AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಳ್ಳಾಲ: ಪುರಾಣ ಪ್ರಸಿದ್ಧ ಕೊಂಡಾಣ ದೈವಸ್ಥಾನದ ಭಂಡಾರ ಮನೆ ಧ್ವಂಸ; ಮೂವರು ಅರೆಸ್ಟ್

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೊಂಡಾಣ ಕ್ಷೇತ್ರದ ಪಿಲಿಚಾಮುಂಡಿ ದೈವಸ್ಥಾನಕ್ಕೆ ಸೇರಿದ ನಿರ್ಮಾಣ ಹಂತದ ಭಂಡಾರ ಮನೆಯನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಜೆಸಿಬಿ ಮೂಲಕ ಧ್ವಂಸಗೊಳಿಸಿದ ಘಟನೆ ನಡೆದಿದೆ. ಭಾರಿ ಸಂಖ್ಯೆಯಲ್ಲಿ ಭಕ್ತರು ಜಮಾವಣೆಗೊಂಡ ಹಿನ್ನೆಲೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಎರಡು ಪೊಲೀಸ್ ತುಕಡಿ ನಿಯೋಜನೆ ಮಾಡಲಾಗಿದೆ.

ಉಳ್ಳಾಲ: ಪುರಾಣ ಪ್ರಸಿದ್ಧ ಕೊಂಡಾಣ ದೈವಸ್ಥಾನದ ಭಂಡಾರ ಮನೆ ಧ್ವಂಸ; ಮೂವರು ಅರೆಸ್ಟ್
ಧ್ವಂಸಗೊಂಡಿರುವ ಕಟ್ಟಡ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi|

Updated on:Mar 03, 2024 | 5:12 PM

Share

ಮಂಗಳೂರು, ಮಾ.3: ಪಿಲಿಚಾಮುಂಡಿ ದೈವಸ್ಥಾನಕ್ಕೆ ಸೇರಿದ ನಿರ್ಮಾಣ ಹಂತದ ಭಂಡಾರ ಮನೆಯನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಜೆಸಿಬಿ ಮೂಲಕ ಧ್ವಂಸಗೊಳಿಸಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲ (Ullala) ತಾಲೂಕಿನ ಕೊಂಡಾಣದಲ್ಲಿ (Kondana) ನಡೆದಿದೆ. ಕೊಂಡಾಣ ಕ್ಷೇತ್ರದ ಪಿಲಿಚಾಮುಂಡಿ (Pilichamundi), ಬಂಟ, ವೈದ್ಯನಾಥ ದೇವಸ್ಥಾನಕ್ಕೆ ಸೇರಿದ ನೂತನವಾಗಿ ನಿರ್ಮಾಣ ಮಾಡಲಾಗುತ್ತಿದ್ದ ಭಂಡಾರ ಮನೆಯನ್ನು ಧ್ವಂಸಗೊಳಿಸಲಾಗಿದೆ. ದೈವಸ್ಥಾನದ ಆಡಳಿತ ಮಂಡಳಿ ವಿಚಾರವಾಗಿ ಎರಡು ಬಣಗಳ ಮಧ್ಯೆ ವಿವಾದ ಉಂಟಾಗಿ ಭಂಡಾರದ ಮನೆ ಧ್ವಂಸ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಕೋಟೆಕಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆನಂದ್, ತಹಶೀಲ್ದಾ‌ರ್ ಪುಟ್ಟರಾಜು, ಎಸಿಪಿ ಧನ್ಯಾ ನಾಯಕ್ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆನಂದ್ ಅವರು ಠಾಣೆಗೆ ದೂರು ನೀಡಿದ್ದಾರೆ. ಭಾರೀ ಸಂಖ್ಯೆಯಲ್ಲಿ ಭಕ್ತರ ಜಮಾವಣೆ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸರ ಜೊತೆಗೆ ಎರಡು ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ಇಲ್ಲಿ ಕೇಳಿ ಬರುತ್ತಿದೆಯಂತೆ ರಕ್ತೇಶ್ವರಿ ದೈವದ ಗೆಜ್ಜೆ ಸದ್ದು; ಪ್ರಶ್ನಾ ಚಿಂತನೆಯಲ್ಲಿ ಸಿಕ್ಕ ಉತ್ತರವೇನು ಗೊತ್ತಾ?

ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ ಸೇರುವ ಕೊಂಡಾಣ ದೇವಸ್ಥಾನದ ಭಂಡಾರ ಮನೆಯನ್ನು ಮುಜರಾಯಿ ಇಲಾಖೆಗೆ ಸೇರಿಸಲು ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ ಸೇರಿದಂತೆ ಹಲವರು ಯತ್ನಿಸಿದ್ದರು. ಆದರೆ ಇದಕ್ಕೆ ಖಾಸಗಿ ಭಂಡಾರ ಮನೆಯವರು ಸಮ್ಮತಿ ನೀಡಿರಲಿಲ್ಲ. ಅಲ್ಲದೆ, ಸಮಿತಿಯು ದೈವಗಳಿಗೆ ಬೇರೆ ಭಂಡಾರ ಮನೆ ನಿರ್ಮಾಣಕ್ಕೆ ಮುಂದಾಗಿತ್ತು.

ದೇಗುಲದ ಪಕ್ಕದ ಜಾಗದಲ್ಲಿ ಜನವರಿ 8 ರಂದು ಕೃಷ್ಣ ಶೆಟ್ಟಿ ನೇತ್ವತ್ವದಲ್ಲಿ ಭಂಡಾರ ಮನೆಯ ಶಿಲಾನ್ಯಾಸ ಮಾಡಲಾಗಿತ್ತು. ದಾನಿಗಳ ದೇಣಿಗೆಯಿಂದ ಭಂಡಾರ ಮನೆಯ ಕಾಮಗಾರಿ ಪೂರ್ಣಗೊಂಡಿತ್ತು. ಈ ಮಧ್ಯೆ ಸಮಿತಿಯ ಅವಧಿ ಮುಗಿದ ಹಿನ್ನೆಲೆಯಲ್ಲಿ ಸಮಿತಿ ಅಧ್ಯಕ್ಷ ಕೃಷ್ಣ ಶೆಟ್ಟಿ ಅವರು ಎರಡು ದಿನದ ಹಿಂದಷ್ಟೇ ಅಧಿಕಾರ ಹಸ್ತಾಂತರಿಸಿದ್ದರು. ಕೃಷ್ಣ ಶೆಟ್ಟಿ ಅಧ್ಯಕ್ಷ ಸ್ಥಾನದಿಂದ ಇಳಿಯುತ್ತಿದ್ದಂತೆ ಭಂಡಾರ ಮನೆ ಧ್ವಂಸಗೊಂಡಿದೆ.

ಜೆಸಿಬಿಯಿಂದ ಏಕಾಏಕಿ ನಿರ್ಮಾಣ ಹಂತದ ಭಂಡಾರ ಮನೆ ನೆಲಸಮಗೊಳಿಸಲಾಗಿದ್ದು, ಕಾರ್ಣಿಕ ದೈವದ ಕೋಟ್ಯಂತರ ರೂ.ಪಾಯಿ ಒಡವೆಗಳ ಅಧಿಪತ್ಯಕ್ಕಾಗಿ ಸಂಘರ್ಷ ಇದಾಗಿದೆ ಎಂದು ಆರೋಪಿಸಲಾಗಿದೆ. ಸದ್ಯ ಮುತ್ತಣ್ಣ ಶೆಟ್ಟಿ ಕುಟುಂಬಸ್ಥರ ಸುಪರ್ದಿಯಲ್ಲೇ ಒಡವೆಗಳಿದ್ದು, ಘಟನೆ ಸಂಬಂಧ ಉಳ್ಳಾಲ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೂವರು ಆರೋಪಿಗಳ ಬಂಧನ

ಭಂಡಾರ ಮನೆ ಧ್ವಂಸ ಪ್ರಕರಣ ಸಂಬಂಧ ಉಳ್ಳಾಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮುತ್ತಣ್ಣ ಶೆಟ್ಟಿ, ಧೀರಜ್ ಹಾಗೂ ಶಿವರಾಜ್ ಬಂಧಿತ ಆರೋಪಿಗಳಾಗಿದ್ದಾರೆ. ಇಂದು ಬೆಳಗ್ಗಿನ ಜಾವ ನೂತನ ಭಂಡಾರ ಮನೆ ಧ್ವಂಸಗೊಳಿಸಲಾಗಿತ್ತು. ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಆನಂದ್ ದೂರಿನ ಅನ್ವಯ ಐಪಿಸಿ 143, 147, 148, 295, 427 r/w 149 ipc and 2A kpdlp act ಅಡಿ ಎಫ್​ಐಆರ್ ದಾಖಲಾಗಿತ್ತು.

ಆರೋಪಿಗಳಿಂದ ತಪ್ಪೊಪ್ಪಿಗೆ

ಕೊಂಡಾಣ ಪಿಲಿಚಾಮುಂಡಿ ದೈವಸ್ಥಾನಕ್ಕೆ ಒಟ್ಟು 16 ಗುರಿಕಾರರು ಇದ್ದಾರೆ. ಇವರೆಲ್ಲರೂ ನೂತನ ಭಂಡಾರ ಮನೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ಬಗ್ಗೆ ಧಾರ್ಮಿಕ ದತ್ತಿ ಕಮಿಷನರ್ ಹಾಗೂ ತಹಶೀಲ್ದಾರ್​ಗೆ ದೂರು ನೀಡಲಾಗಿತ್ತು. ಹೀಗಿದ್ದರೂ ಕಾಮಗಾರಿ ನಡೆಯುತ್ತಿದ್ದ ಕಾರಣ ಧ್ವಂಸಗೈದಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Sun, 3 March 24