ಆದಾಯ ಮೀರಿ‌ ಆಸ್ತಿ ಗಳಿಕೆ ಪ್ರಕರಣ: ಡಿಕೆ ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್​ಗೆ ಮತ್ತೆ ಸಂಕಷ್ಟ ತಂದೊಡ್ಡುವ ಸಾಧ್ಯತೆಗಳು ಗೋಚರಿಸಿವೆ. ಪ್ರಕರಣ ಸಂಬಂಧ ಇದೀಗ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಇದರೊಂದಿಗೆ, ಡಿಕೆ ಶಿವಕುಮಾರ್ ವಿರುದ್ಧ ಕಾನೂನು ಕುಣಿಕೆ ಮತ್ತೆ ಬಿಗಿಯಾಗಲಿದೆಯೇ ಎಂಬ ಅನುಮಾನ ಉಂಟಾಗಿದೆ.

ಆದಾಯ ಮೀರಿ‌ ಆಸ್ತಿ ಗಳಿಕೆ ಪ್ರಕರಣ: ಡಿಕೆ ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
ಡಿಕೆ ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
Edited By:

Updated on: Oct 21, 2024 | 10:48 AM

ನವದೆಹಲಿ, ಅಕ್ಟೋಬರ್ 21: ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಇದೀಗ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಇದೇ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಯತ್ನಾಳ್ ಬೆನ್ನಲ್ಲೆ ಸಿಬಿಐ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ ಕರ್ನಾಟಕ ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೇಂದ್ರ ತನಿಖಾ ಸಂಸ್ಥೆ ಸುಪ್ರೀಂ ಕೋರ್ಟ್​​​ಗೆ ಅರ್ಜಿ ಸಲ್ಲಿಸಿದೆ. ಈ ಹಿಂದೆ ಸರ್ಕಾರದ ನಿರ್ಧಾರ ಪ್ರಶ್ನಿಸಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್​ ಸಿಬಿಐ ಅಭಿಪ್ರಾಯ ಕೇಳಿತ್ತು. ವಿಚಾರಣೆಯಲ್ಲಿ ಭಾಗಿಯಾಗುವ ಬಗ್ಗೆ ಅಭಿಪ್ರಾಯ ಕೇಳಿತ್ತು. ಹೀಗಾಗಿ ಸಿಬಿಐಯಿಂದಲೂ ಈಗ ಅರ್ಜಿ ಸಲ್ಲಿಕೆಯಾಗಿದೆ.

ಪ್ರಕರಣದ ಹಿನ್ನೆಲೆ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು. ಅದರಂತೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿತ್ತು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಸಿಬಿಐ ತನಿಖೆ ಆದೇಶ ವಾಪಸ್ ಪಡೆಯುವ ನಿರ್ಧಾರ ಕೈಗೊಳ್ಳಲಾಯಿತು. ಆ ಬಗ್ಗೆ ಸಚಿವ ಸಂಪುಟ ನಿರ್ಣಯ ಕೈಗೊಂಡಿತು.

ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದ ಸಿಬಿಐ

ಕರ್ನಾಟಕ ಕಾಂಗ್ರೆಸ್​ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಈ ಬಗ್ಗೆ ಸುಪ್ರೀಂ ಕೋರ್ಟ್ ನಿರ್ಧರಿಸಲಿ. ಸುಪ್ರೀಂ ಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಅರ್ಜಿ ವಜಾಗೊಳಿಸಿತ್ತು.

ಏತನ್ಮಧ್ಯೆ, ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ ಹಿಂಪಡೆಯುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಆಗಸ್ಟ್ 29 ರಂದು ಹೈಕೋರ್ಟ್ ತಿರಸ್ಕರಿಸಿತ್ತು. ಅಲ್ಲದೆ, ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ಪ್ರಕರಣವನ್ನು ಸುಪ್ರೀಂಕೋರ್ಟ್‌ ತೀರ್ಮಾನಿಸಲಿ ಎಂದು ಅಭಿಪ್ರಾಯಪಟ್ಟಿತ್ತು.

ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದ ಯತ್ನಾಳ್

ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಬಸನಗೌಡ ಪಾಟೀಲ್​ ಯತ್ನಾಳ್ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಸರ್ವೋಚ್ಚ ನ್ಯಾಯಾಲಯ, ಕಳೆದ ತಿಂಗಳು (ಸೆಪ್ಟೆಂಬರ್​​) ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿತ್ತು.

ಇದನ್ನೂ ಓದಿ: ಡಿಕೆ ಶಿವಕುಮಾರ್​ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕೇಸ್:​ ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್​

ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್​, ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತಗೆ ನೋಟಿಸ್​ ನೀಡಿ ಸೆಪ್ಟೆಂಬರ್ 17ರಂದು ಆದೇಶ ಹೊರಡಿಸಿತ್ತು. ಪ್ರತಿವಾದಿಗಳಿಗೆ ನೋಟಿಸ್​ ನೀಡಿದ್ದರ ಜತೆಗೆ ಸಿಬಿಐ ಅಭಿಪ್ರಾಯವನ್ನೂ ಕೋರಿತ್ತು. ನಂತರ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us