
ಮಂಗಳೂರು, ನವೆಂಬರ್ 19: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಚರ್ಚ್ ಪಾದ್ರಿ ಸಿಪ್ರಿಯನ್ ಪಿಂಟೋ ಅವರನ್ನು ಪೊಲೀಸರು ಮತ್ತೊಮ್ಮೆ ಬಂಧಿಸಿದ್ದಾರೆ. ಈಗಾಗಲೇ ಇದೇ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಪಾದ್ರಿ, ಇದೀಗ ಎರಡನೇ ಬಾರಿ ಮತ್ತೆ ಜೈಲು ಸೇರಿದ್ದಾರೆ. ಡಿಸೆಂಬರ್ 2ರವರೆಗೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕಳೆದ ಮೇ ತಿಂಗಳಲ್ಲಿ ಮಂಗಳೂರಿನ ಪೆರ್ಮನ್ನೂರು ಗ್ರಾಮದ ಸೇಂಟ್ ಸೆಬಾಸ್ಟಿಯನ್ ಚರ್ಚ್‌ನಲ್ಲಿ ಸಿಪ್ರಿಯನ್ ಪಿಂಟೋ ಪಾದ್ರಿಯಾಗಿದ್ದರು. ಈ ಸಂದರ್ಭದಲ್ಲಿ 13 ವರ್ಷದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮೇ 13, 2026ರಂದು ದೂರು ದಾಖಲಾಗಿತ್ತು.
ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಭಾರತೀಯ ನ್ಯಾಯ ಸಂಹಿತೆಯ ಕಲಂ 75(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸ್ ಕಮಿಷನರ್ ಕೇಂದ್ರ ವಿಭಾಗದ ಎಸಿಪಿಗೆ ವಹಿಸಿದ್ದರು. ಇದೀಗ ಇದೇ ಪ್ರಕರಣದಲ್ಲಿ ಸಿಪ್ರಿಯನ್ ಪಿಂಟೋ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.
ಕಳೆದ ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಸಿಪ್ರಿಯನ್ ಪಿಂಟೋ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ವೆಲೆನ್ಸಿಯಾ ಚರ್ಚ್‌ನಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಪಾದ್ರಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಇದೀಗ ಮತ್ತೆ ಸಿಪ್ರಿಯನ್ ಪಿಂಟೋ ಬಂಧನವಾಗಿದ್ದು, ಡಿಸೆಂಬರ್ 2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದ ವಿಚಾರದಲ್ಲಿ ಮೈಸೂರಿನ ಒಡನಾಡಿ ಸಂಸ್ಥೆಯೂ ಹೋರಾಟ ನಡೆಸುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ