ನನ್ನನ್ನು ಮೋಹನ್ ದಾಸ್ ಪೈ ಭೇಟಿಯಾಗಿದ್ದರು: ಬೆಂಗಳೂರಿನ ಅವ್ಯವಸ್ಥೆ ಬಗ್ಗೆ ಗಮನ ಸೆಳೆದ ಟ್ವೀಟ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ
ಬೆಂಗಳೂರಿನಲ್ಲಿ ಮಳೆಯಿಂದ ಆಗಿರುವ ಅವಾಂತರ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿ ಉದ್ಯಮಿ ಮೋಹನ್ ದಾಸ್ ಪೈ ಟ್ವೀಟ್ ಮಾಡಿದ್ದರು.
ಧಾರವಾಡ: ಉದ್ಯಮಿ ಮೋಹನ್ ದಾಸ್ ಪೈ ಅವರು ನನ್ನ ಭೇಟಿಯಾಗಿ ಬೆಂಗಳೂರಿನ ರಸ್ತೆ ಪರಿಸ್ಥಿತಿ ಕುರಿತು ಚರ್ಚಿಸಿದ್ದರು ಎಂದು ಕೇಂದ್ರ ಕಲ್ಲಿದ್ದಲು ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ಪ್ರಲ್ಹಾದ್ ಜೋಶಿ ಹೇಳಿದರು. ಬೆಂಗಳೂರಿನಲ್ಲಿ ಮಳೆಯಿಂದ ಆಗಿರುವ ಅವಾಂತರ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿ ಉದ್ಯಮಿ ಮೋಹನ್ ದಾಸ್ ಪೈ ಟ್ವೀಟ್ ಮಾಡಿರುವ ಕುರಿತು ಪ್ರಸ್ತಾಪಿಸಿದ ಅವರು, ಬೆಂಗಳೂರಿನ ಹಲವೆಡೆ ರಸ್ತೆಗಳು ಹಾಳಾಗಿರುವ ಕುರಿತು ಮೋಹನ್ದಾಸ್ ಪೈ ನನ್ನೊಂದಿಗೆ ಮಾತನಾಡಿದ್ದರು. ಕೂಡಲೇ ರಸ್ತೆಗಳನ್ನು ಸರಿಪಡಿಸುವಂತೆ ಮನವಿ ಮಾಡಿದ್ದರು. ಈ ವಿಚಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಮನಕ್ಕೆ ತಂದಿದ್ದೇವೆ ಎಂದು ಜೋಶಿ ತಿಳಿಸಿದರು.
ಬೆಂಗಳೂರು ಸೇರಿದಂತೆ ಮಳೆಯಿಂದ ಹಾನಿ ಅನುಭವಿಸಿರುವ ಎಲ್ಲ ಕಡೆಯೂ ರಸ್ತೆಗಳನ್ನು ಸರಿಪಡಿಸುವ ಕೆಲಸ ಶೀಘ್ರ ಆರಂಭಿಸುತ್ತೇವೆ. ನಾಳೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ, ಹಲವು ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಮೋದಿ ಆಗಮನವು ಕಾರ್ಯಕರ್ತರ ಉತ್ಸಾಹವನ್ನು ಹೆಚ್ಚಿಸಿದೆ ಎಂದು ನುಡಿದರು.
ಪ್ರಧಾನಿ ಮೋದಿ ಅವರು ಕೆಲ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲು ಕರ್ನಾಟಕಕ್ಕೆ ಬರುತ್ತಿದ್ದಾರೆ. ಮಂಗಳೂರಿನ ಸಾರ್ವಜನಿಕ ಸಮಾವೇಶದಲ್ಲಿ ಅವರ ಭಾಷಣವೂ ಇದೆ. ಮೋದಿ ಆಗಮನದಿಂದ ಕರಾವಳಿ ಪ್ರದೇಶದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಲಿದೆ ಎಂದು ಜೋಶಿ ಹೇಳಿದರು.
ಧಾರವಾಡದ ಮಹಾಂತನಗರದ ಮೋರೆ ಫ್ಲಾಟ್ನಲ್ಲಿ ಹೊಲಿಗೆ ಮತ್ತು ಫ್ಯಾಷನ್ ಡಿಸೈನಿಂಗ್ ತರಬೇತಿ ನೀಡುವ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಅವರು ಇದೇ ಸಂದರ್ಭದಲ್ಲಿ ಉದ್ಘಾಟಿಸಿದರು. ಕೇಂದ್ರದ ಧನ ಸಹಾಯದಿಂದ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ. ಈ ಸಂದರ್ಭದಲ್ಲಿ ಶಾಸಕ ಅಮೃತ ದೇಸಾಯಿ, ಹುಬ್ಬಳ್ಳಿ ಧಾರವಾಡ ಮಹಾನಗರದ ಮೇಯರ್ ಈರೇಶ್ ಅಂಚಟಗೇರಿ ಉಪಸ್ಥಿತರಿದ್ದರು.