ನನಗೆ ಬೇರೆ ಮಾರ್ಗವಿಲ್ಲ, ಸಿದ್ದರಾಮಯ್ಯ ಬೆನ್ನಿಗೆ ನಿಂತು ಬೆಂಬಲಿಸುತ್ತೇನೆ: ಡಿಕೆ ಶಿವಕುಮಾರ್
‘ಐದು ವರ್ಷ ನಾನೇ ಸಿಎಂ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ನಂದಿಗಿರಿಧಾಮದಲ್ಲಿ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ತಮಗೆ ಬೇರೆ ಆಯ್ಕೆಗಳಿಲ್ಲ. ಸಿದ್ದರಾಮಯ್ಯ ಅವರನ್ನು ಬೆಂಬಲಿಸಬೇಕು ಎಂದು ಹೇಳಿದ್ದಾರೆ. ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ ಜೋರಾಗಿರುವ ಸಂದರ್ಭದಲ್ಲೇ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೀಡಿರುವ ಈ ಹೇಳಿಕೆಗಳು ಕುತೂಹಲ ಮೂಡಿಸಿವೆ.

ಚಿಕ್ಕಬಳ್ಳಾಪುರ, ಜುಲೈ 2: ‘ನನಗೆ ಬೇರೆ ಮಾರ್ಗವಿಲ್ಲ, ನಾನು ಬೆಂಬಲ ನೀಡಲೇಬೇಕು’ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಬುಧವಾರ ಹೇಳಿದರು. ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಆಗಮಿಸಿರುವ ಅವರು, ‘ಐದು ವರ್ಷ ನಾನೇ ಮುಖ್ಯಮಂತ್ರಿ’ ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಪ್ರತಿಕ್ರಿಯಿಸಿದರು. ನಾನು ಸಿದ್ದರಾಮಯ್ಯ ಬೆನ್ನಿಗೆ ನಿಂತು ಸಹಕಾರ ನೀಡುತ್ತೇನೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾನು ಬಂದ್ಧ ಎಂದು ಡಿಕೆ ಶಿವಕುಮಾರ್ ಹೇಳಿದರು. ಒಂದೆಡೆ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಬಂದು ಕಾಂಗ್ರೆಸ್ (Congress) ಶಾಸಕರ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ನಾಯಕತ್ವ ಬದಲಾವಣೆ ಕುರಿತ ಹೇಳಿಕೆಗಳು ಮುನ್ನೆಲೆಗೆ ಬಂದಿವೆ. ಇದೇ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಈ ಹೇಳಿಕೆ ನೀಡಿದ್ದು, ಅಚ್ಚರಿ ಮೂಡಿಸಿದೆ.
ಲಕ್ಷಾಂತರ ಕಾರ್ಯಕರ್ತರು ಪಕ್ಷವನ್ನು ಬೆಂಬಲಿಸಿದ್ದಾರೆ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ಸಿದ್ದರಾಮಯ್ಯನವರು ಸಿಎಂ ಆಗಿದ್ದಾರೆ, ಅಪಸ್ವರ ತೆಗೆಯುವುದು ಬೇಡ ಎಂದು ಬೆಂಬಲಿಗರಿಗೆ ಡಿಕೆ ಶಿವಕುಮಾರ್ ಕಿವಿಮಾತು ಹೇಳಿದ್ದಾರೆ. ಪಕ್ಷ ಅಧಿಕಾರಕ್ಕೆ ಬರಲು ನನ್ನಂತಹ ಅನೇಕ ಕಾರ್ಯಕರ್ತರು ಕಷ್ಟಪಟ್ಟಿದ್ದಾರೆ. ಲಕ್ಷಾಂತರ ಕಾರ್ಯಕರ್ತರು ಶ್ರಮಿಸಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರಲು ಕಷ್ಟ ಪಟ್ಟವರ ಬಗ್ಗೆ ಯೋಚಿಸೋಣ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸಿದ್ದರಾಮಯ್ಯ ಹೇಳಿದ್ದೇನು?
ನಂದಿ ಗಿರಿಧಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, 5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದಿದ್ದಾರೆ. ಐದು ವರ್ಷ ಸಿಎಂ ಆಗಿರಲ್ಲ ಎಂಬ ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಐದು ವರ್ಷ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ. ನಮ್ಮ ಸರ್ಕಾರ ಬಂಡೆ ರೀತಿ 5 ವರ್ಷ ಭದ್ರವಾಗಿರಲಿದೆ. ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: 5 ವರ್ಷಗಳ ಕಾಲ ನಾನೇ ಸಿಎಂ: ಇರಲ್ಲ ಅನ್ನೋಕೆ ಅಶೋಕ್ ಏನು ಹೈಕಮಾಂಡಾ? ಸಿಎಂ
ಸಿಎಂ, ಡಿಸಿಎಂ ಮಧ್ಯೆ ಬಿರುಕು?
ಚಿಕ್ಕಬಳ್ಳಾಪುರದ ನಂದಿಗಿರಿಧಾಮಕ್ಕೆ ಆಗಮಿಸುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿ ಗ್ರಾಮದಲ್ಲಿರುವ ಶ್ರೀ ಭೋಗನಂದೀಶ್ವರ ದೇವಸ್ಥಾನಕ್ಕೆ ಆಗಮಿಸಿದರು. ಅವರ ಜತೆ ಸಚಿರೂ ಬಂದಿದ್ದರು. ಆದರೆ, ದೇವಸ್ಥಾನ ಹಾಗೂ ನಂತರ ನಡೆದ ಫೋಟೊಶೂಟ್ಗೆ ಡಿಸಿಎಂ ಡಿಕೆ ಶಿವಕುಮಾರ್ ಬರಲೇ ಇಲ್ಲ. ಅವರು ನೇರವಾಗಿ ನಂದಿಗಿರಿಧಾಮಕ್ಕೆ ಬಂದರು. ಇದು ಕುತೂಹಲ ಮೂಡಿಸಿದೆ.
ಸೋಮವಾರವಷ್ಟೇ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಡಿಕೆ ಶಿವಕುಮಾರ್ ಕೈ ಎತ್ತಿಹಿಡಿದಿದ್ದ ಸಿದ್ದರಾಮಯ್ಯ, ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ ಎಂದಿದ್ದರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:04 pm, Wed, 2 July 25