
ಮಂಗಳೂರು, ಸೆಪ್ಟೆಂಬರ್ 2: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ (Puttur) ಕಾಂಗ್ರೆಸ್‌ನ (Congress) ಆಂತರಿಕ ಭಿನ್ನಮತ ಮುನ್ನೆಲೆಗೆ ಬಂದಿದೆ. ಶಾಸಕ ಅಶೋಕ್ ಕುಮಾರ್ ರೈ (Ashok Kumar Rai) ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿಕೊಂಡು ಗಲಾಟೆ ನಡೆಸಿ, ಪರಸ್ಪರ ಕೈಕೈ ಮಿಲಾಯಿಸಿಕೊಂಡು ಶಾಂತಿಭಂಗ ಉಂಟುಮಾಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಗಮನಾರ್ಹವಾಗಿ, ಈ ಗಲಾಟೆ ಶಾಸಕ ಅಶೋಕ್ ಕುಮಾರ್ ರೈ ಅವರ ಎದುರಲ್ಲೇ ನಡೆದಿತ್ತು ಎನ್ನಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಡಿಯೋ ಕ್ಲಿಪ್‌ವೊಂದಕ್ಕೆ ಸಂಬಂಧಿಸಿದಂತೆ ಈ ಗಲಾಟೆ ನಡೆದಿದೆ ಎನ್ನಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ಮುಂದಾಗಿದ್ದ ವೇಳೆ, ಶಾಸಕ ಅಶೋಕ್ ರೈ ಅವರ ಬೆಂಬಲಿಗರು ಅವರನ್ನು ಸುತ್ತುವರಿದು ಗಲಾಟೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ವೇಳೆ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದ್ದು, ಪರಸ್ಪರ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಘಟನೆಯ ಮಾಹಿತಿ ತಿಳಿದು ಶಾಸಕ ಅಶೋಕ್ ಕುಮಾರ್ ರೈ ಸ್ಥಳಕ್ಕೆ ಆಗಮಿಸಿ ಬೆಂಬಲಿಗರು ಹಾಗೂ ಕಾರ್ಯಕರ್ತರನ್ನು ಸಮಾಧಾನಪಡಿಸಿ ಅಲ್ಲಿಂದ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ಪುತ್ತೂರು ಇನ್ಸ್‌ಪೆಕ್ಟರ್ ಜಾನ್ಸನ್ ಡಿಸೋಜಾ ಅವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಮುಂಡೂರು ಗ್ರಾಮದ ಪ್ರವೀಣ್ ಆಚಾರ್ಯ, ಕೂರ್ನಡ್ಕದ ರವೂಫ್, ಬೊಳ್ವಾರಿನ ಹಕೀಂ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಪೊಲೀಸರು ಬಿಎನ್‌ಎಸ್ 194(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ. ಪ್ರಕರಣದ ಹಿನ್ನೆಲೆ, ಗಲಾಟೆಗೆ ಕಾರಣ ಹಾಗೂ ಭಾಗಿಯಾಗಿದ್ದವರ ಪಾತ್ರದ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ