ರೈತರಿಗೆ ಗುಡ್ ನ್ಯೂಸ್: ಬೆಳೆ ಪರಿಹಾರ ಹಣ ಬಿಡುಗಡೆ, ಯಾವ್ಯಾವ ಬೆಳೆಗೆ ಎಷ್ಟೆಷ್ಟು?
ರಾಜ್ಯ ಸರ್ಕಾರ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಅತಿವೃಷ್ಟಿಯಿಂದ ಬೆಳೆ ಹಾನಿ ಸಂಬಂಧ ಸಂಕಷ್ಟಕ್ಕೆ ಸಿಲುಕಿದ್ದ ರೈತರ ನೆರವಿಗೆ ಸಿದ್ದರಾಮಯ್ಯ ಸರ್ಕಾರ ಬಂದಿದ್ದು, ಕರ್ನಾಟಕದಲ್ಲಿ ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು 1033.60 ಕೋಟಿ ರೂ.ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಲಾಗಿದೆ. ಹಾಗಾದ್ರೆ, ಯಾವೆಲ್ಲಾ ಜಮೀನಿಗೆ ಎಷ್ಟೆಷ್ಟು ಪರಿಹಾರ ಹಣ ಎನ್ನುವ ಮಾಹಿತಿ ಈ ಇಲ್ಲಿದೆ.

ಬೆಂಗಳೂರು, (ನವೆಂಬರ್ 27): ಕರ್ನಾಟಕದಲ್ಲಿ ಅತಿವೃಷ್ಟಿಯಿಂದಾಗಿ ಹಾನಿಯಾದ ಬೆಳೆಗೆ (crop loss compensation) ಸಿದ್ದರಾಮಯ್ಯ (Siddaramaiah) ಸರ್ಕಾರ ಪರಿಹಾರ ಹಣ ಬಿಡುಗಡೆ ಮಾಡಿದೆ. ನಿರಂತರ ಮಳೆಯಿಂದಾಗಿ ಬಂಡವಾಳ ಹಾಕಿ ಬೆಳೆದ ಬೆಳೆ ಹಾಳಾಗಿದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತರ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದ್ದು, ಬೆಳೆ ಹಾನಿ ಸಂಭವಿಸಿದ ಒಟ್ಟು 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ. 1033.60 ಕೋಟಿ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಿದೆ. ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇನ್ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಿದ್ದು, ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ 1033.60 ಕೋಟಿ ರೂಪಾಯಿನ್ನು ಸಿಎಂ ಸಿದ್ದರಾಮಯ್ಯನವರು ಇಂದು (ನವೆಂಬರ್ 27) ಇನ್ಪುಟ್ ಸಬ್ಸಿಡಿ ವಿತರಿಸಿದರು.
ಗೃಹಕಚೇರಿ ಕೃಷ್ಣಾದಲ್ಲಿಂದು ಸಿಎಂ ಸಿದ್ದರಾಮಯ್ಯ, ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ. 1033.60 ಕೋಟಿ ಹೆಚ್ಚುವರಿ ಪರಿಹಾರ ಒದಗಿಸುವ ಕಾರ್ಯಕ್ಕೆ ಬಟನ್ ಒತ್ತುವ ಮೂಲಕ ಚಾಲನೆ ನೀಡಿದರು.ಬಳಿಕ ಮಾಧ್ಯಮದವರೊಂದಿಗೆ ಸಿದ್ದರಾಮಯ್ಯ, ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ 1033.60 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು, ಇಂದು ಚಾಲನೆ ನೀಡಲಾಗಿದೆ ಎಂದರು.
ಎಷ್ಟೆಷ್ಟು ಪರಿಹಾರ?
ರಾಜ್ಯ ಸರ್ಕಾರ ರೈತರ ಪರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇನ್ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಿದೆ. ಗರಿಷ್ಟ 2 ಹೆಕ್ಟೇರ್ಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ 8500 ರೂ. ರಿಂದ 17 ಸಾವಿರ ರೂ., ನೀರಾವರಿ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ 17ಸಾವಿರದಿಂದ ರೂ.25,500 ರೂ. ಹಾಗೂ ಬಹು ವಾರ್ಷಿಕ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ .22,500 ರೂ.ದಿಂದ 31 ಸಾವಿರ ರೂ.ಗೆ ಹೆಚ್ಚಿಸಲಾಗಿದೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.
ಬೆಳೆ ಹಾನಿಯಿಂದ ನಷ್ಟಕ್ಕೆ ಒಳಗಾಗಿರುವ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ.1,033.60 ಕೋಟಿ ಹೆಚ್ಚುವರಿ ಪರಿಹಾರ ಒದಗಿಸುವ ಕಾರ್ಯಕ್ಕೆ ಇಂದು ಚಾಲನೆ ನೀಡಿದೆ. pic.twitter.com/y6j7eb8zT2
— Siddaramaiah (@siddaramaiah) November 27, 2025
ಎಸ್ಡಿಆರ್ಎಫ್ ಮಾನದಂಡಗಳ ಪ್ರಕಾರ 14.24 ಲಕ್ಷ ರೈತರಿಗೆ ಇನ್ಪುಟ್ ಸಬ್ಸಿಡಿಯಾಗಿ ಈಗಾಗಲೇ 1218.03 ಕೋಟಿ ರೂ. ವಿತರಿಸಲಾಗಿದೆ. ಇದರ ಜೊತೆಗೆ ರಾಜ್ಯ ನಿಧಿಯಿಂದ 1033.60 ಕೋಟಿ ರೂ. ಟಾಪ್ ಅಪ್ ರೂಪದಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಒಟ್ಟಾರೆಯಾಗಿ ಪರಿಹಾರ ಪಾವತಿ ಪ್ರಕ್ರಿಯೆಯಲ್ಲಿರುವ ಪಾವತಿಗಳನ್ನು ಒಳಗೊಂಡಂತೆ 2251.63 ಕೋಟಿ ರೂ. ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಆಗಲಿದೆ ಎಂದರು.
ಮುಂಗಾರು ಅವಧಿಯಲ್ಲಿ ದಾಖಲೆಯ 82.56 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಆದರೆ ಜೂನ್ನಿಂದ ಸೆಪ್ಟಂಬರ್ ಅವಧಿಯಲ್ಲಿ ಉಂಟಾದ ಅತಿವೃಷ್ಟಿಯಿಂದಾಗಿ 14.58 ಲಕ್ಷ ಹೆಕ್ಟೇರ್ಗಿಂತ ಹೆಚ್ಚಿನ ಪ್ರದೇಶದ ಬೆಳೆ ಹಾನಿ ಉಂಟಾಗಿದ್ದು, ಇದರಿಂದ ಅಂದಾಜು ರೂ.10,748 ಕೋಟಿ ಬೆಳೆ ಹಾನಿ ಅಂದಾಜಿಸಲಾಗಿದೆ. ಮುಖ್ಯವಾಗಿ ತೊಗರಿ ಬೇಳೆ 5.36 ಲಕ್ಷ ಹೆಕ್ಟೇರ್, ಹೆಸರು ಕಾಳು 2.63 ಲಕ್ಷ ಹೆಕ್ಟೇರ್, ಹತ್ತಿ 2.68 ಲಕ್ಷ ಹೆಕ್ಟೇರ್ ಮತ್ತು ಮೆಕ್ಕೆಜೋಳ 1.21 ಲಕ್ಷ ಹೆಕ್ಟೇರ್ ಹಾನಿ ಉಂಟಾಗಿದೆ.
ಇನ್ನು ಬೆಳೆ ನಷ್ಟದ ಗ್ರಾಮವಾರು ಪಟ್ಟಿಯನ್ನು ಗ್ರಾಮ ಚಾವಡಿಗಳಲ್ಲಿ ಹಾಗೂ ಆನ್ಲೈನ್ನಲ್ಲಿ ಪ್ರಕಟಿಸಿ, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ಬಳಿಕ ನಷ್ಟ ಅನುಭವಿಸಿದ ರೈತರ ಪಟ್ಟಿಯನ್ನು ಅಂತಿಮಗೊಳಿಸಿದ ಬಳಿಕ ಇನ್ಪುಟ್ ಸಬ್ಸಿಡಿಯನ್ನು ನೇರವಾಗಿ ರೈತರಿಗೆ ವರ್ಗಾಯಿಸುವ ಪ್ರಕ್ರಿಯೆ ನಡೆಯಲಿದೆ.
Published On - 6:05 pm, Thu, 27 November 25




