ಮಂಡ್ಯ ಲೋಕಸಭಾ ಕ್ಷೇತ್ರ ಹೆಚ್ಡಿ ಕುಮಾರಸ್ವಾಮಿಗೆ (HD Kumaraswamy) ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಸಿದ್ದರಾಮಯ್ಯ (Siddaramaiah) ಅವರಿಗೆ ಪ್ರತಿಷ್ಠೆಯ ಕಣವಾಗಿದೆ. ಹೀಗಾಗಿ ಎರಡು ಕ್ಷೇತ್ರಗಳಲ್ಲಿ ಇಬ್ಬರು ನಾಯಕರು ಆಪರೇಷನ್ಗೆ ಕೈಹಾಕಿದ್ದಾರೆ. ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಕುಳಿತುಕೊಂಡು ಜೆಡಿಎಸ್ (JDS) ನಾಯಕರಿಗೆ ಗಾಳ ಹಾಕುತ್ತಿದ್ದರೆ, ಮಂಡ್ಯದಲ್ಲಿ ಕುಮಾರಸ್ವಾಮಿ ಅವರು ಕಾಂಗ್ರೆಸ್ (Congress) ನಾಯಕರಿಗೆ ಗಾಳ ಹಾಕುತ್ತಿದ್ದಾರೆ.
ಇತ್ತೀಚೆಗೆ, ಚಿಕ್ಕಬಳ್ಳಾಪುರದಲ್ಲಿ ಕುಮಾರಸ್ವಾಮಿ ಆಪ್ತರೂ ಆಗಿರುವ ಜೆಡಿಎಸ್ ಮಾಜಿ ಶಾಸಕ ಕೆಪಿ ಬಚ್ಚೇಗೌಡ ಅವರು ಸಿದ್ದರಾಮಯ್ಯ ಅವರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಇದೀಗ, ವರುಣಾದಲ್ಲಿ ತನ್ನ ವಿರುದ್ಧವೇ ಸ್ಪರ್ಧಿಸಿದ್ದ ಜೆಡಿಎಸ್ ಮಾಜಿ ಶಾಸಕ ಭಾರತಿ ಶಂಕರ್ ಅವರನ್ನೇ ಸಿದ್ದರಾಮಯ್ಯ ಅವರು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಭಾರತಿ ಶಂಕರ್ ಅವರು ಕಾಂಗ್ರೆಸ್ ಸೇರ್ಪಡೆಯಾದರು. ನಾಯಕನಿಗೆ ಕಾಂಗ್ರೆಸ್ ಬಾವುಟ ನೀಡಿ ಸಿದ್ದರಾಮಯ್ಯ ಅವರು ಪಕ್ಷಕ್ಕೆ ಬರಮಾಡಿಕೊಂಡರು. ಭಾರತಿ ಶಂಕರ್ ಅವರು 2023ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಿದ್ದ ವರುಣಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಇದನ್ನೂ ಓದಿ: ಹೆಚ್‌ಡಿಕೆ ಪರಮಾಪ್ತ ಕೆಪಿ ಬಚ್ಚೇಗೌಡ, ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆ
ಇನ್ನೊಂದೆಡೆ, ಜೆಡಿಎಸ್ ಮುಖಂಡರಿಗೆ ಕಾಂಗ್ರೆಸ್ ಗಾಳ ಹಾಕುತ್ತಿರುವ ಹಿನ್ನೆಲೆ ಅಲರ್ಟ್ ಆಗಿರುವ ಕುಮಾರಸ್ವಾಮಿ, ಮಂಡ್ಯದಲ್ಲಿ ರಿವರ್ಸ್ ಆಪರೇಷನ್ಗೆ ಮುಂದಾಗಿದ್ದಾರೆ. ಸುಮಲತಾ ಅಂಬರೀಶ್ ಅವರ ಆಪ್ತರಾಗಿರುವ ಬಿಜೆಪಿ ಮುಖಂಡ ಸಚ್ಚಿದಾನಂದ ಅವರು ಈಗಾಗಲೇ ಕುಮಾರಸ್ವಾಮಿ ಬೆಂಬಲಿಸಿದ್ದಾರೆ. ಈ ನಡುವೆ, ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರನ್ನು ಜೆಡಿಎಸ್ಗೆ ಸೇರ್ಪಡೆಗೊಳಿಸುವ ಮೂಲಕ ಕೈ ನಾಯಕರಿಗೆ ಮಾಸ್ಟರ್ ಸ್ಟ್ರೋಕ್ ನೀಡಲು ಮುಂದಾಗಿದ್ದಾರೆ.
ಕಾಂಗ್ರೆಸ್ ಮುಖಂಡ, ದಿವಂಗತ ಅಂಬರೀಶ್ ಆಪ್ತ ಅಮರಾವತಿ ಚಂದ್ರಶೇಖರ್ ಅವರನ್ನು ಜೆಡಿಎಸ್ ಪಕ್ಷಕ್ಕೆ ಸೇರಿಸಿಕೊಳ್ಳಲು ಕುಮಾರಸ್ವಾಮಿ ಮುಂದಾಗಿದ್ದಾರೆ. ಈಗಾಗಲೇ ಅಮರಾವತಿ ಚಂದ್ರಶೇಖರ್ ಅವರನ್ನು ಭೇಟಿಯಾಗಿ ಕುಮಾರಸ್ವಾಮಿ ಮಾತುಕತೆ ನಡೆಸಿದ್ದರು. ಇದೀಗ ಮಂಡ್ಯದ ಖಾಸಗಿ ಹೋಟೆಲ್ನಲ್ಲಿ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮ ಆಯೋಜಿಸಲಾಗಿದೆ.
ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೌರಿಶಂಕರ್ ಬಳಿಕ ಜೆಡಿಎಸ್ ನಾಯಕರಿಲ್ಲದಂತಾಗಿತ್ತು. ಅದರಂತೆ, ಇತ್ತೀಚೆಗೆ, ಮಾಜಿ ಶಾಸಕ ಹೆಚ್ ನಿಂಗಪ್ಪ ಅವರನ್ನು ಭೇಟಿಯಾಗಿ ತಮ್ಮ ಪಕ್ಷಕ್ಕೆ ಬರುವಂತೆ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಅವರು ಆಹ್ವಾನ ನೀಡಿದ್ದರು. ಇದರ ಬೆನ್ನಲ್ಲೇ, ವೈಯಕ್ತಿಕ ಕಾರಣ ನೀಡಿ ನಿಂಗಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಇದರ ಪ್ರತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರವಾನಿಸಿದ್ದಾರೆ.
ಪ್ರತಿ ಚುನಾವಣೆಯಲ್ಲೂ ಪಕ್ಷಾಂತರ ಮಾಡುವ ಹೆಚ್.ನಿಂಗಪ್ಪ ಅವರು ಈ ಹಿಂದೆ ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾಂತರವಾಗಿದ್ದರು. ಇದೀಗ ಕಾಂಗ್ರೆಸ್ನಿಂದ ವಾಪಸ್ ಜೆಡಿಎಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ