ಧಾರವಾಡ: ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಅವರಿಗೆ ನಿರಾಸೆಯಾಗಿದೆ. ಧಾರವಾಡ ಪ್ರವೇಶಕ್ಕೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅನುಮತಿ ನಿರಾಕರಿಸಿದೆ. ಜೂನ್ 20ರ ಚುನಾವಣೆಗೆ ಮತದಾನ ಮಾಡಲು ಕುಲಕರ್ಣಿ ಅವರು ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಅನುಮತಿ ನಿರಾಕರಿಸಿ ನ್ಯಾಯಾಧೀಶ ಬಿ.ಜಯಂತಕುಮಾರ್ ಆದೇಶ ಹೊರಡಿಸಿದ್ದಾರೆ.
ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಕ್ಕೆ ಅನುಮತಿಯನ್ನು ಈ ಹಿಂದೆಯೇ ಸುಪ್ರೀಂಕೋರ್ಟ್ ನಿರಾಕರಿಸಿದೆ. ಅಲ್ಲದೆ, ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದ ಸಾಕ್ಷಿಯ ತಾಯಿ ನಗರ ಪಾಲಿಕೆ ಸದಸ್ಯರಾಗಿದ್ದಾರೆ. ಸದ್ಯ ಶಾಸಕರಾದ ಮೇಲೆ ವಿನಯ್ ಕುಲಕರ್ಣಿ ಮತ್ತಷ್ಟು ಪ್ರಭಾವಿಯಾಗಿರುವ ಹಿನ್ನೆಲೆ ಅನುಮತಿ ನೀಡದಂತೆ ಸಿಬಿಐ ಎಸ್ಪಿಪಿ ಗಂಗಾಧರ ಶೆಟ್ಟಿ ವಾದ ಮಂಡಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಜೂ.20 ರಂದು ಚುನಾವಣೆ ನಡೆಯಲಿದ್ದು, ಕೈ ಎತ್ತುವ ಮೂಲಕ ಮತದಾನ ಮಾಡಬೇಕು. ಹೀಗಾಗಿ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಶಾಸಕನಾಗಿ ಅಯ್ಕೆಯಾಗಿರುವ ಕಾರಣಕ್ಕೆ ಮತದಾನ ಮಾಡಬೇಕಿರುವುದರಿಂದ ಧಾರವಾಡ ಪ್ರವೇಶಿಸದಂತೆ ವಿಧಿಸಿರುವ ನಿರ್ಬಂಧವನ್ನು ಸಡಿಲಿಸುವಂತೆ ಮನವಿ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಜೂ.17ರೊಳಗೆ ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ಕೋರ್ಟ್ ಸೂಚನೆ ನೀಡಿತ್ತು.
ಇದನ್ನೂ ಓದಿ: ಬತ್ತುತ್ತಿರುವ ಬೆಳಗಾವಿ ಜಿಲ್ಲೆಯ 7 ನದಿಗಳು: ಹುಬ್ಬಳ್ಳಿ-ಧಾರವಾಡ, ಕುಂದಾನಗರಿಯಲ್ಲಿ ನೀರಿಗೆ ಹಾಹಾಕಾರ..!?
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿ ಹಲವರು ಆರೋಪಿ ಸ್ಥಾನದಲ್ಲಿದ್ದಾರೆ. ಸುಪ್ರೀಂ ಕೋರ್ಟ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡುವ ವೇಳೆ, ನ್ಯಾಯಾಲಯದ ಅನುಮತಿ ಪಡೆಯದೇ ಧಾರವಾಡ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂಬುದು ಸೇರಿದಂತೆ ನಾಲ್ಕು ಷರತ್ತುಗಳನ್ನು ವಿಧಿಸಿತ್ತು.
ಬಳಿಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿನಯ್ ಕುಲಕರ್ಣಿ, ಧಾರವಾಡ ಪ್ರವೇಶಿಸಲು ನ್ಯಾಯಾಲಯದ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ವಿನಯ್ ಕುಲಕರ್ಣಿ ಅವರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತಿರಸ್ಕರಿಸಿತ್ತು. ಹೀಗಾಗಿ, ವಿನಯ್ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿಯೂ ಅರ್ಜಿ ವಜಾ ಆಗಿತ್ತು. ಇದರಿಂದ ವಿನಯ್ ಕುಲಕರ್ಣಿ ಅವರು ಧಾರವಾಡ ಜಿಲ್ಲೆಯಿಂದ ಹೊರಗೆ ಇದ್ದುಕೊಂಡೇ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಅಂತಿಮವಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ