ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ಜ.22ರಂದು ಸರ್ಕಾರಿ ರಜೆ ಕೇಳಿದವರಿಗೆ ಡಿಕೆಶಿ ಹೇಳಿದ್ದಿಷ್ಟು
ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯುವ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಂದು ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಬೇಕೆಂದು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ಇನ್ನು ಇದಕ್ಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ರಜೆ ಕೇಳಿದವರಿಗೆ ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರು, (ಜನವರಿ 21): ಅಯೋಧ್ಯೆಯಲ್ಲಿ ನಾಳೆ (ಜನವರಿ 22) ರಾಮ ಮಂದಿರದಲ್ಲಿ (ram mandir) ರಾಮಲಲ್ಲಾ ವಿಗ್ರಹ ಪ್ರತಿಷ್ಟಾಪನೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ರಾಮನ ಜಪ ಶುರುವಾಗಿದೆ. ಇನ್ನು ಕೇಂದ್ರ ಸರ್ಕಾರ ಸೇರಿದಂತೆ ಇನ್ನಿತರ ರಾಜ್ಯಗಳು ಅಂದು ಅದರೆ ಜನವರಿ 22ರಂದು ಸರ್ಕಾರಿ ರಜೆ ಘೋಷಣೆ ಮಾಡಿವೆ. ಇನ್ನು ಕರ್ನಾಟಕದಲ್ಲಿ ರಜೆ ಘೋಷಣೆ ಮಾಡುವಂತೆ ಪ್ರತಿಪಕ್ಷಗಳು ಸರ್ಕಾರಕ್ಕೆ ಮನವಿ ಮಾಡಿದ್ದು, ಇದೀಗ ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಭಕ್ತಿ, ಗೌರವ ಧರ್ಮ ಪ್ರಚಾರಕ್ಕೆ ಮಾಡುವುದಿಲ್ಲ ಎಂದು ಹೇಳಿದರು. ಈ ಮೂಲಕ ಸರ್ಕಾರಿ ರಜೆ ಘೋಷಣೆಗೆ ಆಗ್ರಹಿಸಿದ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಾವು ಭಕ್ತಿ, ಗೌರವ, ಧರ್ಮ ಪ್ರಚಾರಕ್ಕೆ ಮಾಡುವುದಿಲ್ಲ. ದೇಗುಲಗಳಲ್ಲಿ ಏನು ಆಚರಣೆ ಮಾಡಬೇಕು ಮಾಡುತ್ತಾರೆ. ಏನು ಪೂಜೆ, ಪುನಸ್ಕಾರ ಮಾಡಬೇಕು ಅದನ್ನು ಮಾಡುತ್ತೇವೆ. ನಮಗೆ ಯಾರೂ ಹೇಳುವ ಅವಶ್ಯಕತೆ ಇಲ್ಲ. ಪ್ರಾರ್ಥನೆಗಳಿಂದ ಫಲ ದೊರೆಯುತ್ತೆಂಬ ನಂಬಿಕೆ ನಮಗೆ. ಹಾಗಾಗಿ ಪ್ರಾರ್ಥನೆ ಮಾಡ್ಕೊಳ್ಳಿ ಎಂದು ಹೇಳುತ್ತಿದ್ದೇವೆ. ಸಿದ್ದರಾಮಯ್ಯ ಹೆಸರಲ್ಲಿ ರಾಮ, ನನ್ನ ಹೆಸರಲ್ಲಿ ಶಿವ ಇದ್ದಾನೆ. ನಮಗೆ ಯಾರೂ ಹೇಳಿಕೊಡಬೇಕಿಲ್ಲ, ಒತ್ತಡವೂ ಹಾಕಬೇಕಿಲ್ಲ. ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಅಲ್ಲ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು. ಈ ಮೂಲಕ ಪರೋಕ್ಷವಾಗಿ ಸರ್ಕಾರಿ ರಜೆ ನೀಡಲು ನಿರಾಕರಿಸಿದ್ದಾರೆ.
ಇದನ್ನೂ ಓದಿ: Ayodhya Ram Mandir: ರಾಮಮಂದಿರ ಉದ್ಘಾಟನೆ ದಿನ ಎಲ್ಲೆಡೆ ಕಟ್ಟೆಚ್ಚರ, ಖಾಕಿ ಪಡೆ ಫುಲ್ ಅಲರ್ಟ್
ರಜೆ ನೀಡುವ ಬಗ್ಗೆ ಸಿಎಂ ಹೇಳಿದ್ದಿಷ್ಟು
ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯುವ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಅಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ರಜೆ ನೀಡಬೇಕೆಂಬ ಬಿಜೆಪಿಯ ಮನವಿ ಪತ್ರವನ್ನು ಇನ್ನೂ ನೋಡಿಲ್ಲ. ನೋಡುತ್ತೇನೆ ಎಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಮ ಪ್ರಾಣ ಪ್ರತಿಷ್ಠಾಪನೆ ದಿನದಿಂದು ರಾಜ್ಯದಲ್ಲಿ ರಜೆ ನೀಡಬೇಕೆಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಹಾಗೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕೂಡಾ ಇದೇ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಅಲ್ಲದೇ ಹಿಂದೂ ಸಂಘಟನೆಗಳು ಸಹ ರಜೆಗೆ ಒತ್ತಾಯಿಸಿವೆ. ರಾಮಲಲ್ಲಾ ಪ್ರತಿಷ್ಠಾಪನೆಗೆ ಒಂದೇ ಬಾಕಿ ಉಳಿದಿದೆ. ಆದ್ರೆ, ರಾಜ್ಯ ಸರ್ಕಾರ ಇನ್ನೂ ತೀರ್ಮಾನ ಪ್ರಕಟಿಸಿಲ್ಲ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.