ಬೆಂಗಳೂರು, (ನವೆಂಬರ್ 19): ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ ಬಿ.ಕೆ. ಭಟ್ಟಾಚಾರ್ಯ (83)(B.K. Bhattacharya) ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ (Siddaramaiah) ಅವರು ಹಣಕಾಸು ಸಚಿವರಾಗಿದ್ದಾಗ ಅವರೊಂದಿಗೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಇನ್ನು ಭಟ್ಟಾಚಾರ್ಯ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.
ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದ ಅವರಿಗೆ ಎರಡು ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಪತ್ನಿ ತೆರೆಸಾ ಭಟ್ಟಾಚಾರ್ಯ ಮತ್ತು ಇಬ್ಬರು ಮಕ್ಕಳು ಇದ್ದಾರೆ. ಇನ್ನು ಐಎಎಸ್ ಅಧಿಕಾರಿಗಳ ಸಂಘದ ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಬಿ.ಕೆ. ಭಟ್ಟಾಚಾರ್ಯ ಅವರು ಈ ಹಿಂದೆ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದಾಗ ಅವರೊಂದಿಗೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 1940 ಡಿಸೆಂಬರ್ 5 ರಂದು ಜನಿಸಿದ್ದ ಬಿ.ಕೆ. ಭಟ್ಟಾಚಾರ್ಯ ಅವರು 2000ನೇ ಇಸ್ವಿಯ ಡಿಸೆಂಬರ್ 30ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತರಾಗಿದ್ದರು.
Published On - 4:56 pm, Sun, 19 November 23