ಹರಿಹರ ಕಾಲೇಜಿಗೆ ಎಸ್ಪಿ ದೌಡು, ಉದ್ವಿಗ್ನ ಪರಿಸ್ಥಿತಿ, ಕಾಲೇಜಿನಲ್ಲಿ ಸಿಲುಕಿದ ಮಕ್ಕಳನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಲು ಪೊಲೀಸರ ಕ್ರಮ
ಹರಿಹರ ಪಟ್ಟಣದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಧಾವಿಸಿದ್ದಾರೆ.
ದಾವಣಗೆರೆ: ಕರ್ನಾಟಕ ಹಲವು ಕಾಲೇಜುಗಳಲ್ಲಿ ಹಿಜಾಬ್-ಕೇಸರಿ ಶಾಲು (Hijab VS Saffron Shawl) ವಿವಾದ ತಾರಕಕ್ಕೆ ಏರಿದೆ. ಜಿಲ್ಲೆಯ ಹರಿಹರ ಪಟ್ಟಣದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಧಾವಿಸಿದ್ದಾರೆ. ಹರಿಹರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸ್ತುತ ಸಿಲುಕಿಕೊಂಡಿರುವ ಸುಮಾರು 200 ವಿದ್ಯಾರ್ಥಿಗಳನ್ನು ಮನೆಗೆ ತಲುಪಿಸಲು ವಾಹನ ವ್ಯವಸ್ಥೆ ಮಾಡಲಾಗುವುದು. ಕಾಲೇಜಿನಲ್ಲಿ ನಡೆದ ವಿದ್ಯಮಾನಗಳ ಬಗ್ಗೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸಿ ಮುಂದಿನ ಕ್ರಮ ಜರುಗಿಸಲಾಗುವುದು. ವಿಡಿಯೊಗಳನ್ನು ಪರಿಶೀಲಿಸಿ ಆರೋಪಿಗಳನ್ನು ಬಂಧಿಸುತ್ತೇವೆ. ಎರಡೂ ಕಡೆಗಳಿಂದ ಬಂದಿರುವ ದೂರುಗಳನ್ನು ದಾಖಲಿಸಿಕೊಳ್ಳಲಾಗುವುದು ಎಂದು ಎಸ್ಪಿ ರಿಷ್ಯಂತ್ ಹೇಳಿದರು.
ವಿದ್ಯಾರ್ಥಿಗಳ ಜೊತೆ ಪೊಲೀಸರು ಮಾತಾಡುವಾಗ ಯಾರೋ ಕಿಡಿಗೇಡಿಗಳು ಕಲ್ಲು ತೂರಿದರು. ಪರಿಸ್ಥಿತಿ ನಿಯಂತ್ರಿಸಲೆಂದು ಸ್ಥಳೀಯ ಶಾಸಕ ಎಸ್.ರಾಮಪ್ಪ ಸ್ಥಳಕ್ಕೆ ಭೇಟಿ ನೀಡಿದರೂ ಪ್ರಯೋಜನವಾಗಲಿಲ್ಲ.
ಶಾಂತಿ ಕಾಪಾಡಲು ನಾರಾಯಣಗೌಡ ಮನವಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ನಾರಾಯಣಗೌಡ ಜಿಲ್ಲಾ ವ್ಯಾಪ್ತಿಯಲ್ಲಿ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ. ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಆಗಿರುವ ಬೆಳವಣಿಗೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಕಾನೂನಿನಂತೆ ಎಲ್ಲರೂ ನಡೆದುಕೊಳ್ಳಬೇಕು. ಕಾನೂನು ಸುವ್ಯವಸ್ಥೆ ಧಕ್ಕೆಯಾಗದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ಶಾಲಾ-ಕಾಲೇಜಿಗಳಿಗೆ ರಜೆ ಕರ್ನಾಟಕದ ಎಲ್ಲ ಶಾಲಾ-ಕಾಲೇಜುಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂರು ದಿನಗಳ ಕಾಲ ರಜೆ ಘೋಷಿಸಿದ್ದಾರೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಜೆಯ ಆದೇಶ ಹೊರಡಿಸಿ, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆ ಶಾಂತಿ ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ: Karnataka Hijab Row: ಇತ್ಯರ್ಥವಾಗದ ವಿವಾದ; ಹಿಜಾಬ್ ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದ ಹೈಕೋರ್ಟ್
ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಹಿಜಾಬ್ ವಿವಾದವನ್ನು ಸೃಷ್ಟಿಸಿ ಬಿಜೆಪಿ ತಲೆ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದೆ: ಕೆ ಎಸ್ ಈಶ್ವರಪ್ಪ
Published On - 4:54 pm, Tue, 8 February 22