
ಬೆಂಗಳೂರು, ಜನವರಿ 14: ‘ನೀವೇನು ಚಿಂತೆ ಮಾಡಬೇಡಿ. ನಿಮ್ಮನ್ನು ಶೀಘ್ರವೇ ದೆಹಲಿಗೆ ಕರೆಸಿಕೊಳ್ಳುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ (DK Shivakumar) ಮೈಸೂರಿನಲ್ಲಿ ಹೈಕಮಾಂಡ್ ನಾಯಕ, ಸಂಸದ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ ಎನ್ನಲಾಗಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ, ಡಿಕೆ ಶಿವಕುಮಾರ್ ಮಾರ್ಮಿಕ ಸಂದೇಶ ಒಂದನ್ನು ಹಂಚಿಕೊಂಡಿದ್ದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಇದರೊಂದಿಗೆ, ಸಿಎಂ ಆಗುವ ಸುಳಿವು ಕೊಟ್ಟರಾ ಡಿಸಿಎಂ ಎಂಬ ಪ್ರಶ್ನೆಯೂ ಮೂಡಿದೆ.
ಬುಧವಾರ ಬೆಳಗ್ಗೆಯೇ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸಂದೇಶ ಪ್ರಕಟಿಸಿರುವ ಡಿಕೆ ಶಿವಕುಮಾರ್, ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ. pic.twitter.com/h6lcMm5WGY
— DK Shivakumar (@DKShivakumar) January 14, 2026
ಖಾಸಗಿ ಕಾರ್ಯನಿಮಿತ್ತ ಊಟಿಗೆ ತೆರಳಲು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮಂಗಳವಾರ ಬಂದಿದ್ದ ರಾಹುಲ್ ಗಾಂಧಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಭೇಟಿಯಾಗಿದ್ದರು. ಆ ಸಂದರ್ಭದಲ್ಲಿ, ಇಬ್ಬರು ನಾಯಕರೂ ರಾಹುಲ್ ಗಾಂಧಿ ಜೊತೆ ಪ್ರತ್ಯೇಕವಾಗಿ ಸ್ವಲ್ಪ ಹೊತ್ತು ಮಾತುಕತೆ ನಡೆಸಿದ್ದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿಯವರನ್ನು ಸೈಡ್ಗೆ ಕರೆದುಕೊಂಡು ಹೋಗಿದ್ದ ಡಿಕೆ ಶಿವಕುಮಾರ್ ತುಸು ಹೊತ್ತು ಗಂಭೀರವಾಗಿ ಚರ್ಚಿಸುತ್ತಿರುವುದು ಕಂಡುಬಂದಿತ್ತು. ಆಗ, ನೀವು ತಲೆ ಕೆಡಿಸಿಕೊಳ್ಳಬೇಡಿ. ಶೀಘ್ರವೇ ನಿಮ್ಮನ್ನು ದೆಹಲಿಗೆ ಕರೆಯುತ್ತೇವೆ ಎಂದು ರಾಹುಲ್ ಗಾಂಧಿ ಭರವಸೆ ನೀಡಿದ್ದರು ಎಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿದ್ದವು. ಅದಾದ ನಂತರ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಜತೆಗೂ ಮಾತುಕತೆ ನಡೆಸಿದ್ದರು. ಈ ಬೆಳವಣಿಗೆ ಕಾಂಗ್ರೆಸ್ ಆಂತರಿಕ ವಲಯದಲ್ಲಿ ಮಾತ್ರವಲ್ಲದೆ, ರಾಜ್ಯ ರಾಜಕಾರಣದಲ್ಲೂ ಸಂಚಲನ ಮೂಡಿಸಿತ್ತು
ಇದೀಗ, ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಡಿಕೆ ಶಿವಕುಮಾರ್ ಮಾರ್ಮಿಕ ಸಂದೇಶ ಹಂಚಿಕೊಂಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ರಾಜ್ಯ ಕಾಂಗ್ರೆಸ್ಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಈ ತಿಂಗಳ ಕೊನೆಯಲ್ಲಿ ದೆಹಲಿಯಲ್ಲಿ ಮಹತ್ವದ ಸಭೆ ಆಯೋಜನೆ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ಬಗ್ಗೆ ಮಹತ್ವದ ಮಾತುಕತೆ ನಡೆಯುವ ನಿರೀಕ್ಷೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರ ಜೊತೆ ಸಭೆ ನಡೆಸುವ ಸಾಧ್ಯತೆ ಇದೆ.
ಇದನ್ನೂ ಓದಿ: ಕಾಂಗ್ರೆಸ್ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಗಾಂಧಿ ಮಹತ್ವದ ಸಂದೇಶ
ಇದರ ಪೂರ್ವಭಾವಿಯಾಗಿ ಹೈಕಮಾಂಡ್ ನಾಯಕರು ಜನವರಿ 16ರಂದು ರಾಜ್ಯವಾರು ಪ್ರತ್ಯೇಕ ಸಭೆ ನಡೆಸಲಿದ್ದಾರೆ ಎಂದೂ ಮೂಲಗಳು ತಿಳಿಸಿವೆ.