ಹುಬ್ಬಳ್ಳಿಯ ಈದ್ಗಾ‌ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ವಾಗತ

| Updated By: ವಿವೇಕ ಬಿರಾದಾರ

Updated on: Aug 29, 2022 | 9:17 PM

Hubli Idgah maidan: ಹುಬ್ಬಳ್ಳಿಯ ಈದ್ಗಾ‌ ಮೈದಾನದಲ್ಲಿ 3 ದಿನಗಳ ಕಾಲ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅವಕಾಶ ನೀಡಿದೆ.

ಹುಬ್ಬಳ್ಳಿಯ ಈದ್ಗಾ‌ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ವಾಗತ
ಹುಬ್ಬಳ್ಳಿ ಈದ್ಗಾ ಮೈದಾನ
Follow us on

ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ‌ ಮೈದಾನದಲ್ಲಿ (Hubli Idgah Maidan)  3 ದಿನಗಳ ಕಾಲ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubli-Dharwad Municipal Corporation)  ಅವಕಾಶ ನೀಡಿದೆ. ಈದ್ಗಾ‌ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ (Pralhad Joshi) ನೇತೃತ್ವದಲ್ಲಿ ಹುಬ್ಬಳ್ಳಿಯ ಸರ್ಕಿಟ್ ಹೌಸ್‌ನಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಸದನ ಸಮಿತಿ ಸದಸ್ಯರು, ಮೇಯರ್ ಈರೇಶ ಅಂಚಟಗೇರಿ ಎಡಿಜಿಪಿ ಅಲೋಕಕುಮಾರ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಮಹಾನಗರ ‌ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಸೇರಿದಂತೆ ಅನೇಕ ಅಧಿಕಾರಿಗಳು ಭಾಗಿಯಾಗಿದ್ದರು.

ಸಭೆ ಬಳಿಕ ಮಾತನಾಡಿದ ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಗಣೇಶ ಪ್ರತಿಷ್ಠಾಪನೆಗೆ ಒಟ್ಟು ಆರು ಹಿಂದುಪರ ಸಂಘಟನೆಗಳು ಮನವಿ ಮಾಡಿದ್ದವು. ಸಂಘಟನೆಗಳ ಮನವಿ ಪರಿಶೀಲನೆಗಾಗಿ ಸಮಿತಿಯನ್ನು ರಚಿಸಲಾಗಿತ್ತು ಎಂದು ಹೇಳಿದರು.

ಸಮಿತಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವಂತೆ ವರದಿ ನೀಡಿತ್ತು. ಹೀಗಾಗಿ ಆರು ಸಂಘಟನೆಗಳ ಪೈಕಿ ಒಂದು ಸಂಘಟನೆಗೆ ಅವಕಾಶ ನೀಡಲಾಗಿದೆ ಎಂದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ವಾಗತ

ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಮಹಾನಗರ ಪಾಲಿಕೆ ಅವಕಾಶ ನೀಡಿದ ಹಿನ್ನೆಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ ಪಾಲಿಕೆ ಒಳ್ಳೆಯ ನಿರ್ಣಯ ತೆಗೆದುಕೊಂಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ. ಪಾಲಿಕೆಯ ನಿರ್ಣಯವನ್ನ ನಾನು ಸ್ವಾಗತ ಮಾಡುತ್ತೇನೆ. ಸೌಹಾರ್ದತೆಯಿಂದ ಗಣೇಶೋತ್ಸವ ಆಚರಣೆ ಮಾಡುವುದು ಸೂಕ್ತ ಎಂದು ಸೂಚಿಸಿದರು.

ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸಲು ಎಡಿಜಿಪಿಗೆ ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೂ ಸಹ ನಾನು ಸೂಕ್ತ ಸಲಹೆ ನೀಡಿದ್ದೇನೆ. ಈಗಾಗಲೇ ಎಲ್ಲಾ ರೀತಿಯ ಕಾನೂನು ಸುವ್ಯವಸ್ಥೆ ಆಗಿದೆ. ಅಲೋಕ್ ಕುಮಾರ್ ಅವರ ನೇತೃತ್ವದಲ್ಲಿ ಭದ್ರತೆ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.

ಗಣೇಶ ಹಬ್ಬವನ್ನು ಸೌಹಾರ್ದತೆಯಿಂದ ಮಾಡೋಣ. ಇದರಿಂದ ಕಳೆದುಕೊಳ್ಳುವುದೇನೂ ಇಲ್ಲ. ಎಲ್ಲಾ ಶಾಸಕರು, ಸದಸ್ಯರು, ಅಧಿಕಾರಿಗಳ ಗಮನಕ್ಕೆ ತಂದು ಸಮಿತಿ ಈ ನಿರ್ಧಾರ ಕೈಗೊಂಡಿದೆ. ಜನ ಯಾವುದೇ ಉದ್ವೇಗಕ್ಕೊಳಗಾಗದೇ ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕು ವಿನಂತಿಸಿಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:20 pm, Mon, 29 August 22