ಗದಗ: 11 ಲಕ್ಷ ರೂ ಲಂಚಕ್ಕೆ ಬೇಡಿಕೆ; ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಬಿಜೆಪಿ ಶಾಸಕ

ಗದಗ ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ 5 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲಕ್ಷ್ಮೇಶ್ವರದಲ್ಲಿ ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದಾಗ ಶಾಸಕ ಮತ್ತು ಇಬ್ಬರು ಪಿಎಗಳು ಸಿಕ್ಕಿಬಿದ್ದಿದ್ದಾರೆ. ಸದ್ಯ ಲೋಕಾಯುಕ್ತ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.

ಗದಗ: 11 ಲಕ್ಷ ರೂ ಲಂಚಕ್ಕೆ ಬೇಡಿಕೆ; ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಬಿಜೆಪಿ ಶಾಸಕ
ಬಿಜೆಪಿ ಶಾಸಕ ಚಂದ್ರು ಲಮಾಣಿ
Image Credit source: tv9 kannada
Edited By:

Updated on: Feb 21, 2026 | 3:39 PM

ಗದಗ, ಫೆಬ್ರವರಿ 21: ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ (bjp) ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ. 11 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಡಲಾಗಿದ್ದು, ಮುಂಗಡವಾಗಿ 5 ಲಕ್ಷ ರೂ ಕಮಿಷನ್ ಪಡೆಯುವಾಗ ಶಾಸಕ ಸೇರಿದಂತೆ ಪಿಎಗಳಾದ ಮಂಜುನಾಥ್ ಮತ್ತು ಗುರು ಸಿಕ್ಕಿಬಿದ್ದಿದ್ದು, ಮೂವರನ್ನು ವಶಕ್ಕೆ ಪಡೆದು ಲೋಕಯುಕ್ತ ಪೊಲೀಸರಿಂದ ವಿಚಾರಣೆ ಮಾಡಲಾಗುತ್ತಿದೆ.

ಗುತ್ತಿಗೆದಾರನಿಗೆ ಲಂಚ ನೀಡಲು ಒತ್ತಾಯ

ಸಣ್ಣ ನೀರಾವರಿ ಇಲಾಖೆಯ ಕ್ಲಾಸ್ 1 ಗುತ್ತಿಗೆದಾರ ವಿಜಯ್​ಗೆ ಲಂಚ ನೀಡಲು ಒತ್ತಾಯಿಸಲಾಗಿದೆ. ರಸ್ತೆ ಬದಿ ತಡೆಗೋಡೆ ನಿರ್ಮಾಣದ ಕಾಮಗಾರಿ ವಹಿಸಲು 11 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಡಲಾಗಿದೆ. ಆದರೆ 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಶಾಸಕ ಚಂದ್ರು ಮತ್ತು ಇಬ್ಬರು ಪಿಎಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: ಲಕ್ಷಾಂತರ ರೂ ಲಂಚ ಆರೋಪ: CPRI ಅಧಿಕಾರಿ ಮನೆ ಮೇಲೆ ಸಿಬಿಐ ದಾಳಿ, ಕೋಟ್ಯಂತರ ರೂ ಪತ್ತೆ

ಇನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಚಂದ್ರು ಲಮಾಣಿಗೆ ಸೇರಿದ ಬಾಲಾಜಿ ಆಸ್ಪತ್ರೆ ಮೇಲೂ ಲೋಕಾಯುಕ್ತ ದಾಳಿ ಮಾಡಿ ಪರಿಶೀಲನೆ ಮಾಡಿದೆ. ಲೋಕಾಯುಕ್ತ ಎಸ್​ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ.

ಇದು ಗುತ್ತಿಗೆದಾರರ ಹೋರಾಟಕ್ಕೆ ಸಿಕ್ಕಿರುವ ಜಯ: ಮಂಜುನಾಥ್

ಸದ್ಯ ಈ ವಿಚಾರವಾಗಿ ಟಿವಿ9 ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್​ ಹೇಳಿಕೆ ನೀಡಿದ್ದು, ಶಾಸಕರೇ ಈ ರೀತಿಯ ಕೆಲಸಕ್ಕೆ ಇಳಿಯಬಾರದು. ನಾವು ಮಾಡುತ್ತಿದ್ದ ಕಮಿಷನ್​ ಆರೋಪಕ್ಕೆ ಸಾಕ್ಷಿ ಸಿಕ್ಕಂತೆ ಆಗಿದೆ. ಇದು ಗುತ್ತಿಗೆದಾರರ ಹೋರಾಟಕ್ಕೆ ಸಿಕ್ಕಿರುವ ಜಯ. ದೂರುದಾರ ಗುತ್ತಿಗೆದಾರನ ಬೆಂಬಲಕ್ಕೆ ನಮ್ಮ ಸಂಘ ಇರಲಿದೆ ಎಂದು ಹೇಳಿದ್ದಾರೆ.

ನನ್ನ ಗಮನಕ್ಕೆ ಬಂದಿಲ್ಲ: ಛಲವಾದಿ ನಾರಾಯಣಸ್ವಾಮಿ

ವಿಧಾನಪರಿಷತ್​ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ನಮ್ಮ ಪಕ್ಷ ಎಂದೂ ಸಹ ಲಂಚ ಸ್ವೀಕಾರ ಮಾಡಿ ಅಂತ ಹೇಳಿಲ್ಲ. ಇದರ ಹಿಂದೆ ಸತ್ಯಾಸತ್ಯತೆ ಏನಿದೆ ಅಂತಾ ಪರಿಶೀಲನೆ ಮಾಡಬೇಕಿದೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:16 pm, Sat, 21 February 26

Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us