ಹುಬ್ಬಳ್ಳಿ: ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಹಾಗೂ ಅವರ ಪುತ್ರ ಪ್ರಶಾಂತ್ ಮನೆಯಲ್ಲಿ ಕೋಟ್ಯಂತರ ರೂ. ನಗದು ಪತ್ತೆಯಾದ ಬೆನ್ನಲ್ಲೇ ಇದೀಗ ಹುಬ್ಬಳ್ಳಿಯ (Hubballi) ಉದ್ಯಮಿಯೊಬ್ಬರ ಮನೆಯಲ್ಲಿ 3 ಕೋಟಿ ರೂ. ನಗದು ಸಿಕ್ಕಿದೆ. ಉದ್ಯಮಿ ರಮೇಶ್ ಬೊಣಗೇರಿ ಎಂಬವರ ಮನೆಗೆ ಶನಿವಾರ ಸಿಸಿಬಿ ಡಿವೈಎಸ್ಪಿ ನಾರಾಯಣ ಬರಮನಿ ನೇತೃತ್ವದಲ್ಲಿ ಹುಬ್ಬಳ್ಳಿ-ಧಾರವಾಡ ಸಿಸಿಬಿ ಪೊಲೀಸರು (CCB Police) ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ವಿಚಾರವಾಗಿ ಇದೀಗ ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಮೇಶ್ ಬೊಣಗೇರಿ ಕೃಷಿ ಇಲಾಖೆಗೆ ರಾಸಾಯನಿಕ ಸರಬರಾಜು ಮಾಡುತ್ತಿದ್ದ ಉದ್ಯಮಿಯಾಗಿದ್ದಾರೆ.
ಪತ್ತೆಯಾಗಿರುವ ಹಣಕ್ಕೆ ಉದ್ಯಮಿ ರಮೇಶ್ ಬೊಣಗೇರಿ ಸೂಕ್ತ ದಾಖಲಾತಿ ನೀಡಿಲ್ಲ. ನಗದು ವಶಪಡಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ನಾವು ಐಟಿ ಇಲಾಖೆಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಐಟಿ ಇಲಾಖೆಯ ಅಧಿಕಾರಿಗಳು ಹಣದ ಮೂಲ ಹುಡುಕುತ್ತಿದ್ದಾರೆ. ಶಾಸಕ ಮಾಡಾಳ್ ಪುತ್ರನ ಬಂಧನಕ್ಕೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಖಚಿತ ಮಾಹತಿ ಮೇರೆಗೆ ಸಿಸಿಬಿ ಅಧಿಕಾರಿಗಳು ಉದ್ಯಮಿ ಮನೆ ಮೇಲೆ ದಾಳಿ ಮಾಡಿದ್ದರು. ಹಣ ವಶಪಡಿಸಿಕೊಂಡ ಸಿಸಿಬಿ ತಂಡಕ್ಕೆ 25 ಸಾವಿರ ರೂ. ಬಹುಮಾನ ನೀಡಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರಮಣ್ ಗುಪ್ತಾ ಹೇಳಿದ್ದಾರೆ.
ವಿರೂಪಾಕ್ಷಪ್ಪ ಮಾಡಾಳ್ ಹಾಗೂ ಪ್ರಶಾಂತ್ ನಿವಾಸಗಳಲ್ಲಿ ಕೋಟ್ಯಂತರ ರೂ. ನಗದು, ಚಿನ್ನಾಭರಣ ಪತ್ತೆಯಾಗಿರುವುದು ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಪ್ರತಿಪಕ್ಷ ಕಾಂಗ್ರೆಸ್ ಆಗ್ರಹಿಸಿದೆ.
ಈ ಮಧ್ಯೆ, ಶಾಸಕ ಮಾಡಾಳ್ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿರುವುದು ಬಿಜೆಪಿ ಸರ್ಕಾರ 40% ಭ್ರಷ್ಟಾಚಾರದಲ್ಲಿ ಮುಳುಗಿರುವುದನ್ನು ತೋರಿಸಿಕೊಟ್ಟಿದೆ ಎಂದು ಕಾಂಗ್ರೆಸ್ ನಾಯಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಟೀಕಿಸಿದ್ದಾರೆ. ರಾಜ್ಯದಲ್ಲಿ ಬಹುತೇಕ ಎಲ್ಲಾ ಸಚಿವರು ಕೂಡ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:54 pm, Sat, 4 March 23