ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯಿಂದಾಗಿ ಜಿಲ್ಲೆಯಲ್ಲಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಲ್ಲಿನ ಎಲ್ಲ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಮೈಸೂರಿನಲ್ಲೂ ಜಿಟಿಜಿಟಿ ಮಳೆ ಮುಂದುವರಿದಿದ್ದು, ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲಾಗಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ದಕ್ಷಿಣ ಕನ್ನಡ, ಮೇ 26: ಮಲೆನಾಡು ಮತ್ತು ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗುತ್ತಿದೆ (Rain). ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಅಂಗನವಾಡಿ, ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಮೇ.27 ಮತ್ತು 28 ರಂದು ಎರಡು ದಿನ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಜಿಟಿಜಿಟಿ ಮಳೆ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ನಾಳೆಯೂ (ಮೇ.27) ರಜೆ ನೀಡಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯಿಂದ ಅವಾಂತರ
ಕರಾವಳಿ, ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಳೆ ಧೋ ಎಂದು ಸುರಿಯುತ್ತಿದೆ. ಮಂಗಳೂರಿನ ಪಂಪ್‌ವೆಲ್ ಫ್ಲೈ ಓವರ್ ಕೆಳಭಾಗ ಸಂಪೂರ್ಣ ಜಲಾವೃತವಾಗಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.
ಮಂಗಳೂರಿನ ಕೊಡಿಯಾಲ್ ಬೈಲ್ ಭಗವತಿ ನಗರ ದ್ವೀಪದಂತೆ ಬದಲಾಗಿದೆ. ಭಾರಿ ಮಳೆಯಿಂದ ರಾಜಕಾಲುವೆ ನೀರು ಬಡಾವಣೆಯೊಳಗೆ ನುಗ್ಗಿದೆ. ಮನೆಗಳ ಒಳಗೆ ನೀರು ನುಗಿದ್ದು, ನಿವಾಸಿಗಳು ಪರದಾಡುತ್ತಿದ್ದಾರೆ. ಮಂಗಳೂರಿನ ಮರವೂರು ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಜನ ನಿದ್ದೆ ಇಲ್ಲದೆ ರಾತ್ರಿ ಕಳೆದಿದ್ದು, ಮನೆಯಲ್ಲಿದ್ದ ಹಲವು ವಸ್ತುಗಳಿಗೆ ಹಾನಿಯಾಗಿದೆ. ಧರ್ಮಸ್ಥಳ ಭಾಗದಿಂದ ಹರಿದು ಬರುವ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ನದಿ ತೀರದಲ್ಲಿರುವ ಜನರಿಗೆ ಎಚ್ಚರಿಕೆಯಿಂದ ಇರಲು ಜಿಲ್ಲಾಡಳಿತ ಸೂಚನೆ ನೀಡಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಂದ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದ ಎಸ್ಟೇಟ್‌ನಲ್ಲಿ ಮಧ್ಯರಾತ್ರಿ ಕಾರ್ಮಿಕರ ಮನೆ ಮೇಲೆ ಭಾರಿ ಗಾತ್ರದ ಮರಬಿದ್ದಿದೆ. ಮಹಿಳೆ ಸುನಂದಾ ಅನ್ನೋರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 20 ಕಾರ್ಮಿಕರು ಪವಾಡ ಸದೃಶ್ಯ ಪಾರಾಗಿದ್ದಾರೆ.
ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಮಳೆ ಸುರಿಯುತ್ತಿರುವ ಕಾರಣ, ಕಡಬ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಮುಳುಗಡೆಯಾಗಿದೆ. ಭಕ್ತಾಧಿಗಳಿಗೆ ಸ್ನಾನಘಟ್ಟಕ್ಕೆ ಇಳಿಯದಂತೆ ನಿರ್ಬಂಧಿಸಲಾಗಿದೆ. ಭಾರಿ ಮಳೆ ಪರಿಣಾಮ ವಾಹನಗಳು ಸ್ಕಿಡ್ ಆಗಿ ಪಲ್ಟಿಯಾಗುತ್ತಿವೆ. ರವಿವಾರ ಚಿಕ್ಕಮಗಳೂರಿನಲ್ಲಿ ನಾಲ್ಕೈದು ಅವಘಡಗಳು ಸಂಭವಿಸಿದ್ವು. ಸೋಮವಾರ ಕಳಸದ ಕುದುರೆಮುಖ ಸರ್ಕಲ್ ಬಳಿ ಕಾರೊಂಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು, ಶೃಂಗೇರಿ, ಕಳಸ, ಕೊಪ್ಪ, ಮೂಡಿಗೆರೆ, NR ಪುರ ತಾಲೂಕಿನಲ್ಲಿ ಭಾರಿ ಮಳೆಯಾಗ್ತಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳ ಒಳ ಹರಿವು ಹೆಚ್ಚಳವಾಗಿದೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಹಲವು ಅವಾಂತರ ಸೃಷ್ಟಿಸಿದ ಮಳೆ: ಕಾರು, ಲಾರಿ ಪಲ್ಟಿ, 3 ಸಾವು
ಹಾಸನ ಜಿಲ್ಲೆಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ!
ಹಾಸನ ಜಿಲ್ಲೆಯ ವಿವಿಧಡೆ ಭಾರಿ ಮಳೆಯಾಗುತ್ತಿದೆ. ಸಕಲೇಶಪುರದ ಆನೆಮಹಲ್ ಬಳಿ ಹೆದ್ದಾರಿ ಸಮೀಪ ಮಣ್ಣು ಕುಸಿಯುತ್ತಿದೆ. ವಾಹನ ಸವಾರರು ಆತಂಕದಲ್ಲೇ ಸಂಚರಿಸುತ್ತಿದ್ದಾರೆ. ಇದೇ ಭಾಗದಲ್ಲಿರುವ 6 ಕುಟುಂಬಗಳು ಭಯದಲ್ಲೇ ಬದುಕುತ್ತಿವೆ. ಮತ್ತೊಂದೆಡೆ ಸಕಲೇಶಪುರದಲ್ಲಿ ಮಲೆನಾಡ್ ಕೆಫೆ ಹೋಟೆಲ್‌ನ ಗೋಡೆ ಕುಸಿದಿದ್ದು, ನಾಲ್ವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಇನ್ನು, ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ 2 ಕಡೆ ಭೂಕುಸಿತ ಸಂಭವಿಸಿದೆ. ರಸ್ತೆ ಕಾಮಗಾರಿಗೆ ಗುಡ್ಡ ಅಗೆಯಲಾಗಿದ್ದು, ಮಳೆ ಕಾರಣ 100ಅಡಿಗೂ ಎತ್ತರವಿರುವ ಗುಡ್ಡ ಕುಸಿಯುವ ಆತಂಕ ಎದುರಾಗಿದೆ.
ಉಡುಪಿ ಜಿಲ್ಲೆಯಲ್ಲೂ ಮಳೆಯಾರ್ಭಟ ತೀವ್ರಗೊಳ್ಳುತ್ತಿದೆ. ಪಡುಕೆರೆ ಸಮುದ್ರ ತೀರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಬೃಹತ್ ಗಾತ್ರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ. ತೀರಪ್ರದೇಶದ ಜನ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:18 pm, Mon, 26 May 25







