ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಹೊಸದಾಗಿ 65 ಪ್ರಾಥಮಿಕ ಆರೋಗ್ಯ ಕೇಂದ್ರ: ದಿನೇಶ್ ಗುಂಡೂರಾವ್

ಕಲ್ಯಾಣ ಕರ್ನಾಟಕದಲ್ಲಿ ಸುಮಾರು 65 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆ ಇದ್ದು, ಈ ಅಸಮತೋಲನ ಸರಿಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸಹಯೋಗದೊಂದಿಗೆ 65 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಪ್ರಸಕ್ತ ವರ್ಷದಿಂದಲೇ ಪ್ರಾರಂಭಿಸಲು ಯೋಜಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಹೊಸದಾಗಿ 65 ಪ್ರಾಥಮಿಕ ಆರೋಗ್ಯ ಕೇಂದ್ರ: ದಿನೇಶ್ ಗುಂಡೂರಾವ್
ಪ್ರಾತಿನಿಧಿಕ ಚಿತ್ರ
Edited By:

Updated on: Nov 03, 2023 | 3:49 PM

ಬೆಂಗಳೂರು, ನವೆಂಬರ್ 3: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 65 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ರಾಜ್ಯ ಸರ್ಕಾರ ಶುಕ್ರವಾರ ತಿಳಿಸಿದೆ. ಕಲ್ಯಾಣ ಕರ್ನಾಟಕದಲ್ಲಿ (Kalyana Karnataka) ಸುಮಾರು 65 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆಯಿದೆ ಮತ್ತು ಈ ಕೊರತೆಯನ್ನು ನೀಗಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ ಸಚಿವರು, ಕಲ್ಯಾಣ ಕರ್ನಾಟಕದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ, ಸಮುದಾಯ ಆರೋಗ್ಯ ಕೇಂದ್ರಗಳು, ಜಿಲ್ಲಾ ಆಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳ ಕಟ್ಟಡ ದುರಸ್ತಿ ಹಾಗೂ ಅವುಗಳಿಗೆ ಮೂಲಸೌಕರ್ಯ ಕಲ್ಪಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ. ಜತೆಗೆ, ಕಲ್ಯಾಣ ಕರ್ನಾಟಕದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ ವಿಚಾರವನ್ನು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿಯೂ ಪ್ರಕಟಿಸಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ ಸುಮಾರು 65 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆ ಇದ್ದು, ಈ ಅಸಮತೋಲನ ಸರಿಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸಹಯೋಗದೊಂದಿಗೆ 65 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಪ್ರಸಕ್ತ ವರ್ಷದಿಂದಲೇ ಪ್ರಾರಂಭಿಸಲು ಯೋಜಿಸಲಾಗಿದೆ.‌ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳ ಕಟ್ಟಡಗಳನ್ನು ದುರಸ್ತಿ ಮಾಡುವುದು ನಮ್ಮ ಆದ್ಯತೆಗಳಲ್ಲಿ ಪ್ರಮುಖವಾಗಿದೆ ಎಂದು ಗುಂಡೂರಾವ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್​​ ಸಂದೇಶದಲ್ಲಿ ತಿಳಿಸಿದ್ದಾರೆ.


ಎಲ್ಲ ಸಮುದಾಯ ಆರೋಗ್ಯ ಕೇಂದ್ರಗಳು, ಜಿಲ್ಲಾ ಆಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳ ಕಟ್ಟಡ ದುರಸ್ತಿ ಮತ್ತು ಅವುಗಳಿಗೆ ಸೂಕ್ತ ಮೂಲಸೌಕರ್ಯ ಹಾಗೂ ವ್ಯವಸ್ಥೆ ಒದಗಿಸುವ ಮೂಲಕ ಸುಸಜ್ಜಿತಗೊಳಿಸಲು ಯೋಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಂಗಾಂಗ ದಾನಕ್ಕೆ ಕರ್ನಾಟಕದಲ್ಲೂ ತಮಿಳುನಾಡು ಮಾದರಿ ನೀತಿಗೆ ಸರ್ಕಾರ ಚಿಂತನೆ: ಏನಿದರ ವಿಶೇಷ?

ಹೊಸದಾಗಿ ರಾಜ್ಯದಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭಿಸುವ ಯೋಚನೆ ಇಲ್ಲ. ಈಗ ಇರುವ ಕ್ಲಿನಿಕ್​ಗಳಿಗೆ ಪ್ರಯೋಗಾಲಯ ತಜ್ಞರು, ಹೆಚ್ಚುವರಿ ತಪಾಸಣೆಗಳಿಗೆ ಅವಕಾಶ ಕಲ್ಪಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಮಧ್ಯೆ, ಅಂಗಾಂಗ ದಾನದ ಕುರಿತು ರಾಜ್ಯದಲ್ಲಿ ಇನ್ನಷ್ಟು ಜಾಗೃತಿ ಮೂಡಿಸಲು ಸರ್ಕಾರವು ಅಂಗಾಂಗ ದಾನಕ್ಕೆ ಸಂಬಂಧಿಸಿ ತಮಿಳುನಾಡು ರಾಜ್ಯದ ಮಾದರಿಯಲ್ಲಿ ನೀತಿಯನ್ನು ರೂಪಿಸಲು ಚಿಂತನೆ ನಡೆಸಿದೆ ಎಂದೂ ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ