ಹುಬ್ಬಳ್ಳಿ, ಮಾ.07: ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆಶಯದಂತೆ ಹುಬ್ಬಳ್ಳಿ ವಿಮಾನ ನಿಲ್ದಾಣದ (Hubli Airport) ಹೊಸ ಟರ್ಮಿನಲ್ ಕಟ್ಟಡ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಮಾ.10ರಂದು ಚಾಲನೆ ನೀಡಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಉತ್ತರ ಪ್ರದೇಶದ ಅಜಂಗಢದಿಂದ ಪ್ರಧಾನಿ ಮೋದಿ ಅವರು ವರ್ಚ್ಯುವಲ್ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹುಬ್ಬಳ್ಳಿ ವಿಮಾನ ನಿಲ್ದಾಣ ಅಭಿವೃದ್ಧಿಯನ್ನು ಕೈಗೊಂಡಿದ್ದು, ವಿಶ್ವ ದರ್ಜೆಯ ವಿಮಾನ ನಿಲ್ದಾಣವನ್ನಾಗಿ ರೂಪಿಸಲು ಈ ಮೂಲಕ ಕ್ರಮ ಕೈಗೊಂಡಿದೆ ಎಂದು ವಿಮಾನ ನಿಲ್ದಾಣದ ಕಾರ್ಯ ನಿರ್ವಾಹಕ ನಿರ್ದೇಶಕ ಮನೋಜ್ ಶೇಖರನ್ ತಿಳಿಸಿದ್ದಾರೆ.
ಸಚಿವ ಪ್ರಹ್ಲಾದ ಜೋಶಿ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ವಿಶ್ವದರ್ಜೆಗೆ ಏರಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಪಡಿಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ಮಾತುಕತೆ ನಡೆಸುವ ಮೂಲಕ ಇನ್ನೆರೆಡೇ ದಿನದಲ್ಲಿ ಪ್ರಧಾನಿ ಅವರಿಂದ ಶಂಕುಸ್ಥಾಪನೆ ನೆರವೇರಿಸುವಲ್ಲಿ ಸಫಲರಾಗಿದ್ದಾರೆ. ಈ ಹಿನ್ನಲೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಂಡು, ನಿಲ್ದಾಣದ ಅಭಿವೃದ್ಧಿಗೆ ಅಗತ್ಯ ಮಾರ್ಗದರ್ಶನ ನೀಡುವಂತೆ ವಿಮಾನ ನಿಲ್ದಾಣ ಪ್ರಾಧಿಕಾರ ಸಚಿವ ಜೋಶಿ ಅವರನ್ನು ಆಹ್ವಾನಿಸಿದೆ.
ಹುಬ್ಬಳ್ಳಿ ಇಂದು ಉತ್ತರ ಕರ್ನಾಟಕದ ಹೆಬ್ಬಾಗಿಲು ಮಾತ್ರವಲ್ಲ, ಪ್ರಮುಖ ವಾಣಿಜ್ಯ ಕೇಂದ್ರ ಬಿಂದುವಾಗಿದೆ. ಹಾಗಾಗಿ ಮಾ.10ರಂದು 350 ಕೋಟಿ ರೂ. ವೆಚ್ಚದಲ್ಲಿ ಮತ್ತೊಂದು ಟರ್ಮಿನಲ್ಗೆ ಭೂಮಿಪೂಜೆ ನೆರವೇರಿಸಲಾಗುತ್ತದೆ ಎಂದು ಸಚಿವ ಜೋಶಿ ಅವರು ಧಾರವಾಡ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಪಕ್ಷಿ ನೋಟ ಬುಕ್ ಬಿಡುಗಡೆ ವೇಳೆ ಘೋಷಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:05 pm, Thu, 7 March 24