ಪಿಎಫ್‌ಐ ಬ್ಯಾನ್ ಮಾಡುವುದರ ಮೂಲಕ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡವರಿಗೆ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ರಾಷ್ಟ್ರೀಯ ಸುರಕ್ಷತೆಯೇ (National Security priority) ಸರ್ವೋಚ್ಛ ಆದ್ಯತೆಯಾಗಿದೆ. ಸಂಘಟನೆಯ ನಿಷೇಧದಿಂದ ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತೆಗೆ ಅಪಾಯಕಾರಿಯಾಗಿದ್ದ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ. ನಮ್ಮ ದೇಶ ಸುರಕ್ಷತೆಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಪ್ರಲ್ಹಾದ್ ಜೋಶಿ (Pralhad Joshi) ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪಿಎಸ್ ಐ ಅಕ್ರಮ ಚಟುವಟಿಕೆಗಳ ಬಗ್ಗೆ ಈ ಹಿಂದೆಯೇ ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಪ್ರಕರಣದಲ್ಲಿ ಪಿಎಫ್ ಐ ಕೈವಾಡ ಇರುವ ಬಗ್ಗೆ ಆರೋಪಿಸಿದ್ದರು. ಈ ಬಗ್ಗೆ ಸಿಎಂ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ, ಪ್ರಕರಣದಲ್ಲಿ ಪಿಎಫ್ ಐ ಸಂಘಟನೆ ಕೈವಾಡವಿರುವ ಕುರಿತು ತನಿಖೆ ತೀವ್ರಗೊಳಿಸುವಂತೆ ಸೂಚಿಸಿದ್ದರು. ಪಿಎಫ್ ಐ, ಎಸ್.ಡಿ.ಪಿ.ಐ ಸಂಘಟನೆಗಳು ದೇಶ ವಿರೋಧಿ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಕೇಂದ್ರ ಸರ್ಕಾರಕ್ಕಿರುವ ಮಾಹಿತಿಗಳ ಬಗ್ಗೆ ಸಿಎಂ ಬೊಮ್ಮಾಯಿ ಜೊತೆ ಹಂಚಿಕೊಂಡಿದ್ದರು.
ಈ ನಿಟ್ಟಿನಲ್ಲಿ ಪಿಎಫ್ ಐ ಬ್ಯಾನ್ ಗೆ ಕೇಂದ್ರ ಗೃಹ ಇಲಾಖೆ ಜೊತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಚರ್ಚೆ ನಡೆಸಿದ್ದರು. ದೇಶ ವಿರೋಧಿ ಕೃತ್ಯದಲ್ಲಿರುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಸಂಘಟನೆಯನ್ನು ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದರು.
ಪಿಎಫ್ ಐ ಮೇಲೆ ಸಂಘಟಿತ ದಾಳಿ ನಡೆಸಿದ್ದ ರಾಷ್ಟ್ರೀಯ ತನಿಖಾದಳ, ಇಡಿ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ನೂರಾರು ಪಿಎಫ್ ಐ, ಎಸ್.ಡಿ.ಪಿಐ ಕಾರ್ಯಕರ್ತರನ್ನ ಬಂಧಿಸಿತ್ತು. ಪಿಎಫ್ ಐ ಸಂಘಟನೆ ಭಯೋತ್ಪಾದಕ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿರುವ ಬಗ್ಗೆ ಹಲವು ಸಾಕ್ಷ್ಯಗಳು ದೊರೆತ ಹಿನ್ನೆಲೆಯಲ್ಲಿ ಪಿಎಫ್ ಐ ಸಂಘಟನೆಯನ್ನ ಕೇಂದ್ರ ಸರ್ಕಾರ ಐದು ವರ್ಷಗಳ ಕಾಲ ಬ್ಯಾನ್ ಮಾಡಿದೆ.
ಕೇಂದ್ರ ಸರ್ಕಾರ ಪಿಎಫ್‌ಐ ಬ್ಯಾನ್ ಮಾಡುವುದರ ಮೂಲಕ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡವರಿಗೆ ಅತ್ಯಂತ ಕಠಿಣ ಹಾಗೂ ಸ್ಪಷ್ಟ ಸಂದೇಶವನ್ನು ರವಾನಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ರಾಷ್ಟ್ರೀಯ ಸುರಕ್ಷತೆಯೇ ಸರ್ವೋಚ್ಛ ಆದ್ಯತೆಯಾಗಿದೆ .
— Pralhad Joshi (@JoshiPralhad) September 28, 2022
Published On - 3:07 pm, Wed, 28 September 22