AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ರಾಜ್ಯ ಸರ್ಕಾರ: ಅನ್ನದಾನೀಶ್ವರ ಶ್ರೀಗಳಿದ್ದಲ್ಲಿಗೇ ತೆರಳಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ರಾಜ್ಯೋತ್ಸವ ಪ್ರಶಸ್ತಿ ಪ್ರದಾನದಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲಾಗಿದ್ದು, ಗದಗ ಜಿಲ್ಲೆಯ ಮುಂಡರಗಿಯ ಜಗದ್ಗುರು ಅನ್ನದಾನೀಶ್ವರ ಶ್ರೀಗಳಿಗೆ ಅವರಿದ್ದಲ್ಲಿಗೇ ತೆರಳಿ 2026ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾಹಿತ್ಯ, ಶಿಕ್ಷಣ ಹಾಗೂ ಸಾಮಾಜಿಕ ಸೇವೆಗಾಗಿ ಈ ಪ್ರಶಸ್ತಿ ಘೋಷಿಸಲಾಗಿತ್ತು. ಭವ್ಯ ಮೆರವಣಿಗೆಯೊಂದಿಗೆ ನಡೆದ ಸಮಾರಂಭದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು.

ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ರಾಜ್ಯ ಸರ್ಕಾರ: ಅನ್ನದಾನೀಶ್ವರ ಶ್ರೀಗಳಿದ್ದಲ್ಲಿಗೇ ತೆರಳಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಮುಂಡರಗಿಯ ಜಗದ್ಗುರು ಅನ್ನದಾನೀಶ್ವರ ಶ್ರೀImage Credit source: Tv9 kannada
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Nov 29, 2026 | 3:16 PM

Share

ಗದಗ, ನ,29: ಸಾಮಾನ್ಯವಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ. ಆದರೆ ಈ ಬಾರಿ ರಾಜ್ಯ ಸರ್ಕಾರ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದು, ಪ್ರಶಸ್ತಿ ಪುರಸ್ಕೃತರೇ ಬೆಂಗಳೂರಿಗೆ ಬರಬೇಕು ಎಂಬ ನಿಯಮಕ್ಕೆ ಬ್ರೇಕ್ ಹಾಕಿ ಸಾಧಕರ ಬಳಿಗೇ ತೆರಳಿ ಪ್ರಶಸ್ತಿ ಪ್ರದಾನ ಮಾಡಿದೆ. ಗದಗ ಜಿಲ್ಲೆಯ ಮುಂಡರಗಿಯ ಜಗದ್ಗುರು ಅನ್ನದಾನೀಶ್ವರ ಶ್ರೀಗಳಿಗೆ ಅವರಿದ್ದಲ್ಲಿಗೇ ಬಂದು 2026ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಬೆಂಗಳೂರಿಗೆ ತೆರಳಲು ಸಾಧ್ಯವಾಗದ ಶ್ರೀಗಳಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮುಂಡರಗಿಯಲ್ಲಿಯೇ ವಿಶೇಷ ಸಮಾರಂಭ ಆಯೋಜಿಸಿ ಸರ್ಕಾರದ ಪರವಾಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಪ್ರದಾನಕ್ಕೂ ಮುನ್ನ ಮುಂಡರಗಿ ಪಟ್ಟಣದ ಅನ್ನದಾನೀಶ್ವರ ಸಂಸ್ಥಾನಮಠದಿಂದ ಜೆ.ಎ. ಕಾಲೇಜು ಮೈದಾನದವರೆಗೆ ಭವ್ಯ ಮೆರವಣಿಗೆ ನಡೆಯಿತು. ಸಾರೋಟಿನಲ್ಲಿ ಭುವನೇಶ್ವರಿ ದೇವಿಯ ಮೂರ್ತಿ ಹಾಗೂ ಪ್ರಶಸ್ತಿ ಪುರಸ್ಕೃತ ಜಗದ್ಗುರುಗಳ ಮೆರವಣಿಗೆ ಭಕ್ತರ ಕಣ್ಮನ ಸೆಳೆಯಿತು.

ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳ ಪ್ರದರ್ಶನ, ತಾಳವಾದ್ಯಗಳ ನಿನಾದ ಹಾಗೂ ವಿದ್ಯಾರ್ಥಿಗಳ ಕೈಯಲ್ಲಿ ರಾರಾಜಿಸಿದ ಕನ್ನಡ ಬಾವುಟಗಳು ಸಂಭ್ರಮವನ್ನು ಇಮ್ಮಡಿಗೊಳಿಸಿದವು. ಮಾರ್ಗದುದ್ದಕ್ಕೂ ಭುವನೇಶ್ವರಿ ದೇವಿಯ ಮೂರ್ತಿ ಹಾಗೂ ಶ್ರೀಗಳ ಮೇಲೆ ಭಕ್ತರು ಪುಷ್ಪವೃಷ್ಟಿಗೈದರು. ಮಹಿಳೆಯರು, ವಿದ್ಯಾರ್ಥಿಗಳು, ಗಣ್ಯರು, ನಾಗರಿಕರು ಹಾಗೂ ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡು ಜಗದ್ಗುರುಗಳಿಗೆ ಗೌರವ ಸಮರ್ಪಿಸಿದರು.

ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ, “ಜಗದ್ಗುರು ಅನ್ನದಾನೀಶ್ವರ ಶ್ರೀಗಳಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ಸರ್ಕಾರಕ್ಕೇ ಒಂದು ಒಳ್ಳೆಯ ಹೆಸರು ತಂದಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ಬಸವರಾಜ ಬಳ್ಳಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಮಂಡ್ಯ ಕೈಗಾರಿಕೆ ಜಟಾಪಟಿ: ಜನವರಿ 10ರೊಳಗೆ ರೆಕ್ಟ್ ಆ್ಯಂಗಲ್ 100 ಎಕರೆ ಭೂಮಿ ಕೊಡಿ ಎಂದು ಸರ್ಕಾರಕ್ಕೆ ಹೆಚ್.ಡಿ. ಕುಮಾರಸ್ವಾಮಿ ಡೆಡ್‌ಲೈನ್

ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆ, ಶಿಕ್ಷಣದ ಮೂಲಕ ಮೂಡಿಸಿದ ಜಾಗೃತಿ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಶ್ರೀಗಳಿಗೆ ಈ ಪ್ರಶಸ್ತಿ ಘೋಷಿಸಲಾಗಿತ್ತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶ್ರೀಗಳು, “ಸಾಕಷ್ಟು ಹಿಂದುಳಿದ ಪ್ರದೇಶಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದೇವೆ. ನಮ್ಮ ಶಿಕ್ಷಣ ಸಂಸ್ಥೆಗಳ ಮೂಲಕ ಬಡ ಮಕ್ಕಳಿಗೆ ಶಿಕ್ಷಣ ನೀಡುವ ಕಾಯಕವನ್ನು ನಿರಂತರವಾಗಿ ಮಾಡುತ್ತಿದ್ದೇವೆ” ಎಂದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More