Pralhad Joshi: ಹುಬ್ಬಳ್ಳಿ ವಿಮಾನ ನಿಲ್ದಾಣ ಉನ್ನತೀಕರಣ ವಿಷಯವಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮಹತ್ವದ ಸಭೆ

|

Updated on: Jul 03, 2023 | 9:32 PM

Hubballi international airport: ಕೇಂದ್ರ ಸಚಿವ ಜೋಶಿಯವರೊಂದಿಗೆ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ್ ಕುಮಾರ್ ಠಾಕ್ರೆ ಮತ್ತು ಇತರ ಅಧಿಕಾರಿಗಳು, ವಿಮಾನ ನಿಲ್ದಾಣ ಸಲಹಾ ಸಮಿತಿ ಸದಸ್ಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Pralhad Joshi: ಹುಬ್ಬಳ್ಳಿ ವಿಮಾನ ನಿಲ್ದಾಣ ಉನ್ನತೀಕರಣ ವಿಷಯವಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮಹತ್ವದ ಸಭೆ
ಹುಬ್ಬಳ್ಳಿ ವಿಮಾನ ನಿಲ್ದಾಣ ಉನ್ನತೀಕರಣ ವಿಷಯವಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮಹತ್ವದ ಸಭೆ
Follow us on

ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಸೇರಿದಂತೆ ಇತರ ಸೌಲಭ್ಯಗಳ ಬೃಹತ್ ಸುಧಾರಣೆ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಪ್ರಸ್ತಾವನೆಗೆ ಕೇಂದ್ರ ಸರಕಾರ ಸ್ಪಂದಿಸಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ವಿಸ್ತರಣೆಗೆ 273 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಬೆನ್ನಲ್ಲೇ, ಹುಬ್ಬಳ್ಳಿಯ ವಿಮಾನ ನಿಲ್ದಾಣ ಮತ್ತಷ್ಟು ಮೇಲ್ದರ್ಜೆಗೆ ಏರಲಿದೆ (Hubballi international airport) ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ತಿಳಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ರಾಜ್ಯದ 2ನೇ ಅತೀ ದೊಡ್ಡ ನಗರವಾಗಿದ್ದು ಹಾಗೂ ಧಾರವಾಡದಲ್ಲಿ ಭಾರತೀಯ ತಾಂತ್ರಿಕ ಸಂಸ್ಥೆ (IIIT) ಹಾಗೂ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಂತಹ ಬೃಹತ್ ಸಂಸ್ಥೆಗಳ ಕಾರ್ಯಾರಂಭ ಹಾಗೂ ಹೆಚ್ಚುತ್ತಿರುವ ವಿಮಾನ ಪ್ರಯಾಣಿಕರ ಸಂಖ್ಯೆ ಹಿನ್ನೆಲೆಯಲ್ಲಿ ಸಚಿವರು ಈಗಿರುವ ಟರ್ಮಿನಲ್ ಕಟ್ಟಡದ ವಿಸ್ತೀರ್ಣ, ರನ್‌ವೇ ವಿಸ್ತೀರ್ಣ, ಆಪಾನ್ ವಿಸ್ತೀರ್ಣ ಹಾಗೂ ಕಾರ್ಗೋ ನಿರ್ವಹಣೆ ಸುಧಾರಣೆ ಮುಂತಾದ ಕಾರ್ಯ ಕೈಗೊಳ್ಳಲು ಕೇಂದ್ರ ನಾಗರಿಕ ವಿಮಾನ ಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಕಳೆದ ತಿಂಗಳಷ್ಟೇ ಬರೆದ ಪತ್ರಕ್ಕೆ ಉತ್ತರವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದ ಎಲ್ಲಾ ಸುಧಾರಣಾ ಕಾರ್ಯದ ಪ್ರಸ್ತಾವನೆ ತೀವ್ರ ಪರಿಶೀಲನೆ ನಡೆಸಿ ಈ ಒಂದು ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ.

ನೂತನ ಯೋಜನೆಯಂತೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ 20,000 ಚ.ಮೀ. ವಿಸ್ತರಣೆಗೊಳ್ಳಲಿದ್ದು, ಏಕಕಾಲಕ್ಕೆ 1400ಕ್ಕೂ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಲಿದೆ ಎಂದೂ ತಿಳಿಸಿದ್ದಾರೆ. ಕೇಂದ್ರ ಸಚಿವ ಜೋಶಿಯವರೊಂದಿಗೆ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ್ ಕುಮಾರ್ ಠಾಕ್ರೆ ಮತ್ತು ಇತರ ಅಧಿಕಾರಿಗಳು, ವಿಮಾನ ನಿಲ್ದಾಣ ಸಲಹಾ ಸಮಿತಿ ಸದಸ್ಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ದಿನಗಳಲ್ಲಿ ಕೈಗೊಂಡ ಅಭಿವೃದ್ಧಿ ಚಟುವಟಿಕೆಗಳಿಂದಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣ ಅಗಾಧ ಬೆಳವಣಿಗೆ ಕಂಡಿದೆ. ಈ ಬಗ್ಗೆ ಹಲವಾರು ವಿಷಯಗಳನ್ನು ಚರ್ಚಿಸಲಾಯಿತು. ಒಟ್ಟಿನಲ್ಲಿ ಮುಂದಿನ ದಿನಗಳಲ್ಲಿ ವಿಮಾನ ನಿಲ್ದಾಣ ಸಾಕಷ್ಟು ನವೀಕರಣ ಕಾಣಲಿದ್ದು, ಇದು ಪ್ರಯಾಣಿಕರಿಗೆ ಅದ್ಭುತ ಅನುಭವವನ್ನು ನೀಡಲಿದೆ ಮತ್ತು ಕಾರ್ಗೋ ವಿಭಾಗದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದ ಸಾಧನೆ ಮತ್ತಷ್ಟು ವಿಸ್ತರಿಸಲಿದೆ.