ಹೆಚ್​ಕೆ ಪಾಟೀಲ್​ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ-ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಎಚ್.ಕೆ. ಪಾಟೀಲ್, ಎನ್.ಎ. ಹ್ಯಾರಿಸ್ ಹಾಗೂ ಎಚ್.ಸಿ. ಮಹದೇವಪ್ಪ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರು ಹಾಗೂ ಪಕ್ಷದ ಪದಾಧಿಕಾರಿಗಳ ಅಸಮಾಧಾನ ತೀವ್ರಗೊಂಡಿದೆ. ಗದಗದಲ್ಲಿ 22 ನಗರಸಭೆ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದರೆ, ಬೆಂಗಳೂರಿನಲ್ಲಿ ಹ್ಯಾರಿಸ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಹೆಚ್​ಕೆ ಪಾಟೀಲ್​ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ-ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
ಎಚ್.ಕೆ. ಪಾಟೀಲ್
Image Credit source: HK Patil facebook page

Updated on: Aug 05, 2026 | 1:12 PM

ಮುಖ್ಯಾಂಶಗಳು

  • ಎಚ್.ಕೆ. ಪಾಟೀಲ್ ಪರ 22 ಸದಸ್ಯರ ರಾಜೀನಾಮೆ
  • ಹ್ಯಾರಿಸ್ ಬೆಂಬಲಿಗರಿಂದ ಬೆಂಗಳೂರಿನಲ್ಲಿ ಭಾರಿ ಪ್ರತಿಭಟನೆ
  • ಮಹದೇವಪ್ಪ ಬೆಂಬಲಿಗರಿಂದ ಸಾಮೂಹಿಕ ರಾಜೀನಾಮೆ

ಗದಗ, ಆಗಸ್ಟ್ 5: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ್ (HK Patil) ಅವರಿಗೆ ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಗದಗ-ಬೆಟಗೇರಿ (Gadag) ನಗರಸಭೆಯ 22 ಕಾಂಗ್ರೆಸ್ ಸದಸ್ಯರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ. ಮಂಗಳವಾರ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸದಸ್ಯರು, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ರಾಜೀನಾಮೆ ನೀಡಿದ 22 ಸದಸ್ಯರ ಪೈಕಿ 17 ಮಂದಿ ಕಾಂಗ್ರೆಸ್‌ನಿಂದ ಆಯ್ಕೆಯಾದ ಸದಸ್ಯರಾಗಿದ್ದು, ಉಳಿದವರು ನಾಮನಿರ್ದೇಶಿತ ಸದಸ್ಯರಾಗಿದ್ದಾರೆ. ಎಚ್.ಕೆ. ಪಾಟೀಲ್ ಅವರು ನಾಲ್ಕು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಮೂರು ಬಾರಿ ಶಾಸಕರಾಗಿ ಹಾಗೂ ಸಚಿವರಾಗಿ ರಾಜ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಹೀಗಿದ್ದರೂ ಅವರಿಗೆ ಸಚಿವ ಸ್ಥಾನ ನೀಡದಿರುವುದು ಅನ್ಯಾಯ ಎಂದು ಕಾಂಗ್ರೆಸ್ ಸದಸ್ಯರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯದ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆಯನ್ನೂ ಪ್ರತಿಭಟನಾಕಾರರು ಮುಂದಿಟ್ಟಿದ್ದಾರೆ.

‘ಎಚ್.ಕೆ. ಪಾಟೀಲ್‌ಗೆ ಸಚಿವ ಸ್ಥಾನ ಸಿಗುವವರೆಗೂ ಶರ್ಟ್ ಧರಿಸಲ್ಲ’

ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನಗೊಂಡಿರುವ ಅವರ ಬೆಂಬಲಿಗ ರಾಚಪ್ಪ ಗಡಾದ್, ಪಾಟೀಲ್ ಅವರಿಗೆ ಸಚಿವ ಸ್ಥಾನ ಸಿಗುವವರೆಗೂ ಶರ್ಟ್ ಧರಿಸುವುದಿಲ್ಲ ಎಂದು ಮಂಗಳವಾರ ಪ್ರತಿಜ್ಞೆ ಮಾಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೋಮವಾರ ಬಿಡುಗಡೆ ಮಾಡಿದ ಸಚಿವರ ಅಂತಿಮ ಪಟ್ಟಿಯಲ್ಲಿ ಪಾಟೀಲ್ ಅವರ ಹೆಸರು ಇಲ್ಲದಿರುವುದು ಬೇಸರ ತಂದಿದೆ ಎಂದು ಹೇಳಿದ ಅವರು, ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಶರ್ಟ್ ತೆಗೆದು ಪ್ರತಿಜ್ಞೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಎನ್.ಎ. ಹ್ಯಾರಿಸ್ ಬೆಂಬಲಿಗರ ಪ್ರತಿಭಟನೆ

ಇತ್ತ ಬೆಂಗಳೂರಿನಲ್ಲಿ ಶಾಂತಿನಗರ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರನ್ನು ಕರ್ನಾಟಕ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿ ನೂರಾರು ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಮಂಗಳವಾರ ಬೆಳಗ್ಗೆ ಬ್ರಿಗೇಡ್ ರಸ್ತೆಯ ವಾರ್ ಮೆಮೋರಿಯಲ್ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಹಣೆಗೆ ಮತ್ತು ಕೈಗಳಿಗೆ ಕಪ್ಪು ಪಟ್ಟಿ ಧರಿಸಿ, ಶಾಸಕರ ಭಾವಚಿತ್ರಗಳು ಹಾಗೂ ಫಲಕಗಳನ್ನು ಪ್ರದರ್ಶಿಸಿ ಘೋಷಣೆಗಳನ್ನು ಕೂಗಿದರು.

ರಸ್ತೆ ತಡೆಗೆ ಪ್ರತಿಭಟನಾಕಾರರು ಮುಂದಾದ ಹಿನ್ನೆಲೆಯಲ್ಲಿ ಅಶೋಕನಗರ ಪೊಲೀಸರು ಸುಮಾರು 20 ಮಂದಿಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ.

ಮಹದೇವಪ್ಪ ಬೆಂಬಲಿಗರಿಂದಲೂ ಸಾಮೂಹಿಕ ರಾಜೀನಾಮೆ

ಟಿ ನರಸೀಪುರ ಕ್ಷೇತ್ರದ ಶಾಸಕ ಎಚ್.ಸಿ. ಮಹದೇವಪ್ಪ ಅವರಿಗೆ ಸಚಿವ ಸ್ಥಾನ ನೀಡದಿರುವುದಕ್ಕೂ ಅಸಮಾಧಾನ ವ್ಯಕ್ತವಾಗಿದೆ. ನೂತನ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಟಿ. ನರಸೀಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರು ಹಾಗೂ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ.

ತಮ್ಮ ನಾಯಕನಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿರುವ ಅವರು, ರಾಜೀನಾಮೆ ಪತ್ರಗಳನ್ನು ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್ ಅವರಿಗೆ ಕಳುಹಿಸಿದ್ದಾರೆ. ಹಿರಿಯ ದಲಿತ ನಾಯಕ ಹಾಗೂ ಪಕ್ಷದ ನಿಷ್ಠಾವಂತ ಹಿರಿಯ ಮುಖಂಡರಾಗಿರುವ ಎಚ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟ ವಿಸ್ತರಣೆಯಲ್ಲಿ ಕಡೆಗಣಿಸಲಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us