ದರ್ಶನ ಮತ್ತು ಇತರರನ್ನು ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸಿ; ಸಿದ್ದರಾಮಯ್ಯ ಸೂಚನೆ
ಕೊಲೆ ಪ್ರಕರಣದಲ್ಲಿ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರಿಗೆ ರಾಜಾಥಿತ್ಯ ನೀಡಿರುವ ಫೋಟೋ ವೈರಲ್ ಆಗಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಆಗಿದೆ. ಹೀಗಾಗಿ ಸರ್ಕಾರ ಏಳು ಜನ ಜೈಲು ಅಧಿಕಾರಿಗಳನ್ನು ಅಮಾನತು ಮಾಡಿದೆ. ಇದೀಗ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ ನೀಡಿದ್ದಾರೆ.
ಬೆಂಗಳೂರು, ಆಗಸ್ಟ್ 26: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನಗೆ (Darshan) ರಾಜಾತಿಥ್ಯ ನೀಡಲಾಗುತ್ತಿರುವ ಫೋಟೋ ಬಹಿರಂಗವಾಗಿರುವುದು ರಾಜ್ಯ ಸರ್ಕಾರ ಮುಜುಗರ ಪಡುವಂತಾಗಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಡಿಜಿ&ಐಜಿಪಿ ಅಲೋಕ್ ಮೋಹನ್ ಅವರಿಂದ ಮಾಹಿತಿ ಪಡೆದು ಖಡಕ್ ಸೂಚನೆ ನೀಡಿದರು. ಕೂಡಲೆ ದರ್ಶನ ಮತ್ತು ಇತರರನ್ನು ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ, “ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ.”
ಇದನ್ನೂ ಓದಿ: ದರ್ಶನ್ ಫೋಟೋ ವೈರಲ್ ಬೆನ್ನಲ್ಲೇ ಪರಪ್ಪನ ಅಗ್ರಹಾರದ ಏಳು ಅಧಿಕಾರಿಗಳು ಸಸ್ಪೆಂಡ್
“ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.
ಸಿದ್ದರಾಮಯ್ಯ ಟ್ವೀಟ್
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ.
ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ…
— Siddaramaiah (@siddaramaiah) August 26, 2024
ನಿಯಮ ಉಲ್ಲಂಘಿಸಿದ ಜೈಲಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು, ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಿ. ಪ್ರಕರಣದ ಸಂಪೂರ್ಣ ವರದಿ ನೀಡುವಂತೆ ಎಂದು ಖಡಕ್ ಸೂಚನೆ ನೀಡಿದರು. ಈ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತು ಆಗಿರುವ ಜೈಲು ಅಧಿಕಾರಿಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಅಲೋಕ್ ಮೋಹನ್ ಮಾಹಿತಿ ನೀಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:03 pm, Mon, 26 August 24