ಹುಬ್ಬಳ್ಳಿ: ಹುಬ್ಬಳ್ಳಿ ಏರ್ಪೋರ್ಟ್ (Hubballi Airport) ಮೇಲ್ದರ್ಜೆಗೆ ಏರಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, 273 ಕೋಟಿ ರೂ. ಬಿಡುಗಡೆ ಮಾಡಿದೆ. ಒಮ್ಮೆ 1,400 ಪ್ರಯಾಣಿಕರನ್ನು ನಿಭಾಯಿಸುವ ಯೋಜನೆ ಜನವರಿಯಲ್ಲಿ ಆರಂಭವಾಗುವ ಸಾಧ್ಯತೆ ಇದ್ದು, ಎರಡು ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಸದ್ಯ ಮೇಲ್ದರ್ಜೆಗೇರಿಸಲು ಒಪ್ಪಿಗೆ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ (Jyotiraditya Scindia) ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಧನ್ಯವಾದ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಪ್ರಲ್ಹಾದ್ ಜೋಶಿ, “ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ 273 ಕೋಟಿ ರೂ.ಗಳ ಅನುಮೋದನೆ ನೀಡಿದ ನಾನು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಕೃತಜ್ಞನಾಗಿದ್ದೇನೆ. ಹೊಸ ಟರ್ಮಿನಲ್ 20,000 ಚದರ ಮೀಟರ್ (ನೆಲ + ಮೊದಲ ಮಹಡಿ) ಪ್ರದೇಶದಲ್ಲಿ ವಿಸ್ತರಣೆಗೊಳ್ಳಲಿದೆ. ಏಕಕಾಲಕ್ಕೆ 1400ಕ್ಕೂ ಅಧಿಕ ಪ್ರಯಾಣಿಕರನ್ನು (ಆಗಮಿಸುವ ಮತ್ತು ನಿರ್ಗಮಿಸುವ) ನಿರ್ವಹಿಸುವ ಸಾಮರ್ಥ್ಯ ಹೊಂದಲಿದೆ. ವಿಸ್ತರಣೆ ಕಾಮಗಾರಿ ಜನವರಿಯಲ್ಲಿ ಆರಂಭವಾಗಲಿದ್ದು, ಎರಡು ವರ್ಷಗಳಲ್ಲಿ ಪ್ರಯಾಣಿಕರ ಉಪಯೋಗಕ್ಕೆ ಮುಕ್ತವಾಗಿಸುವ ಗುರಿ ಹೊಂದಿದೆ” ಎಂದಿದ್ದಾರೆ.
I am thankful to PM @NarendraModi ji & Civil Aviation Minister @JM_Scindia ji for approving Rs. 273 crores for expansion of Hubli Airport Terminal. New terminal will be spread over 20,000 sqmt ( Ground+ First Floor)@aaihbxairport pic.twitter.com/yiywafyVzE
— Pralhad Joshi (@JoshiPralhad) June 10, 2023
ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಸೇರಿದಂತೆ ಇತರ ಸಂಬಂಧಿಸಿದ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ವರ್ಷದ ಮೊದಲ ತಿಂಗಳಲ್ಲಿ ಜೋಶಿ ಅವರು ಹೇಳಿಕೆ ನೀಡಿದ್ದರು. ಈಗಿರುವ ಟರ್ಮಿನಲ್ ಕಟ್ಟಡದ ವಿಸ್ತೀರ್ಣ ಹೆಚ್ಚಳ ಮಾಡಿ ಬೆಂಗಳೂರಿನಲ್ಲಿರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿರುವ ವಿಮಾನ ಆಗಮನ – ನಿರ್ಗಮನ ಮಾದರಿಯಲ್ಲಿ ವ್ಯವಸ್ಥೆ ಮಾಡಲು ಮತ್ತೊಂದು ಹೊಸ ಟರ್ಮಿನಲ್ ನಿರ್ಮಾಣ ಮಾಡಲು ಯೋಜಿಸಲಾಗಿದೆ ಎಂದು ಹೇಳಿದ್ದರು.
ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಪರಿವರ್ತಿಸುವ ಅಗತ್ಯವನ್ನು ವಿಮಾನ ಯಾನ ಸಚಿವರಿಗೆ ವಿವರಿಸಲಾಗಿತ್ತು. ಕೈಗಾರಿಕಾ ಹೂಡಿಕೆ, ಕೃಷಿ, ತೋಟಗಾರಿಕೆ ಉತ್ಪನ್ನಗಳ ರಫ್ತು ಚಟುವಟಿಕೆ, ಉನ್ನತ ಶಿಕ್ಷಣ ಸೇರಿದಂತೆ ಇನ್ನಿತರ ಅಭಿವೃದ್ಧಿಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುವುದು ಅವಶ್ಯಕ ಎಂದು ಸಿಂಧಿಯಾ ಅವರಿಗೆ ಮನವರಿಕೆ ಮಾಡಿಲಾಗಿದೆ ಎಂದು ಜೋಶಿ ಹೇಳಿದ್ದರು.
ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ಸಂಬಂಧಿಸಿದಂತೆ ನಮ್ಮ ಪ್ರಸ್ತಾವನೆಗೆ ಶೀಘ್ರವಾಗಿ ಸ್ಪಂದಿಸಿ ರೂ.273 ಕೋಟಿ ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ @NarendraModi ಜೀ ಹಾಗೂ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ @JM_Scindia ಅವರಿಗೆ ಸಮಸ್ತ ಉತ್ತರ ಕರ್ನಾಟಕದ ಜನತೆಯ ಪರವಾಗಿ ಧನ್ಯವಾದಗಳು.
— Pralhad Joshi (@JoshiPralhad) June 10, 2023
ಹುಬ್ಬಳ್ಳಿಯ ವಿಮಾನ ನಿಲ್ದಾಣವು ರಾಜ್ಯದ ಮೊದಲ ಹಸಿರು ವಿಮಾನ ನಿಲ್ದಾಣವೂ ಹೌದು. ಪ್ರಧಾನಿ ನರೇಂದ್ರ ಮೋದಿಯವರ ಕನಸಿನಂತೆ 2030 ರೊಳಗೆ ಶೇ 50 ರಷ್ಟು ಗ್ರೀನ್ ಎನರ್ಜಿಯತ್ತ ದೇಶ ಸಾಗಬೇಕಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ಶೇ.100 ರಷ್ಟು ಅಂದರೆ ಸಂಪೂರ್ಣ ಸೌರಶಕ್ತಿಯ ಮೂಲಕ ಕಾರ್ಯನಿರ್ವಹಿಸಲಿದೆ ಎಂದು ಈ ಹಿಂದೆ ಜೋಶಿ ಟ್ವೀಟ್ ಮಾಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:19 pm, Sat, 10 June 23