
ಮಂಗಳೂರು ನ.21: ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜು ಕ್ಯಾಂಪಸ್‌ನಿಂದಲೇ ಪೋಷಕರ ಕಡೆಯವರು ಯುವತಿಯನ್ನು ಬಲವಂತವಾಗಿ ಥಾರ್ ವಾಹನದಲ್ಲಿ ಅಪಹರಿಸಿಕೊಂಡು ಹೋಗಿದ್ದ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಕೋಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಮಂಗಳೂರು ಪೊಲೀಸರು, ಅಪಹರಣಕ್ಕೊಳಗಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಕೇರಳದ ಸಂಬಂಧಿಕರ ಮನೆಯಲ್ಲಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳೂರಿನ ಕಣಚೂರು ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯಾಗಿರುವ ಮುಸ್ಲಿಂ ಯುವತಿ, ಹಿಂದೂ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈ ಪ್ರೀತಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಪೋಷಕರ ಕಡೆಯವರು, ಕಾಲೇಜು ಕ್ಯಾಂಪಸ್‌ನಿಂದಲೇ ವಿದ್ಯಾರ್ಥಿನಿಯನ್ನು ಬಲವಂತವಾಗಿ ಥಾರ್ ವಾಹನದಲ್ಲಿ ಕಿಡ್ನಾಪ್ ಮಾಡಿ ಕರೆದೊಯ್ದಿದ್ದರು. ವಿದ್ಯಾರ್ಥಿನಿಯನ್ನು ವಾಹನದಲ್ಲಿ ಹೊತ್ತೊಯ್ಯುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು.
ಪ್ರಕರಣ ದಾಖಲಿಸಿಕೊಂಡ ಕೋಣಾಜೆ ಪೊಲೀಸರು ತನಿಖೆ ಚುರುಕುಗೊಳಿಸಿ ಕೇರಳದ ಸಂಬಂಧಿಕರ ಮನೆಯಲ್ಲಿದ್ದ ಯುವತಿಯನ್ನು ಪತ್ತೆಹಚ್ಚಿದ್ದಾರೆ. ಬಳಿಕ ಯುವತಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದ್ದು, “ನನಗೆ ಮನೆಯವರ ಜೊತೆ ಹೋಗುವ ಇಚ್ಛೆ ಇಲ್ಲ” ಎಂದು ಯುವತಿ ಸ್ಪಷ್ಟವಾಗಿ ತಿಳಿಸಿದ್ದಾಳೆ. ಕಿಡ್ನಾಪ್ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಕೋಣಾಜೆ ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದು, ಕಾನೂನು ಪ್ರಕ್ರಿಯೆಯಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಇದನ್ನೂ ಓದಿ: ಹಿಂದೂ ಯುವಕನೊಂದಿಗೆ ಮುಸ್ಲಿಂ ಯುವತಿ ಲವ್: ಪೋಷಕರಿಂದಲೇ ವಿದ್ಯಾರ್ಥಿನಿ ಅಪಹರಣ
ವಿದ್ಯಾರ್ಥಿನಿಯನ್ನು ಥಾರ್ ವಾಹನದಲ್ಲಿ ಕರೆದೊಯ್ಯುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಪ್ರಕರಣದ ಕಾನೂನು ಅಂಶಗಳನ್ನು ಸ್ಪಷ್ಟಪಡಿಸಿದ್ದಾರೆ. “ಯುವತಿಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಕುಟುಂಬದ ಸದಸ್ಯರು ಬಲವಂತವಾಗಿ ಕರೆದೊಯ್ದಿದ್ದಾರೆ ಎಂಬ ಆರೋಪವಿದೆ. ಈ ರೀತಿಯ ಕೃತ್ಯವೂ ಕಾನೂನಿನ ಪ್ರಕಾರ ಅಪರಾಧವಾಗುತ್ತದೆ” ಎಂದು ಆಯುಕ್ತರು ಎಚ್ಚರಿಸಿದ್ದಾರೆ.
“ಯುವತಿ ಪ್ರಾಪ್ತವಯಸ್ಕಳಾಗಿದ್ದು, ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ. ಘಟನೆ ನಡೆದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರೆ, ವಾಹನ ಹೆಚ್ಚು ದೂರ ಸಾಗುವ ಮುನ್ನವೇ ತಡೆದು ಯುವತಿಯನ್ನು ಪತ್ತೆಹಚ್ಚಲು ಸಾಧ್ಯವಾಗುತ್ತಿತ್ತು” ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:19 am, Sat, 21 November 26