AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ಆಫ್​ಲೈನ್ ತರಗತಿ ದಿನಾಂಕ ಪ್ರಕಟ: ಎಲ್ಲಾ ವಿವಿ ಕುಲಪತಿಗಳ ಜೊತೆ ಡಿಸಿಎಂ ಸಮಾಲೋಚನೆ

ಬೆಂಗಳೂರಿನಲ್ಲಿ ಶುಕ್ರವಾರ ಸರ್ಕಾರಿ ಮತ್ತು ಖಾಸಗಿ ವಲಯದ ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳು, ಉನ್ನತ ಶಿಕ್ಷಣ ಸೇರಿ ಸಂಬಂಧಿತ ಎಲ್ಲಾ ಇಲಾಖೆಗಳ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ ಉಪ ಮುಖ್ಯಮಂತ್ರಿಗಳು ಆಫ್​ಲೈನ್ ತರಗತಿ ಬಗ್ಗೆ ಮಾಹಿತಿ ನೀಡಿದರು.

ಶೀಘ್ರದಲ್ಲೇ ಆಫ್​ಲೈನ್ ತರಗತಿ ದಿನಾಂಕ ಪ್ರಕಟ: ಎಲ್ಲಾ ವಿವಿ ಕುಲಪತಿಗಳ ಜೊತೆ ಡಿಸಿಎಂ ಸಮಾಲೋಚನೆ
ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ
sandhya thejappa
| Updated By: ರಾಜೇಶ್ ದುಗ್ಗುಮನೆ|

Updated on: Jan 08, 2021 | 7:02 PM

Share

ಬೆಂಗಳೂರು: ಈಗಾಗಲೇ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಮತ್ತು ಇಂಜಿನಿಯರಿಂಗ್ ತರಗತಿಗಳ ಅಂತಿಮ ವರ್ಷದ ಆಫ್​ಲೈನ್ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿರುವ ಬೆನ್ನಲ್ಲೇ ಇದೇ ತರಗತಿಗಳ ಪ್ರಥಮ- ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಆಫ್​ಲೈನ್​  ತರಗತಿಗಳನ್ನು ಸಂಕ್ರಾಂತಿ ಹಬ್ಬದ ನಂತರ ಆರಂಭಿಸಲಾಗುವುದು. ಈ ಸಂಬಂಧ ವರದಿ ನೀಡುವಂತೆ ಕುಲಪತಿಗಳಿಗೆ ಸೂಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ಬೆಂಗಳೂರಿನಲ್ಲಿ ಶುಕ್ರವಾರ ಸರ್ಕಾರಿ ಮತ್ತು ಖಾಸಗಿ ವಲಯದ ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳು, ಉನ್ನತ ಶಿಕ್ಷಣ ಸೇರಿ ಸಂಬಂಧಿತ ಎಲ್ಲಾ ಇಲಾಖೆಗಳ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ ಉಪ ಮುಖ್ಯಮಂತ್ರಿಗಳು ಆಫ್​ಲೈನ್ ತರಗತಿ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಕುಲಪತಿಗಳು ನೇರ ತರಗತಿಗಳನ್ನು ಆರಂಭಿಸುವಂತೆ ಸರ್ಕಾರಕ್ಕೆ ಸಲಹೆ ನೀಡಿದರು. ಹೀಗಾಗಿ ಇದಕ್ಕೆ ಸಂಬಂಧಿಸಿದ ವರದಿಯನ್ನು ಕೂಡಲೇ ಕಳಿಸುವಂತೆ ಕೋರಲಾಗಿದೆ. ನಂತರ ಮೊದಲ ಮತ್ತು ದ್ವಿತೀಯ ವರ್ಷದ ನೇರ ತರಗತಿಗಳನ್ನು ಸಂಕ್ರಾಂತಿ ಹಬ್ಬದ ನಂತರ ಯಾವ ದಿನದಿಂದ ಆರಂಭಿಸಬೇಕು ಎಂಬ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಈಗಾಗಲೇ ಅಂತಿಮ ವರ್ಷದ ವಿದ್ಯಾರ್ಥಿಗಳ ನೇರ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಆ ಯಶಸ್ಸಿನ ಹಿನ್ನೆಲೆಯಲ್ಲಿ ಉಳಿದ ತರಗತಿಗಳನ್ನು ಶುರು ಮಾಡಲಾಗುವುದು. ಯುಜಿಸಿ ಮತ್ತು ಕೋವಿಡ್ ಮಾರ್ಗಸೂಚಿ ಪ್ರಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಮಾಹಿತಿ ನೀಡಿದರು.

ಪರೀಕ್ಷೆ ಮತ್ತು ಮುಂದಿನ ಶೈಕ್ಷಣಿಕ ವರ್ಷ ಮುಖ್ಯವಾಗಿ ಈ ಸಭೆಯಲ್ಲಿ 2021-22ರ ಶೈಕ್ಷಣಿಕ ವರ್ಷವನ್ನು ಯಾವಾಗಿನಿಂದ ಆರಂಭಿಸಬೇಕು ಎಂಬ ಬಗ್ಗೆ ಮಹತ್ವ ಚರ್ಚೆ ನಡೆಯಿತು. ಮೇ ತಿಂಗಳ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಈಗಾಗಲೇ ಘೋಷಣೆ ಮಾಡಲಾಗಿದೆ. ಇದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಉನ್ನತ ಶಿಕ್ಷಣದ ಶೈಕ್ಷಣಿಕ ವೇಳಾಪಟ್ಟಿಯನ್ನು ರೂಪಿಸಲಾಗುತ್ತದೆ ಎಂದು ಡಿಸಿಎಂ ತಿಳಿಸಿದರು.

ಜೊತೆಗೆ ಆನ್ಲೈನ್ ಪರೀಕ್ಷೆಗಳಿಗಿಂತ ಲಿಖಿತ ಪರೀಕ್ಷೆಯೇ ಉತ್ತಮ ಎಂದು ವಿಟಿಸಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಸೇರಿದಂತೆ ಎಲ್ಲಾ ಕುಲಪತಿಗಳು ಹಾಗೂ ಕುಲ ಸಚಿವರು ಸಲಹೆ ಮಾಡಿದರು. ಇದನ್ನು ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ. ಯುಜಿಸಿ ನಿಯಮದಂತೆ ಮಾರ್ಚ್​ನಲ್ಲಿ ಪರೀಕ್ಷೆ ಮುಗಿಯಬೇಕಾಗುತ್ತದೆ. ಆದರೆ ಇನ್ನು ಹಲವಾರು ವಿವಿಗಳ ವ್ಯಾಪ್ತಿಯಲ್ಲಿ ಪಾಠಗಳು ಮುಗಿಯದ ಕಾರಣ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಸದ್ಯದಲ್ಲೇ ಈ ಬಗ್ಗೆ ಅಂತಿಮ ನಿರ್ಧಾರ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

ಬಸ್ ಪಾಸ್ ಮತ್ತು ಹಾಸ್ಟೆಲ್ ಸೌಲಭ್ಯ ವಿದ್ಯಾರ್ಥಿಗಳ ಬಸ್ ಪಾಸ್ ಬಗ್ಗೆ ಇರುವ ಗೊಂದಲದ ಬಗ್ಗೆ ಶೀಘ್ರದಲ್ಲಿಯೇ ಸಾರಿಗೆ ಸಚಿವರಾದ ಡಿಸಿಎಂ ಲಕ್ಷ್ಮಣ ಸವದಿ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಹಳೆಯ ಪಾಸ್ ಇಟ್ಟುಕೊಂಡೇ ಓಡಾಡಬಹುದಾ? ಅಥವಾ ಇಲ್ಲವಾ? ಎಂಬ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ ಡಿಸಿಎಂ, ಉಳಿದಂತೆ ತರಗತಿಗಳು ಆರಂಭವಾದ ಮೇಲೆ ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಲಾಗುವುದು. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದರು.

ವಿಡಿಯೋ ಸಂವಾದದಲ್ಲಿ ಡಿಸಿಎಂ ರಾಮನಗರದಿಂದಲೇ ಭಾಗಿಯಾಗಿದ್ದು, ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ ಸೇರಿದಂತೆ ರಾಜ್ಯದ ಎಲ್ಲ ವಿವಿಗಳ ಕುಲಪತಿ ಮತ್ತು ಕುಲಸಚಿವರು ಪಾಲ್ಗೊಂಡಿದ್ದರು.

ಮೀನುಗಾರರ ರಕ್ಷಣೆಗೆ ಬೋಟ್ ಆ್ಯಂಬುಲೆನ್ಸ್ ತರಲು ಸರ್ಕಾರ ಚಿಂತನೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ