
ಧಾರವಾಡ, ಜೂನ್ 30: ಇಡೀ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದ (Neha Hiremath Murder Case) ಮುಖ್ಯ ಆರೋಪಿ ಫಯಾಜ್‌ಗೆ ನ್ಯಾಯಾಲಯದಲ್ಲಿ ಮತ್ತೊಮ್ಮೆ ಭಾರಿ ಮುಖಭಂಗವಾಗಿದೆ. ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು (Bail Petition) ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ಇಂದು (ಮಂಗಳವಾರ) ವಜಾಗೊಳಿಸಿ ಆದೇಶ ಹೊರಡಿಸಿದೆ.
ಈ ಹಿಂದೆ ಹುಬ್ಬಳ್ಳಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ಫಯಾಜ್‌ನ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಜಿಲ್ಲಾ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಹಾಗೂ ತನಗೆ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಆರೋಪಿಯು ಹೈಕೋರ್ಟ್ ಮೆಟ್ಟಿಲೇರಿದ್ದನು. ಹೈಕೋರ್ಟ್‌ನಲ್ಲಿ ಉಭಯ ಪಕ್ಷಗಳ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠವು, ಪ್ರಕರಣದ ಗಾಂಭೀರ್ಯತೆಯನ್ನು ಪರಿಗಣಿಸಿ ಆರೋಪಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ.
ಕೊಲೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಪರವಾಗಿ ಹಿರಿಯ ನ್ಯಾಯವಾದಿ ರಾಘವೇಂದ್ರ ಮುತ್ತಗಿ ಅವರು ಹೈಕೋರ್ಟ್‌ನಲ್ಲಿ ಬಲವಾದ ವಾದ ಮಂಡಿಸಿದರು. ಆರೋಪಿ ಮಾಡಿರುವ ಕೃತ್ಯ ಅತ್ಯಂತ ಕ್ರೂರವಾಗಿದ್ದು, ಆತನಿಗೆ ಜಾಮೀನು ನೀಡಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಮತ್ತು ಸಾಕ್ಷ್ಯ ನಾಶಪಡಿಸುವ ಸಾಧ್ಯತೆಯಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಈ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಕಾಲೇಜು ಆವರಣದಲ್ಲೇ ಸಾರ್ವಜನಿಕವಾಗಿ ನಡೆದಿದ್ದ ಈ ಭೀಕರ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿ (CID) ತೀವ್ರಗೊಳಿಸಿದ್ದು, ಹೈಕೋರ್ಟ್‌ನ ಈ ನಿರ್ಧಾರದಿಂದ ನೇಹಾ ಕುಟುಂಬಕ್ಕೆ ಕಾನೂನು ಹೋರಾಟದಲ್ಲಿ ದೊಡ್ಡ ಜಯ ಸಿಕ್ಕಂತಾಗಿದೆ.
ಪ್ರಕರಣದ ಹಿನ್ನೆಲೆ ಇಲ್ಲಿದೆ
ಏಪ್ರಿಲ್ 18, 2024 ರಂದು ಹುಬ್ಬಳ್ಳಿಯ ಪ್ರತಿಷ್ಠಿತ ಬಿವಿಬಿ (BVB) ಕಾಲೇಜು ಆವರಣದಲ್ಲಿ 24 ವರ್ಷದ ಎಂಸಿಎ (MCA) ವಿದ್ಯಾರ್ಥಿನಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರನ್ನು ಆರೋಪಿ ಫಯಾಜ್ ಸಾರ್ವಜನಿಕವಾಗಿ ಅಡ್ಡಗಟ್ಟಿ, ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ನೇಹಾಗೆ ಚಾಕುವಿನಿಂದ 10 ಕ್ಕೂ ಹೆಚ್ಚು ಬಾರಿ ಮನಬಂದಂತೆ ಇರಿದು ಬರ್ಬರವಾಗಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದನು. ತೀವ್ರ ರಕ್ತಸ್ರಾವದಿಂದಾಗಿ ನೇಹಾ ಕಾಲೇಜು ಆವರಣದಲ್ಲೇ ಕೊನೆಯುಸಿರೆಳೆದಿದ್ದಳು. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿದ ಹುಬ್ಬಳ್ಳಿ ಪೊಲೀಸರು, ಕೊಲೆಗಡುಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಇಬ್ಬರೂ ಒಟ್ಟಿಗೆ ಬಿಸಿಎ ಓದುತ್ತಿದ್ದಾಗ ಪರಿಚಯವಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿತ್ತು.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:04 pm, Tue, 30 June 26