ದಾವಣಗೆರೆ: ಬಿಜೆಪಿಯಲ್ಲಿ (BJP) ಟಿಕೆಟ್ ಆಕಾಂಕ್ಷಿಗಳ ಪೈಪೋಟಿ ಜೋರಾಗಿದ್ದು, ಲಂಚ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಪುತ್ರ ಮಾಡಾಳ್ ಮಲ್ಲಿಕಾರ್ಜುನ ಬಿಜೆಪಿ ಕಾರ್ಯಕರ್ತರು ಹಾಗೂ ಆಪ್ತರ ಜತೆ ಸೋಮವಾರ ಸಂಜೆ ಸಭೆ ನಡೆಸಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ವಿರೂಪಾಕ್ಷಪ್ಪ ಸದ್ಯ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಈ ಮಧ್ಯೆ ಅವರ ಹಿರಿಯ ಮಗ ಮಲ್ಲಿಕಾರ್ಜುನಗೆ ಟಿಕೆಟ್ ನೀಡುವಂತೆ ಒತ್ತಡ ಹೇರುವುದಕ್ಕಾಗಿ ಸಭೆ ನಡೆಸಲಾಗಿದೆ ಎನ್ನಲಾಗಿದೆ. ಚನ್ನಗಿರಿ ತಾಲೂಕು ಬಿಜೆಪಿ ಕಚೇರಿಯಲ್ಲೇ ಮಲ್ಲಿಕಾರ್ಜುನ ಆಪ್ತರ ಸಭೆ ನಡೆಸಿದ್ದಾರೆ.
ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹೇರಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ತಂದೆಯ ಅನುಪಸ್ಥಿತಿಯಲ್ಲಿ ಪಕ್ಷದಲ್ಲಿ ಹಿಡಿತ ಸಾಧಿಸಲು ಮಲ್ಲಿಕಾರ್ಜುನ ಯತ್ನಿಸುತ್ತಿದ್ದಾರೆ ಎಂಬ ಮಾತು ಪಕ್ಷದ ಆಂತರಿಕ ವಲಯದಲ್ಲಿ ಕೇಳಿಬಂದಿದೆ. ಇನ್ನೆರಡು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಚನ್ನಗಿರಿ ಕ್ಷೇತ್ರದ ಪ್ರಮುಖ ಮುಖಂಡರನ್ನು ಕರೆದು ಸಭೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: Madal Virupakshappa: ಮಾಡಾಳ್ ವಿರೂಪಾಕ್ಷಪ್ಪಗೆ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ
ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಏಪ್ರಿಲ್ 11ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶಿಸಿತ್ತು. ಅದರ ಬೆನ್ನಲ್ಲೇ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಜೈಲುಪಾಲಾಗಿರುವ ಮಾಡಾಳ್ ವಿರೂಪಾಕ್ಷಪ್ಪಗೆ ಪಕ್ಷ ಟಿಕೆಟ್ ನೀಡಲಾರದು ಎಂಬುದು ಬಹುತೇಕ ಖಚಿತವಾಗಿದೆ. ಹೀಗಾಗಿ ಮಲ್ಲಿಕಾರ್ಜುನ ಅವರು ಟಿಕೆಟ್ ಪಡೆಯಲು ಒತ್ತಡ ಹೇರುವ ತಂತ್ರ ಅನುಸರಿಸುತ್ತಿದ್ದಾರೆ ಎನ್ನಲಾಗಿದೆ.
ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮಂಗಳವಾರ ಮತ್ತು ಬುಧವಾರ ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಭೆ ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸಭೆ ನಡೆಸಲಿದೆ. ರಾಜ್ಯ ಚುನಾವಣಾ ಸಮಿತಿ ಅಭ್ಯರ್ಥಿಗಳ ಪಟ್ಟಿ ಶಿಫಾರಸು ಮಾಡಲಿದೆ. ಸಭೆಯಲ್ಲಿ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಬಿಜೆಪಿ ರಾಜ್ಯ ಉಸ್ತುವಾರಿಯಾಗಿರುವ ಅರುಣ್ ಸಿಂಗ್, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಡಿವಿ ಸದಾನಂದ ಗೌಡ, ಜಗದೀಶ್ ಶೆಟ್ಟರ್ ಸೇರಿ ಕೋರ್ ಕಮಿಟಿ ಸದಸ್ಯರು ಭಾಗಿಯಾಗಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ