ಬೆಂಗಳೂರು, (ಡಿಸೆಂಬರ್ 05): ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿರುವ ಬೆಂಗಳೂರಿನ ಕ್ಯಾಪ್ಟನ್ ಪ್ರಾಂಜಲ್ (captain pranjal ) ಅವರ ಕುಟುಂಬಕ್ಕೆ ಪರಿಹಾರ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬೇರೆ-ಬೇರೆ ರೀತಿಯಾದ ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ರಾಜ್ಯ ಸರ್ಕಾರ 50 ಲಕ್ಷ ರೂ ಪರಿಹಾರ ಧನ ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಇಂದು ಅವರ ಕುಟುಂಬಕ್ಕೆ ಪರಿಹಾರದ ಚೆಕ್ ಹಸ್ತಾಂತರಿಸಲಾಗುತ್ತದೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ(Siddaramaiah) ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಪ್ರಾಂಜಲ್ ಅವರ ಪಾರ್ಥಿವ ಶರೀರ ಬೆಂಗಳೂರಿಗೆ ಬಂದಾಗ ಅದಕ್ಕೆ ನಮನ ಸಲ್ಲಿಸಿದ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಪರಿಹಾರ ಧನ ಘೋಷಣೆ ಮಾಡಿದ್ದರು. ಸದ್ಯ ಆದೇಶ ಹೊರಡಿಸಲಾಗಿದ್ದು, ಇಂದು ಪರಿಹಾರದ ಚೆಕ್ ಹಸ್ತಾಂತರಿಸಲಾಗುತ್ತದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್(ಟ್ವಿಟ್ಟರ್)ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಜಮ್ಮು- ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು.
ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ ” ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ನವೆಂಬರ್ 22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಹೆಸರನ್ನು ಸಂದರ್ಶನವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮರೆತ ಹಾಗೆ ಮಾತನಾಡಿದ್ದರು. ಅಲ್ಲದೇ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಕುಟುಂಬಕ್ಕೆ ಪರಿಹಾರದ ಕಾಲಮಿತಿ ಕುರಿತು ಪತ್ರಕರ್ತರು ಕೇಳಿದಾಗ, ಪರಿಹಾರವನ್ನು ಯಾರು, ಯಾವಾಗ ಘೋಷಿಸಿದರು ಎಂದು ಸಿದ್ದರಾಮಯ್ಯ ಸುದ್ದಿಗಾರರನ್ನು ಕೇಳಿದ್ದರರು. ಇದಕ್ಕೆ ಬಿಜೆಪಿ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆಗಳು ವ್ಯಕ್ತವಾಗಿದ್ದವು. ಇದೀಗ ಎಲ್ಲಾ ಗೊಂದಲಗಳಿಗೆ ತೆರೆಬಿದ್ದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ