ಹುಬ್ಬಳ್ಳಿ, ಅಕ್ಟೋಬರ್ 28: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ಕಾಂಗ್ರೆಸ್ ಶಾಸಕ ಎನ್ಎಚ್ ಕೋನರಡ್ಡಿ (NH Konaraddi) ಕೀಳು ಅಭಿರುಚಿಯ ಹೇಳಿಕೆ ನೀಡಿದ್ದು, ವಿವಾದ ಸೃಷ್ಟಿಸುವ ಸಾಧ್ಯತೆ ಇದೆ. ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕೋನರಡ್ಡಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಕುರಿತು ವ್ಯಂಗ್ಯವಾಡಿದ್ದಾರೆ. ಬಸವರಾಜ ಬೊಮ್ಮಾಯಿ ಅವರಿಗೆ ಹೃದಯಾಘಾತ ಆಯಿತು. ಅವರ ಪಕ್ಷದಲ್ಲಿ ಅವರ ವರ್ಚಸ್ಸು ಕಡಿಮೆ ಆಗಿದೆ ಎಂದು ಅವರಿಗೆ ಹಾರ್ಟ್ ಅಟ್ಯಾಕ್ ಆಯ್ತು ಎಂದು ಕೋನರಡ್ಡಿ ಹೇಳಿದ್ದಾರೆ.
ಬಿಜೆಪಿ ಪಕ್ಷ ಅಧೋಗತಿಗೆ ಹೋಗಿರುವುದನ್ನು ನೋಡಿ ಚಿಂತೆ ಮಾಡಿ ಬೊಮ್ಮಾಯಿ ಅವರಿಗೆ ಹಾರ್ಟ್ ಅಟ್ಯಾಕ್ ಆಯ್ತು ಎಂದು ಕೋನರಡ್ಡಿ ವ್ಯಂಗ್ಯವಾಡಿದ್ದಾರೆ.
ಮಾಜಿ ಮುಖ್ಯಮಂತ್ರಿಯ ಅನಾರೋಗ್ಯದ ಕುರಿತು ಸೌಜನ್ಯವನ್ನೇ ಮರೆತು ಕಾಂಗ್ರೆಸ್ ಶಾಸಕ ಮಾತನಾಡಿದರೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ವ್ಯಕ್ತವಾಗಿದೆ. ಬಹಿರಂಗ ಸಭೆಯಲ್ಲೇ ಬೊಮ್ಮಾಯಿ ಅನಾರೋಗ್ಯದ ಕುರಿತು ಅಪಹಾಸ್ಯ ಮಾಡಿದ್ದಕ್ಕೆ ಆಕ್ಷೇಪವೂ ವ್ಯಕ್ತವಾಗಿದೆ.
ಇತ್ತೀಚೆಗಷ್ಟೇ ಬಸವರಾಜ ಬೊಮ್ಮಾಯಿ ಅವರು ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಮಂಡಿನೋವಿನ ಬಾಧೆ ಕಾಡುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೋಗ್ಯ ತಪಾಸಣೆ ನಡೆಸಿದಾಗ ಹೃದಯದ ಕವಾಟಗಳು ಮುಚ್ಚಿಕೊಂಡಿರುವುದು ಪತ್ತೆಯಾಗಿತ್ತು. ನಂತರ ಅವರು ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಕೆಲವು ದಿನಗಳ ಹಿಂದಷ್ಟೇ ಆಸ್ಪತ್ರೆಯಿಂದ ಮನೆಗೆ ಮರಳಿ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ದೂರವಾಣಿ ಮೂಲಕ ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಹಾಗೂ ಇತರ ನಾಯಕರು ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದ್ದರು. ಯಡಿಯೂರಪ್ಪ ಮತ್ತು ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ತೆರಳಿ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ