
ಗದಗ, ನ,29: ಸಾಮಾನ್ಯವಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ. ಆದರೆ ಈ ಬಾರಿ ರಾಜ್ಯ ಸರ್ಕಾರ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದು, ಪ್ರಶಸ್ತಿ ಪುರಸ್ಕೃತರೇ ಬೆಂಗಳೂರಿಗೆ ಬರಬೇಕು ಎಂಬ ನಿಯಮಕ್ಕೆ ಬ್ರೇಕ್ ಹಾಕಿ ಸಾಧಕರ ಬಳಿಗೇ ತೆರಳಿ ಪ್ರಶಸ್ತಿ ಪ್ರದಾನ ಮಾಡಿದೆ. ಗದಗ ಜಿಲ್ಲೆಯ ಮುಂಡರಗಿಯ ಜಗದ್ಗುರು ಅನ್ನದಾನೀಶ್ವರ ಶ್ರೀಗಳಿಗೆ ಅವರಿದ್ದಲ್ಲಿಗೇ ಬಂದು 2026ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಬೆಂಗಳೂರಿಗೆ ತೆರಳಲು ಸಾಧ್ಯವಾಗದ ಶ್ರೀಗಳಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮುಂಡರಗಿಯಲ್ಲಿಯೇ ವಿಶೇಷ ಸಮಾರಂಭ ಆಯೋಜಿಸಿ ಸರ್ಕಾರದ ಪರವಾಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಪ್ರದಾನಕ್ಕೂ ಮುನ್ನ ಮುಂಡರಗಿ ಪಟ್ಟಣದ ಅನ್ನದಾನೀಶ್ವರ ಸಂಸ್ಥಾನಮಠದಿಂದ ಜೆ.ಎ. ಕಾಲೇಜು ಮೈದಾನದವರೆಗೆ ಭವ್ಯ ಮೆರವಣಿಗೆ ನಡೆಯಿತು. ಸಾರೋಟಿನಲ್ಲಿ ಭುವನೇಶ್ವರಿ ದೇವಿಯ ಮೂರ್ತಿ ಹಾಗೂ ಪ್ರಶಸ್ತಿ ಪುರಸ್ಕೃತ ಜಗದ್ಗುರುಗಳ ಮೆರವಣಿಗೆ ಭಕ್ತರ ಕಣ್ಮನ ಸೆಳೆಯಿತು.
ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳ ಪ್ರದರ್ಶನ, ತಾಳವಾದ್ಯಗಳ ನಿನಾದ ಹಾಗೂ ವಿದ್ಯಾರ್ಥಿಗಳ ಕೈಯಲ್ಲಿ ರಾರಾಜಿಸಿದ ಕನ್ನಡ ಬಾವುಟಗಳು ಸಂಭ್ರಮವನ್ನು ಇಮ್ಮಡಿಗೊಳಿಸಿದವು. ಮಾರ್ಗದುದ್ದಕ್ಕೂ ಭುವನೇಶ್ವರಿ ದೇವಿಯ ಮೂರ್ತಿ ಹಾಗೂ ಶ್ರೀಗಳ ಮೇಲೆ ಭಕ್ತರು ಪುಷ್ಪವೃಷ್ಟಿಗೈದರು. ಮಹಿಳೆಯರು, ವಿದ್ಯಾರ್ಥಿಗಳು, ಗಣ್ಯರು, ನಾಗರಿಕರು ಹಾಗೂ ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡು ಜಗದ್ಗುರುಗಳಿಗೆ ಗೌರವ ಸಮರ್ಪಿಸಿದರು.
ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ, “ಜಗದ್ಗುರು ಅನ್ನದಾನೀಶ್ವರ ಶ್ರೀಗಳಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ಸರ್ಕಾರಕ್ಕೇ ಒಂದು ಒಳ್ಳೆಯ ಹೆಸರು ತಂದಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ಬಸವರಾಜ ಬಳ್ಳಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆ, ಶಿಕ್ಷಣದ ಮೂಲಕ ಮೂಡಿಸಿದ ಜಾಗೃತಿ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಶ್ರೀಗಳಿಗೆ ಈ ಪ್ರಶಸ್ತಿ ಘೋಷಿಸಲಾಗಿತ್ತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶ್ರೀಗಳು, “ಸಾಕಷ್ಟು ಹಿಂದುಳಿದ ಪ್ರದೇಶಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದೇವೆ. ನಮ್ಮ ಶಿಕ್ಷಣ ಸಂಸ್ಥೆಗಳ ಮೂಲಕ ಬಡ ಮಕ್ಕಳಿಗೆ ಶಿಕ್ಷಣ ನೀಡುವ ಕಾಯಕವನ್ನು ನಿರಂತರವಾಗಿ ಮಾಡುತ್ತಿದ್ದೇವೆ” ಎಂದರು.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ