ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ ಪ್ರಕರಣ: ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದ ರಾಷ್ಟ್ರೀಯ ಮಹಿಳಾ ಆಯೋಗ
ಬಿಜೆಪಿ ಕಾರ್ಯಕರ್ತೆ ಮೇಲೆ ಪೊಲೀಸ್ ಹಲ್ಲೆ ಮತ್ತು ಬಟ್ಟೆ ಹರಿದ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಕರ್ನಾಟಕ ಡಿಜಿಪಿಗೆ ಪತ್ರ ಬರೆದು ತಕ್ಷಣ ಎಫ್‌ಐಆರ್ ದಾಖಲಿಸಲು, ತನಿಖೆ ನಡೆಸಲು ಮತ್ತು ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚಿಸಿದೆ. ಸಂತ್ರಸ್ತೆಗೆ ಬೆಂಬಲ ನೀಡುವಂತೆ ಮತ್ತು 5 ದಿನಗಳಲ್ಲಿ ವರದಿ ಸಲ್ಲಿಸುವಂತೆ ಆಯೋಗ ಒತ್ತಾಯಿಸಿದೆ.

ಹುಬ್ಬಳ್ಳಿ, ಜ.8: ಬಿಜೆಪಿ ಕಾರ್ಯಕರ್ತೆಯನ್ನ (BJP Worker) ಬಟ್ಟೆಬಿಚ್ಚಿ ಪೊಲೀಸರು ಥಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ. ಈ ಬಗ್ಗೆ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಕೂಡ ಬರೆದಿದೆ. ಹುಬ್ಬಳ್ಳಿಯಲ್ಲಿ ಮಹಿಳಾ ಕಾರ್ಯಕರ್ತೆಯೊಬ್ಬರನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರು ಅವರ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದಿರುವ ಆಕ್ಷೇಪಾರ್ಹ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆಯೋಗವು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ. ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಶ್ರೀಮತಿ ವಿಜಯಾ ರಹಾಟ್ಕರ್ ಅವರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದು ಮಹಿಳೆಯ ಘನತೆ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಮೂಲಕ ರಾಷ್ಟ್ರೀಯ ಮಹಿಳಾ ಆಯೋಗವು ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತಕ್ಷಣವೇ ಎಫ್‌ಐಆರ್ ದಾಖಲಿಸಿಕೊಂಡು ಲಭ್ಯವಿರುವ ವಿಡಿಯೋ ಸಾಕ್ಷ್ಯಗಳನ್ನು ಬಳಸಿಕೊಂಡು ನಿಖರ ಹಾಗೂ ಸಮಯಬದ್ಧ ತನಿಖೆ ನಡೆಸಬೇಕು. ಕರ್ತವ್ಯ ಲೋಪ ಎಸಗಿದ ಹಾಗೂ ಮಹಿಳೆಯ ಜತೆಗೆ ಅಸಭ್ಯವಾಗಿ ವರ್ತಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಈ ಪತ್ರದಲ್ಲಿ ತಿಳಿಸಿದ್ದಾರೆ. ಸಂತ್ರಸ್ತ ಮಹಿಳೆಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ, ಮಾನಸಿಕ ಬೆಂಬಲ, ಕಾನೂನುಬದ್ಧ ಪರಿಹಾರವನ್ನು ಒದಗಿಸಬೇಕು ಎಂದು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಬಗ್ಗೆ 5 ದಿನಗಳ ಒಳಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಆಯೋಗವು ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ.

ಕಾಂಗ್ರೆಸ್ ನಾಯಕಿ ಸೇರಿ 9 ಮಂದಿ ವಿರುದ್ಧ ಕೇಸ್:
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ (Congress) ಸದಸ್ಯೆ ಸುವರ್ಣಾ ಕಲಕುಂಟ್ಲಾ, ಡೇವಿಡ್ ಸೇರಿದಂತೆ ಒಟ್ಟು 9 ಜನರ ವಿರುದ್ಧ ಕೊಲೆ ಯತ್ನ, ಜೀವ ಬೆದರಿಕೆ, ಗಲಭೆ ಸೇರಿ ಗಂಭೀರ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ.ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 109, 115(2), 118(1), 189(2), 191(2), 74, 190 ಹಾಗೂ 351ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: BJP ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿದ್ದು ಯಾರು? ಮಹಿಳೆಯ ಹೈಡ್ರಾಮಾವೋ? ಪೊಲಿಸರ ಕ್ರೌರ್ಯವೋ?
ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ಒಬ್ಬ ಪೊಲೀಸ್ ಕಮಿಷನರ್ ಪ್ರಕರಣದ ಕುರಿತು ಅಧಿಕೃತವಾಗಿ ಹೇಳಿಕೆ ನೀಡಿದ ಬಳಿಕ ಇನ್ನೇನು ಅನುಮಾನಕ್ಕೆ ಅವಕಾಶ ಇದೆ? ಪೊಲೀಸರು ಆಕೆಯನ್ನು ವಿವಸ್ತ್ರ ಮಾಡಿಲ್ಲ. ಆಕೆಯೇ ಸ್ವಯಂವಾಗಿ ಬಟ್ಟೆ ತೆಗೆದುಕೊಂಡಿದ್ದಾಳೆ ಎಂದು ಕಮಿಷನರ್ ಹೇಳಿದ್ದಾರೆ ಎಂದು ಸಚಿವ ಪರಮೇಶ್ವರ್ ಹೇಳಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
