ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ವಲಯದ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದ ಸಂತ್ರಸ್ತರಿಗೆ ಕೂಡಲೇ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಕಾಳಜಿ ವಹಿಸಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ಹಾಗೂ ಗಾಯಗೊಂಡವರಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ (CM Basavaraj Bommai) ದೂರವಾಣಿ ಕರೆ ಮಾಡಿ ಮಾತನಾಡಿದರು. ಈ ವೇಳೆ ಅಗ್ನಿ ಅವಘಡದ ಬಗ್ಗೆ ಸಿಎಂ ಜೊತೆ ಚರ್ಚಿಸಿದ ಕೇಂದ್ರ ಸಚಿವರು, ಮೃತಪಟ್ಟವರ ಕುಟುಂಬದವರಿಗೆ ಹಾಗೂ ಗಾಯಗೊಂಡವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿ ಮೂಲಕ ನೆರವು ನೀಡುವ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.
ಸಂತ್ರಸ್ತರ ಪರ ಜೋಶಿ ಅವರ ಕಾಳಜಿಗೆ ಸ್ಪಂದಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಮೂಲಕ ಸಂತ್ರಸ್ತರಿಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ಮೂಲಕ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಈ ದುರ್ಘಟನೆಯ ಬಗ್ಗೆ ತಿಳಿದು ಅಘಾತವಾಯಿತು, ಬೆಂಕಿ ಅವಘಡಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವಘಡದಲ್ಲಿ ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ಹಾಗೂ ಗಾಯಾಳುಗಳಿಗೆ ಪರಿಹಾರ ನೀಡುವ ಸಂಬಂಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಬಳಿ ಮಾತಾಡಿದ್ದೇನೆ. ಸಿಎಂ ಕೂಡಲೇ ಈ ಬಗ್ಗೆ ಕ್ರಮವಹಿಸೋದಾಗಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಸ್ಪಂದನೆಗೆ ಧನ್ಯವಾದ ಎಂದು ಪ್ರಲ್ಹಾದ ಜೋಶಿಯವರು ಟ್ವೀಟ್ ಮಾಡಿದ್ದಾರೆ.
ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ವಲಯದಲ್ಲಿರುವ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವುದು ತಿಳಿದು ತುಂಬಾ ಆಘಾತ ಉಂಟಾಗಿದೆ.
ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿ ಶ್ರೀ @BSBommai ಅವರ ಜೊತೆ ಮಾತನಾಡಿದ್ದು ಘಟನೆಯಲ್ಲಿ ಮರಣಹೊಂದಿದವರ ಮತ್ತು ಗಾಯಗೊಂಡವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ನೀಡುವುದಾಗಿ ಸ್ಪಂದಿಸಿದ್ದಾರೆ— Pralhad Joshi (@JoshiPralhad) July 24, 2022
Published On - 2:26 pm, Mon, 25 July 22