ಜಾತಿ ಜನಗಣತಿ ವರದಿ ಬಿಡುಗಡೆಗೆ ಡಿಕೆ ಶಿವಕುಮಾರ್ ವಿರೋಧ
ಜಾತಿ ಜನಗಣತಿ ವರದಿ ಬಿಡುಗಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುದಿಗಾಲಿನಲ್ಲಿ ನಿಂತಿದ್ದಾರೆ. ಇತ್ತ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ವರದಿ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂತರಾಜ್ ಆಯೋಗದ ವರದಿ ತಿರಸ್ಕರಿಸುವ ಒಕ್ಕಲಿಗರ ಸಂಘದ ಮನವಿ ಪತ್ರಕ್ಕೆ ಡಿಕೆ ಶಿವಕುಮಾರ್ ಸಹಿ ಹಾಕಿದ್ದಾರೆ.
ಬೆಂಗಳೂರು, ನ.21: ಜಾತಿ ಜನಗಣತಿ ವರದಿ (Caste Census Report) ಬಿಡುಗಡೆಗೆ ಸ್ವತಃ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಅವರಿಂದಲೇ ವಿರೋಧ ವ್ಯಕ್ತವಾಗಿದ್ದು, ವರದಿ ಬಿಡುಗಡೆಗೆ ತುದಿಗಾಲಿನಲ್ಲಿ ನಿಂತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ನುಂಗಲಾರದ ತುತ್ತಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ಹೋದಲ್ಲಿ ಬಂದಲ್ಲಿ ಜಾತಿಜನಗಣತಿ ವರದಿ ಬಿಡುಗಡೆ ಮಾಡುವುದಾಗಿ ಹೇಳುತ್ತಿದ್ದಾರೆ. ಇದಕ್ಕೆ ಲಿಂಗಾಯತ ಸಮುದಾಯ ಮಾತ್ರವಲ್ಲದೆ, ಒಕ್ಕಲಿಗ ಸಮುದಾಯವೂ ವಿರೋಧ ವ್ಯಕ್ತಪಡಿಸುತ್ತಿದೆ. ಹಿಂದುಳಿದ ವರ್ಗಗಳ ಆಯೋಗಕ್ಕೆ ಸಲ್ಲಿಸಿರುವ ವರದಿ ತಿರಸ್ಕರಿಸುವ ಒಕ್ಕಲಿಗರ ಸಂಘದ ಮನವಿ ಪತ್ರಕ್ಕೆ ಡಿ.ಕೆ.ಶಿವಕುಮಾರ್ ಕೂಡ ಸಹಿ ಹಾಕಿದ್ದಾರೆ.
ಇದನ್ನೂ ಓದಿ: ಮನೆಯಲ್ಲೇ ಕುಳಿತು ಜಾತಿ ಗಣತಿ ವರದಿ ಸಿದ್ಧಪಡಿಸಿದ್ದಾರೆ: ತಮ್ಮದೇ ಸರ್ಕಾರದ ವಿರುದ್ಧ ಶಾಮನೂರು ಶಿವಶಂಕರಪ್ಪ ಕಿಡಿ
ಗೃಹಸಚಿವ ಡಾ.ಜಿ.ಪರಮೇಶ್ವರ, ಸಚಿವರಾದ ಸತೀಶ್ ಜಾರಕಿಹೊಳಿ, ಶಿವರಾಜ್ ತಂಗಡಗಿ ಸೇರಿದಂತೆ ಅನೇಕರು ವರದಿ ಜಾರಿಗೆ ಸಿಎಂ ಸಿದ್ದರಾಮಯ್ಯ ಮೇಲೆ ಒತ್ತಡ ಹೇರುತ್ತಲೇ ಇದ್ದಾರೆ. ಆದರೆ, ವರದಿ ಬಿಡುಗಡೆಗೆ ಲಿಂಗಾಯತ ಸಮುದಾಯ ವಿರೋಧ ವ್ಯಕ್ತಪಡಿಸಿದೆ.
ವರದಿ ಬಿಡುಗಡೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ, ನಮ್ಮ ಸಮುದಾಯದ ಮನೆ ಮನೆಗಳಿಗೆ ಹೋಗಿ ಸಮೀಕ್ಷೆ ನಡೆಸಿಲ್ಲ. ಮನೆಯಲ್ಲೇ ಕುಳಿತು ವರದಿ ಸಿದ್ಧಪಡಿಸಲಾಗಿದೆ ಎಂದು ಆಕ್ರೋಶ ಹೊರಹಾಕಿದ್ದರು. ಜನಗಣತಿಯ ಅಂಕಿ ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿವೆ. ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿ ಗಣತಿ ಮಾಡಬೇಕು ಎಂದು ಆಗ್ರಹಿಸಿದ್ದರು.
ಇದನ್ನೂ ಓದಿ: ಜಾತಿ ಗಣತಿ ವಿರೋಧ: ಶಾಮನೂರು ಶಿವಶಂಕರಪ್ಪ ನಿರ್ಧಾರಕ್ಕೆ ಸ್ವಾಮೀಜಿಗಳ ಸಹಮತ
ಇದರ ಬೆನ್ನಲ್ಲೇ ಒಕ್ಕಲಿಗ ಸಮುದಾಯದಿಂದಲೂ ವರದಿ ಬಿಡುಗಡೆಗೆ ವಿರೋಧ ವ್ಯಕ್ತವಾಗಿದೆ. ವರದಿ ಜಾರಿ ಮಾಡದಂತೆ ಒತ್ತಾಯಿಸಿ ಹಿಂದುಳಿದ ವರ್ಗಗಳ ಆಯೋಗಕ್ಕೆ ಒಕ್ಕಲಿಗ ಸಂಘವು ಪತ್ರ ಬರೆದಿದ್ದು, ಈ ಪತ್ರಕ್ಕೆ ಡಿಕೆ ಶಿವಕುಮಾರ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಹೆಚ್ಡಿ ಕುಮಾರಸ್ವಾಮಿ, ಎಸ್.ಎಂ.ಕೃಷ್ಣ, ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ಶಾಸಕ ಡಾ.ಅಶ್ವತ್ಥ್ ನಾರಾಯಣ ಸೇರಿದಂತೆ ಹಲವರು ಸಹಿ ಹಾಕಿದ್ದಾರೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ