ಉದ್ಯೋಗ ಅರಸಿಕೊಂಡು ಬೇರೊಂದು ಊರುಗಳಿಗೆ ಹೋದವರು ಹಬ್ಬದ ಸಂದರ್ಭದಲ್ಲಿ ಮನೆಗೆ ಮರಳುವುದು ಸಾಮಾನ್ಯ. ಇಂತಹ ಸಂದರ್ಭದಲ್ಲಿ ಸಾರಿಗೆ ಇಲಾಖೆ ಮತ್ತು ರೈಲ್ವೇ ಇಲಾಖೆ ವಿಶೇಷ ಬಸ್ ಹಾಗೂ ರೈಲುಗಳನ್ನು ಓಡಿಸುತ್ತವೆ. ರೈಲ್ವೇ ಇಲಾಖೆಯು ದೀಪಾವಳಿ ಸಂದರ್ಭದಲ್ಲಿ ಮೂರು ವಿಶೇಷ ರೈಲುಗಳನ್ನು ಓಡಿಸಲು ಮುಂದಾಗಿದ್ದು, ಇದರ ಬೆನ್ನಲ್ಲೆ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ 1500 ಹೆಚ್ಚುವರಿ ಬಸ್ಗಳನ್ನು ರಸ್ತೆಗೆ ಇಳಿಸಲಿದೆ. ನರಕ ಚತುರ್ದಶಿ (ಅ 24) ಮತ್ತು ಬಲಿಪಾಡ್ಯಮಿ (ಅ 26) ಹಬ್ಬದ ಪ್ರಯುಕ್ತ ಕರಾರಸಾ ನಿಗಮವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 21ರಿಂದ ಅಕ್ಟೋಬರ್ 23ರ ವರೆಗೆ ಬೆಂಗಳೂರಿನಿಂದ ವಿವಿಧ ಕಡೆಗಳಿಗೆ ಒಟ್ಟು 1500 ಹೆಚ್ಚುವರಿ ಸಾರಿಗೆ ವ್ಯವಸ್ಥೆ ಮಾಡಿದೆ. ಅಂತಾರಾಜ್ಯದಿಂದ ಬೆಂಗಳೂರಿಗೆ ಆಗಮಿಸುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅ.26ರಿಂದ 30ರ ವರೆಗೆ ಹೆಚ್ಚುವರಿ ಬಸ್ಗಳು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಬೆಂಗಳೂರಿನಿಂದ ಈ ಊರುಗಳಿಗೆ ಹೆಚ್ಚುವರಿ ಬಸ್ ವ್ಯವಸ್ಥೆ
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ಗಳು ಸಂಚರಿಸಲಿವೆ. ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ನಡೆಸಲಿದೆ.
ಶಾಂತಿನಗರದಲ್ಲಿನ ಬಿಎಂಟಿಸಿ ಬಸ್ ನಿಲ್ದಾಣದಿಂದ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕ್ಯಾಲಿಕಟ್ಗೆ ಹೆಚ್ಚುವರಿ ಬಸ್ಗಳು ಓಡಾಡಲಿವೆ. ಬೆಂಗಳೂರು ನಗರದ ವಿಜಯನಗರ, ಜಯನಗರ 4ನೇ ಹಂತ, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಲ್ಲಿ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
ಮುಂಗಡ ಆಸನ ಕಾಯ್ದಿರಿಸುವ ವ್ಯವಸ್ಥೆ ಮತ್ತು ಇ-ಟಿಕೆಟ್ ಬುಕ್ಕಿಂಗ್
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟ್ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ ಅಥವಾ ಪಿಕ್ಅಪ್ ಪಾಯಿಂಟ್ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ. ಇ-ಟಿಕೆಟ್ ಬುಕ್ಕಿಂಗ್ಗಾಗಿ www.ksrtc.karnataka.gov.in ವೆಬ್ಸೈಟ್ಗೆ ಭೇಟಿ ನೀಡಿ. ಪ್ರಯಾಣಿಕರು ಕರ್ನಾಟಕ ಹಾಗೂ ಅಂತಾರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕ್ಕಿಂಗ್ ಕೌಂಟರ್ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
ಪ್ರಯಾಣಿಕರಿಗೆ ರಿಯಾಯಿತಿ ಸೌಲಭ್ಯ
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದ್ದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ 10 ರಷ್ಟು ರಿಯಾಯಿತಿ ನೀಡಲಾಗುತ್ತದೆ. ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್ಗಳಿದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.
ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‍ಸೈಟ್‍ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.
ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು ಅಥವಾ ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು. ಕೋವಿಡ್-19 ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಸಾರ್ವಜನಿಕ ಪ್ರಯಾಣಿಕರು ಪಾಲನೆ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:49 pm, Mon, 17 October 22