ಧಾರವಾಡ: ಬೆಂಬಲ ಬೆಲೆ ಯೋಜನೆ; ಕಡಲೆ ಖರೀದಿ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಆದೇಶ
ರೈತರ ನೋಂದಣಿ ಕಾರ್ಯಕ್ಕೆ ಸಿಬ್ಬಂದಿ ಕೊರತೆ ಕಂಡುಬಂದಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಮತ್ತಿತರ ಇಲಾಖೆಗಳಲ್ಲಿ ಲಭ್ಯವಿರುವ ಸಿಬ್ಬಂದಿಗಳನ್ನು ಬಳಸಿಕೊಳ್ಳಬೇಕು ಮತ್ತು ಅಂತಹ ಸಿಬ್ಬಂದಿಗಳಿಗೆ ಸೂಕ್ತ ಗ್ರೇಡಿಂಗ್ ತರಬೇತಿ ನೀಡಲು ಸಂಬಂಧಪಟ್ಟ ಖರೀದಿ ಸಂಸ್ಥೆಗಳು ಕ್ರಮವಹಿಸಬೇಕು.
ಧಾರವಾಡ: 2021-22ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್ಎಕ್ಯೂ ಗುಣಮಟ್ಟದ ಕಡಲೆಕಾಳಿನ ಬೆಲೆಯನ್ನು ಕೇಂದ್ರ ಸರ್ಕಾರವು ನಿಗದಿಪಡಿಸಿದೆ. ಕ್ವಿಂಟಾಲ್ಗೆ 5230 ರೂಪಾಯಿಯಂತೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಧಾರವಾಡ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ಬಾಗಲಕೋಟೆ, ದಾವಣಗೆರೆ, ಚಿಕ್ಕಮಗಳೂರು ಮತ್ತು ರಾಯಚೂರು ಜಿಲ್ಲೆಗಳ ರೈತರಿಂದ ಖರೀದಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಕೈಮಗ್ಗ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಸರ್ಕಾರದ ಆದೇಶದಂತೆ ನವಲಗುಂದ ವಿಧಾನಸಭಾ ಕ್ಷೇತ್ರ ಸೇರಿದಂತೆ ಧಾರವಾಡ ಜಿಲ್ಲೆಯಾದ್ಯಂತ ಕಳೆದ ಬಾರಿಯಂತೆ ಈ ಸಾಲಿನಲ್ಲಿಯೂ ಕಡಲೆ ಖರೀದಿ ಕೇಂದ್ರಗಳನ್ನು ತೆರೆಯಲು ಸೂಚಿಸಲಾಗಿದೆ.
ನಾಫೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಸಂಸ್ಥೆಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ಮಾರ್ಕ್‌ಫೆಡ್) ಮತ್ತು ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ನಿಯಮಿತ ಸಂಸ್ಥೆಗಳನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಗಳನ್ನಾಗಿ ನೇಮಿಸಿದೆ. ಈ ಆದೇಶ ಹೊರಡಿಸಿದ ದಿನದಿಂದ ರೈತರ ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಿದೆ .
ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು. ಪ್ರತಿ ರೈತರಿಂದ ಪ್ರತಿ ಎಕರೆಗೆ ಗರಿಷ್ಠ 04 ಕ್ವಿಂಟಾಲ್‌ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಎಫ್ಎಕ್ಯೂ ಗುಣಮಟ್ಟದ ಕಡಲೆಕಾಳನ್ನು ಖರೀದಿಸತಕ್ಕದ್ದು. ಖರೀದಿ ಕೇಂದ್ರಗಳಲ್ಲಿ ಕಡಲೆಕಾಳು ಖರೀದಿಸುವ ಪೂರ್ವದಲ್ಲಿ ರೈತರ ನೋಂದಣಿಯನ್ನು ಎನ್‌ಐಸಿ ಸಂಸ್ಥೆಯು ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಬೆಳೆಗಳ ಉತ್ಪನ್ನವನ್ನು ಖರೀದಿಸಲು ಸಿದ್ಧಪಡಿಸಿರುವ ತಂತ್ರಾಂಶವನ್ನು ಸೂಕ್ತವಾಗಿ ಉನ್ನತೀಕರಿಸಿ ಕಡಲೆಕಾಳನ್ನು ಬೆಂಬಲ ಬೆಲೆ ಯೋಜನೆಯಡಿ ನೋಂದಾಯಿಸಲು ಬಳಸಬೇಕು.
ಎನ್‌ಐಸಿ ಅಭಿವೃದ್ಧಿಪಡಿಸಿರುವ ನೋಂದಣಿ ತಂತ್ರಾಂಶವನ್ನು ಈಗಾಗಲೇ FRUITS ತಂತ್ರಾಂಶದೊಂದಿಗೆ ಸಂಯೋಜಿಸಲಾಗಿದೆ. FRUITS ದತ್ತಾಂಶದಲ್ಲಿ ರೈತರಿಗೆ ಸಂಬಂಧಿಸಿದ ವಿವರಗಳನ್ನು ಭೂಮಿ, UIDAI ಮತ್ತು ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ತಾಳೆ ಮಾಡಿ ವಿವರಗಳನ್ನು ಅಂಗೀಕರಿಸಲಾಗಿದೆ. ವಿವರಗಳನ್ನು ಬೆಂಬಲ ಬೆಲೆ ಯೋಜನೆಯಡಿ ನೋಂದಣಿ ಮಾಡಲು ಸಿದ್ಧಪಡಿಸಿದ ತಂತ್ರಾಂಶಕ್ಕೆ ವಿದ್ಯುನ್ಮಾನ ರೀತಿಯಲ್ಲಿ ಒದಗಿಸಲಾಗುತ್ತದೆ. ಬೆಂಬಲ ಬೆಲೆ ಯೋಜನೆಯಡಿ ನೋಂದಣಿ ಮಾಡಿದ ನಂತರ ಎನ್‌ಐಸಿ ತಂತ್ರಾಂಶದಿಂದ ನಾಫೆಡ್ ಸಂಸ್ಥೆಯ ತಂತ್ರಾಂಶಕ್ಕೆ ರೈತರ ನೋಂದಣಿ ಮಾಹಿತಿಯನ್ನು ಒದಗಿಸಲಾಗುವುದು . ನಾಫೆಡ್ ಸಂಸ್ಥೆಯು ತಮ್ಮ ತಂತ್ರಾಂಶದಲ್ಲಿ ಈ ಮಾಹಿತಿಯನ್ನು ಬಳಸಿ ರೈತರಿಂದ ಕಡಲೆಕಾಳು ಖರೀದಿ ಕೇಂದ್ರಗಳಿಂದ ಖರೀದಿಸಬೇಕು.
ಖರೀದಿ ಸಂಸ್ಥೆಗಳು ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ನಾಫೆಡ್ ಮಾರ್ಗಸೂಚಿಯನ್ವಯ ಹಾಗೂ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಗೋದಾಮುಗಳನ್ನು ಹೊಂದಿರುವ ಸದೃಢ PACS / VSSN / FPO / TXPCMS ಸಂಸ್ಥೆಗಳ ಮುಖಾಂತರ ಹೊಂದಾಣಿಕೆ ಮಾಡಿಕೊಂಡು ಖರೀದಿ ಕೇಂದ್ರಗಳನ್ನು ತೆರೆಯಬೇಕು.
ರೈತರ ನೋಂದಣಿ ಕಾರ್ಯಕ್ಕೆ ಸಿಬ್ಬಂದಿ ಕೊರತೆ ಕಂಡುಬಂದಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಮತ್ತಿತರ ಇಲಾಖೆಗಳಲ್ಲಿ ಲಭ್ಯವಿರುವ ಸಿಬ್ಬಂದಿಗಳನ್ನು ಬಳಸಿಕೊಳ್ಳಬೇಕು ಮತ್ತು ಅಂತಹ ಸಿಬ್ಬಂದಿಗಳಿಗೆ ಸೂಕ್ತ ಗ್ರೇಡಿಂಗ್ ತರಬೇತಿ ನೀಡಲು ಸಂಬಂಧಪಟ್ಟ ಖರೀದಿ ಸಂಸ್ಥೆಗಳು ಕ್ರಮವಹಿಸಬೇಕು.
ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯು ಸಂಬಂಧಪಟ್ಟ ಜಿಲ್ಲೆಯಲ್ಲಿ ಅವಶ್ಯಕತೆಗನುಗುಣವಾಗಿ ಖರೀದಿ ಕೇಂದ್ರಗಳ ಸಂಖ್ಯೆಯನ್ನು ತೆರೆಯಲು ನಾಫೆಡ್ ಸಂಸ್ಥೆಯೊಂದಿಗೆ ಸಮಾಲೋಚಿಸಿ ನಿರ್ಧರಿಸಬೇಕು. ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವು ನೇರ ನಗದು ವರ್ಗಾವಣೆ ಮೂಲಕ ಜಮಾ ಆಗುವಂತೆ ಪಾವತಿಸಬೇಕು.
ಕಡಲೆಕಾಳು ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಕಡಲೆಕಾಳು ಖರೀದಿಸಬಾರದು. ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು.
ಬೆಂಬಲ ಬೆಲೆ ಯೋಜನೆ ಮಾರ್ಗಸೂಚಿ ಹಾಗೂ ಆವರ್ತನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಯೋಜನೆಯಡಿಯಲ್ಲಿ ಖರೀದಿಸುವ ಪ್ರಗತಿಯ ವಿವರವನ್ನು ಪ್ರತಿದಿನ ಸರ್ಕಾರಕ್ಕೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಇಮೇಲ್ ಮೂಲಕ ಸಲ್ಲಿಸಬೇಕು.
ಜಿಲ್ಲಾಧಿಕಾರಿ ಕಡಲೆಕಾಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಬಗ್ಗೆ ಕ್ರಮವಹಿಸಬೇಕು. ಕೊವಿಡ್ -19 ( ನೋವೆಲ್ ಕೊರೊನಾ ವೈರಾಣು ) ನಿಯಂತ್ರಣ ಹಿನ್ನೆಲೆಯಲ್ಲಿ ನಿಗದಿತ ಸಾಮಾಜಿಕ ಅಂತರ ಮತ್ತು ನೈರ್ಮಲ್ಯ ಕಾಪಾಡಬೇಕು . ಕೇಂದ್ರ ಮತ್ತು ರಾಜ್ಯ ಸರ್ಕಾರವು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ನರಸಿಂಹಮೂರ್ತಿ ಪ್ಯಾಟಿ
ಇದನ್ನೂ ಓದಿ: ನವೆಂಬರ್‌ನ ಅಕಾಲಿಕ ಮಳೆಗೆ ಅನ್ನದಾತ ಹೈರಾಣ: ಸಂಕ್ರಾಂತಿ ಮುಗಿದ್ರೂ ಕಾಣದ ಮಾವಿನ ಹೂವು, ಸಿಡಿರೋಗಕ್ಕೆ ಕಡಲೆ ಬೆಳೆ ಬಲಿ
ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ದಾಖಲೆಯ ಬಿತ್ತನೆ ಬೀಜ ಮಾರಾಟ; ಕೃಷಿ ಮೇಳ ನಡೆಸದೆಯೂ ಸಾಧನೆ