ಬೆಂಗಳೂರು: ಪ್ರಮುಖವಾಗಿ ಮೂರು ವಿಷಯಗಳನ್ನು ಮುಂದಿಟ್ಟುಕೊಂಡು ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯುವಂತೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ , ಸ್ಪೀಕರ್, ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ, ಸರಕಾರದ ಮೇಲಿನ ಭ್ರಷ್ಟಾಚಾರ ಆರೋಪ, ಆಡಳಿತದಲ್ಲಿ ಅನ್ಯರ ಹಸ್ತಕ್ಷೇಪ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ತಕ್ಷಣವೇ ವಿಶೇಷ ಅಧಿವೇಶನ (Karnataka Legislative Session) ಕರೆಯುವಂತೆ ಮೂವರಿಗೂ ಪತ್ರದ ಮೂಲಕ ಜೆಡಿಎಸ್ ನಾಯಕ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ರಾಜಕೀಯ ಶಕ್ತಿ ಕೇಂದ್ರವಾಗಿ ಮಾರ್ಪಟ್ಟ ಸುತ್ತೂರು ಶಾಖಾ ಮಠ:
ಮೈಸೂರು: ಈ ಮಧ್ಯೆ, ಕೊವಿಡ್ ಕಾಟ ಕಡಿಮೆಯಾಗುತ್ತಿದ್ದಂತೆ ರಾಜ್ಯದಲ್ಲಿ ಕಳೆದ ಒಂದು ವಾರದಿಂದ ರಾಜಕೀಯ ಚಟುವಟಿಕೆಗಳು ತೀವ್ರವಾಗಿವೆ. ಸದ್ಯಕ್ಕೆ ಇಲ್ಲಿನ ಸುತ್ತೂರು ಶಾಖಾ ಮಠವು ರಾಜಕೀಯ ಶಕ್ತಿ ಕೇಂದ್ರವಾಗಿ ಮಾರ್ಪಟ್ಟಿದೆ. ಇಂದು ಸುತ್ತೂರು ಮಠಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸುತ್ತಿರುವ ಜಾರಕಿಹೊಳಿ ಅವರು ಮರಳಿ ಸಚಿವ ಸ್ಥಾನ ಪಡೆಯಲು ಸುತ್ತೂರು ಮಠದಲ್ಲಿ ಲಾಭಿ ನಡೆಸಲಿದ್ದು, ಸಚಿವ ಸ್ಥಾನಕ್ಕಾಗಿ ಸುತ್ತೂರು ಶ್ರೀಗಳ ಮೂಲಕ ಒತ್ತಡ ಹೇರುವ ಸಾಧ್ಯತೆಯಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಸುತ್ತೂರು ಮಠದ ಭೇಟಿ ಮಹತ್ವ ಪಡೆದುಕೊಂಡಿದೆ. ಸಹೋದರ ಲಖನ್ ಜಾರಕಿಹೊಳಿ ಹಾಗೂ ಅಳಿಯ ಅಂಬಿರಾವ್ ಪಾಟೀಲ್ ಜೊತೆ ಆಗಮಿಸಿ, ಪ್ರಸ್ತುತ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ. ಇತ್ತೀಚೆಗೆ ಮಾಧ್ಯಮಗಳಿಗೆ ಸಿಗದೆ ಓಡಾಡುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ತಮ್ಮ ವಿರುದ್ಧ ಇರುವ ಅತ್ಯಾಚಾರ ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಿಸಲು ಶತಪ್ರಯತ್ನ ನಡೆಸಿದ್ದಾರೆ ಎಂದೂ ಹೇಳಲಾಗಿದೆ.
(former chief minister hd kumaraswamy writes letter demanding to convene legislative session)