DK Shivakumar: ಆದಾಯ ಮೀರಿ ಆಸ್ತಿ ಗಳಿಕೆ; ಚುನಾವಣೆ ಸಂದರ್ಭದಲ್ಲೇ ಡಿಕೆ ಶಿವಕುಮಾರ್ ಅರ್ಜಿ ವಜಾ
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ಗುರುವಾರ ವಜಾಗೊಳಿಸಿದೆ. ಸಿಬಿಐ ತನಿಖೆಗೆ ಸರ್ಕಾರ ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು ಎಂದು ಡಿಕೆ ಶಿವಕುಮಾರ್ ಹೈಕೋರ್ಟ್ಗೆ ಮನವಿ ಮಾಡಿದ್ದರು. ಇದು ತಿರಸ್ಕೃತಗೊಂಡಿರುವುದರಿಂದ ಚುನಾವಣೆ ಸಂದರ್ಭದಲ್ಲೇ ಅವರಿಗೆ ಸಂಕಷ್ಟ ಎದುರಾದಂತಾಗಿದೆ. ಡಿಕೆ ಶಿವಕುಮಾರ್ ಅರ್ಜಿ ಕುರಿತ ವಿಚಾರಣೆಯನ್ನು ಏಪ್ರಿಲ್ 17ರಂದು ಪೂರ್ಣಗೊಳಿಸಿದ್ದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು.
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು, ಇದನ್ನು ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷರು ಹೈಕೋರ್ಟ್ ಮೆಟ್ಟಿಲೇರಿದ್ದರು. ತನ್ನ ವಿರುದ್ಧದ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅದರಂತೆ ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್, ಅರ್ಜಿದಾರರ ಪರ ಹಾಗೂ ಸಿಬಿಐ ಪರ ವಕೀಲರ ವಾದ ಪ್ರತಿವಾದ ಆಲಿಸುತ್ತಾ ಹಲವು ಬಾರಿ ತಡೆಯಾಜ್ಞೆಯನ್ನು ವಿಸ್ತರಿಸಿತ್ತು.
ಇದನ್ನೂ ಓದಿ: ರಾಜ್ಯ ಚುನಾವಣಾ ಅಖಾಡದಲ್ಲಿ ಬಿಗ್ ಟ್ವಿಸ್ಟ್: ನಾಮಪತ್ರ ಸಲ್ಲಿಸಲು ಹೋಗುತ್ತಿದ್ದೇನೆ ಎಂದ ಡಿಕೆ ಸುರೇಶ್
ಸಿಬಿಐ ತನಿಖೆಗೆ ಅನುಮತಿ ನೀಡಿದ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಡಿಕೆ ಶಿವಕುಮಾರ್ ಅವರಿಗೆ ಆರಂಭದಲ್ಲಿ ಬಿಗ್ ರಿಲೀಫ್ ಸಿಕ್ಕಿತ್ತು. ಫೆಬ್ರುವರಿ 24ರವರೆಗೂ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿತ್ತು. ಬಳಿಕ ನಡೆದ ವಿಚಾರಣೆಗಳ ಸಮಯದಲ್ಲಿ ಕೋರ್ಟ್, ಮಾರ್ಚ್ 31ಕ್ಕೆ, ಏಪ್ರಿಲ್ 6ಕ್ಕೆ, ಏಪ್ರಿಲ್ 13ಕ್ಕೆ, ಏಪ್ರಿಲ್ 17ರ ವರೆಗೆ ಮಧ್ಯಂತರ ತಡೆ ವಿಸ್ತರಿಸಿತ್ತು.
ಸದ್ಯಕ್ಕಿಲ್ಲ ಡಿಕೆಶಿಗೆ ಬಂಧನ ಭೀತಿ
ಅರ್ಜಿ ವಜಾಗೊಂಡರೂ ಡಿಕೆ ಶಿವಕುಮಾರ್ ಅವರಿಗೆ ಸದ್ಯಕ್ಕೆ ಬಂಧನದ ಭೀತಿ ಇಲ್ಲ. ಸಿಬಿಐ ತನಿಖೆ ಪ್ರಶ್ನಿಸಿ ಮತ್ತೊಂದು ಅರ್ಜಿಯನ್ನು ಅವರು ಹೈಕೋರ್ಟ್ಗೆ ಸಲ್ಲಿಸಿದ್ದು, ಅದರ ವಿಚಾರಣೆಯನ್ನು ಮೇ ಅಂತ್ಯದವರೆಗೆ ಮುಂದೂಡಲಾಗಿದೆ. ಜತೆಗೆ, ಅಲ್ಲಿಯವರೆಗೆ ತನಿಖೆಗೆ ನೀಡಲಾಗಿರುವ ತಡೆಯಾಜ್ಞೆ ಮುಂದುವರಿಯಲಿದೆ ಎಂದು ಹೈಕೋರ್ಟ್ ಬುಧವಾರ ಹೇಳಿತ್ತು.
ಚುನಾವಣೆ ಸ್ಪರ್ಧಿಸಲೂ ಇಲ್ಲ ಅಡ್ಡಿ
ಸಿಬಿಐ ತನಿಖೆ ಪ್ರಶ್ನಿಸಿ ಸಲ್ಲಿಸಿರುವ ಮತ್ತೊಂದು ಅರ್ಜಿಯ ವಿಚಾರಣೆ ಮುಂದೂಡಿಕೆಯಾಗಿರುವುದು ಮತ್ತು ಅಲ್ಲಿಯವರೆಗೆ ಸಿಬಿಐ ತನಿಖೆಗೆ ನೀಡಲಾಗಿರುವ ತಡೆಯಾಜ್ಞೆ ಮುಂದುವರಿಯಲಿದೆ ಎಂದು ಹೈಕೋರ್ಟ್ ಹೇಳಿರುವ ಕಾರಣ ಚುನಾವಣೆಗೆ ಸ್ಪರ್ಧಿಸಲು ಡಿಕೆ ಶಿವಕುಮಾರ್ ಅವರಿಗೆ ಯಾವುದೇ ಸಮಸ್ಯೆ ಆಗದು.
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಹಿನ್ನೆಲೆ
ಡಿಕೆ ಶಿವಕುಮಾರ್ ಮತ್ತು ಅವರ ಕುಟುಂಬದ ಸದಸ್ಯರು 74.93 ಕೋಟಿ ರೂಪಾಯಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎಂಬ ಆರೋಪ ಸಂಬಂಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಅದರಂತೆ 2020ರ ಅಕ್ಟೋಬರ್ 5ರಂದು ದೆಹಲಿ, ಮುಂಬೈ ಸೇರಿದಂತೆ ಡಿಕೆ ಶಿವಕುಮಾರ್ ಅವರಿಗೆ ಸೇರಿದ 14 ಸ್ಥಳಗಳ ಮೇಲೆ ಸಿಬಿಐ ಏಕಕಾಲಕ್ಕೆ ದಾಳಿ ನಡೆಸಿತ್ತು. ಈ ವೇಳೆ ಕಂಪ್ಯೂಟರ್ ಹಾರ್ಡ್ಡಿಸ್ಕ್ ಹಾಗೂ 57 ಲಕ್ಷ ರೂ. ನಗದು ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಇದನ್ನೂ ಓದಿ: ಇನ್ಮುಂದೆ ಕೋರ್ಟ್ ತೀರ್ಪು ಕನ್ನಡದಲ್ಲೇ ಓದಿ: ಕನ್ನಡ ಭಾಷೆ ತೀರ್ಪುಗಳು ಇರುವ ವೆಬ್ ಸೈಟ್ ಆರಂಭಿಸಿದ ಹೈಕೋರ್ಟ್
ಇನ್ನೊಂದೆಡೆ, ಜಾರಿ ನಿರ್ದೇಶನಾಲಯವು (ಇಡಿ) ಡಿಕೆ ಶಿವಕುಮಾರ್ ವಿರುದ್ಧ ಆಸ್ತಿ ಗಳಿಕೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿತ್ತು. ಈ ಸಂಬಂಧ ಡಿ.ಕೆ. ಶಿವಕುಮಾರ್ ಹಲವು ಬಾರಿ ದೆಹಲಿಯ ಇಡಿ ಕಚೇರಿಯಲ್ಲಿ ವಿಚಾರಣೆ ಎದುರಿಸಿ ಜೈಲಿಗೆ ಹೋಗಿ ಜಾಮೀನು ಮೇಲೆ ಬಿಡುಗಡೆಯಾಗಿ ಹೊರಬಂದಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:22 pm, Thu, 20 April 23