾಟಕ ಪೊಲೀಸರಿಂದ ಕೇಂದ್ರ ತನಿಖಾ ಸಂಸ್ಥೆಗಳ ಜತೆ ತನಿಖೆ ನಡೆಸಲಾಗುತ್ತಿದೆ ಎಂದು ಟ್ವೀಟ್ ಮೂಲಕ ಡಿಜಿ-ಐಜಿಪಿ ಪ್ರವೀಣ್ ಸೂದ್ ಮಾಹಿತಿ ನೀಡಿದ್ದಾರೆ.
ಪ್ರಕರಣ ಸಂಬಂಧ ಮಂಗಳೂರು ಪೊಲೀಸರಿಂದ ಓರ್ವ ವಶಕ್ಕೆ
ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಪ್ಲ್ಯಾನ್ ಮಾಡಿದ್ದ ಸ್ಥಳಕ್ಕೆ ಸ್ಫೋಟಕ ವಸ್ತು ಸಾಗಿಸುತ್ತಿದ್ದಾಗ ಸ್ಫೋಟ? ಸ್ಫೋಟದ ವೇಳೆ ಆತನಿಗೂ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಹಿಂದೂ ವ್ಯಕ್ತಿಯ ಹೆಸರಿನಲ್ಲಿ ಐಡಿಕಾರ್ಡ್, ಆಧಾರ್ ಕಾರ್ಡ್ ಪತ್ತೆಯಾಗಿದೆ. ಸದ್ಯ ಪತ್ತೆಯಾದ ಆಧಾರ್ ನಕಲಿ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ.
Published On - 8:48 am, Sun, 20 November 22