ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶ ಪ್ರಜೆಗಳು ಪೊಲೀಸ್ ವಶಕ್ಕೆ
ಮಂಗಳೂರಿನ ಪಣಂಬೂರು ಪೊಲೀಸರು ಇಬ್ಬರು ಬಾಂಗ್ಲಾದೇಶ ಪ್ರಜೆಗಳನ್ನು ಅಕ್ರಮವಾಗಿ ನೆಲೆಸಿದ್ದಕ್ಕಾಗಿ ಬಂಧಿಸಿದ್ದಾರೆ. ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಪಣಂಬೂರು ಬೀಚ್ ಬಳಿಯ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದವರನ್ನು ಪತ್ತೆ ಹಚ್ಚಲಾಗಿದ್ದು, ಬಂಧನ ಕೇಂದ್ರದಲ್ಲಿ ಇರಿಸಲಾಗಿದೆ. ಅವರನ್ನು ಗಡಿಪಾರು ಮಾಡುವ ಕಾನೂನು ಪ್ರಕ್ರಿಯೆಗಳು ಈಗಾಗಲೇ ಆರಂಭವಾಗಿವೆ. ಕರ್ನಾಟಕದಲ್ಲಿ ಅಕ್ರಮ ವಲಸಿಗರನ್ನು ಪತ್ತೆ ಹಚ್ಚುವ ಕಾರ್ಯಾಚರಣೆ ತೀವ್ರಗೊಂಡಿದೆ.

ಮಂಗಳೂರು, ನ.14: ಎಸ್ಐಆರ್ ಪ್ರಕ್ರಿಯೆಯ ನಂತರ ಅಕ್ರಮವಾಗಿ ಭಾರತದಲ್ಲಿ ಉಳಿದವರಿಗೆ ಗೇಟ್ ಪಾಸ್ ನೀಡಲಾಗುತ್ತಿದೆ. ಇದರ ಜತೆಗೆ ದೇಶದ ಪೊಲೀಸ್ ಇಲಾಖೆಯೂ ಕೂಡ ಅಕ್ರಮವಾಗಿ ಭಾರತದಲ್ಲಿ ವಾಸಿಸುತ್ತಿರುವ ವಿದೇಶಿಗರನ್ನು ಪತ್ತೆ ಮಾಡಿ ಬಂಧಿಸುತ್ತಿದ್ದಾರೆ. ಕರ್ನಾಟಕದಲ್ಲೂ ಕೂಡ ಈ ಕಾರ್ಯಚರಣೆ ನಡೆಯುತ್ತಿದೆ. ಇದೀಗ ಯಾವುದೇ ಅಧಿಕೃತ ದಾಖಲಾತಿಗಳಿಲ್ಲದೆ ಭಾರತಕ್ಕೆ ಅಕ್ರಮವಾಗಿ ನುಸುಳಿ ಮಂಗಳೂರಿನಲ್ಲಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪಣಂಬೂರು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ಪಣಂಬೂರು ಬೀಚ್ ಹತ್ತಿರದ ರೆಸ್ಟೋರೆಂಟ್‌ನಲ್ಲಿ ಇಬ್ಬರು ಬಾಂಗ್ಲಾದೇಶದ ಪ್ರಜೆಗಳು ಕೆಲಸ ಮಾಡುತ್ತಿರುವ ಬಗ್ಗೆ ಪಣಂಬೂರು ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಅವರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಆಧಾರದ ಮೇಲೆ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸದರಿ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ವೇಳೆ ಇಬ್ಬರೂ ಯಾವುದೇ ಅಧಿಕೃತ ದಾಖಲಾತಿಗಳಿಲ್ಲದೆ (ಪಾಸ್‌ಪೋರ್ಟ್ ಅಥವಾ ವೀಸಾ) ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವುದು ಪತ್ತೆಯಾಗಿದೆ.
ವಶಕ್ಕೆ ಪಡೆಯಲಾದ ಇಬ್ಬರು ಬಾಂಗ್ಲಾದೇಶ ಪ್ರಜೆಗಳನ್ನು ಮುಂದಿನ ಕಾನೂನು ಪ್ರಕ್ರಿಯೆಯ ಭಾಗವಾಗಿ ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿ ಇರಿಸಲಾಗಿದೆ. ಅವರನ್ನು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ ಮುಂದೆ ಹಾಜರುಪಡಿಸಿ, ಬಳಿಕ ಸ್ವದೇಶವಾದ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ಕಾನೂನು ಪ್ರಕ್ರಿಯೆಗೆ ಪಣಂಬೂರು ಪೊಲೀಸರು ಚಾಲನೆ ನೀಡಿದ್ದಾರೆ. ಪಣಂಬೂರು ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಸಲೀಂ ಅಬ್ಬಾಸ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಪಿಎಸ್‌ಐಗಳಾದ ಶ್ರೀಕಲಾ ಕೆ.ಟಿ. ಮತ್ತು ಜ್ಞಾನಶೇಖರ ಹಾಗೂ ಪೊಲೀಸ್ ಸಿಬ್ಬಂದಿ ಇಮ್ತಿಯಾಝ್ ಫಕ್ಕಿರೇಶ್ ಮತ್ತು ರಾಕೇಶ್ ಎಲ್.ಎಂ. ಪಾಲ್ಗೊಂಡಿದ್ದರು.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:16 pm, Sat, 14 November 26




